ಮಾದಿಗ ಮೀಸಲಾತಿ ಹೋರಾಟ ಸಮಿತಿ ಧರಣಿ
ಕ.ಪ್ರ. ವಾರ್ತೆ ರಾಯಚೂರು ಜೂ.27
ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಧರಣಿ ಸತ್ಯಾಗ್ರಹ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ, ಮಾದಿಗ ಜನಾಂಗಕ್ಕೆ ಒಳಮೀಸಲಾತಿಗೆ ಸರ್ಕಾರ ರಚಿಸಿದ್ದ ನ್ಯಾ. ಸದಾಶಿವ ಆಯೋಗವು ವರದಿ ಸಲ್ಲಿಸಿ ವರ್ಷವಾಗುತ್ತಾ ಬಂದರೂ ಸರ್ಕಾರ ವರದಿ ಅನುಷ್ಠಾನಕ್ಕೆ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದರು.
ಆಯೋಗದ ವರದಿ ಜಾರಿ ಅಗತ್ಯ: ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ವಿವಿಧ ಮಾದಿಗ ಜಮಾಸದ ಸಂಘಟನೆಗಳು ಹೋರಾಟ ನಡೆಸಿದರೂ ಸರ್ಕಾರ ಕಿವಿಗೊಡುತ್ತಿಲ್ಲ. ಬದಲಿಗೆ ಹೋರಾಟ ಹತ್ತಿಕ್ಕುವ ಕಾರ್ಯ ಮಾಡಿದೆ. ಮಾದಿಗ ಜನಾಂಗದವರು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದ್ದು, ಈ ಹಿನ್ನೆಲೆಯಲ್ಲಿ ಈ ಜನಾಂಗದವರನ್ನು ಎಲ್ಲ ರೀತಿಯಿಂದ ಪ್ರಗತಿಯತ್ತ ಕೊಂಡೊಯ್ಯುವ ಅವಶ್ಯಕತೆಯಿದೆ. ಅದಕ್ಕಾಗಿ ಸದಾಶಿವ ಆಯೋಗದ ವರದಿ ಜಾರಿ ತೀರಾ ಅವಶ್ಯ ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮಾದಿಗ ಜನಾಂಗದ ಮೇಲಾಗುತ್ತಿರುವ ದೌರ್ಜನ್ಯ ತಡೆಯಬೇಕು. ಮಾದಿಗರು ವಾಸವಾಗಿರುವ ಬಡಾವಣೆಗಳಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಭೂರಹಿತ ಮಾದಿಗ ಜನಾಂಗದವರಿಗೆ ಸರ್ಕಾರಿ ಜಮೀನು ಹಂಚಿಕೆ ಮಾಡಬೇಕು. ವಿದ್ಯಾವಂತ ನಿರುದ್ಯೋಗಿಗಳಿಗೆ ಬ್ಯಾಕ್ಲಾಗ್ ಹುದ್ದೆಗಳಿಗೆ ನೌಕರಿ ನೀಡುವ ಕಾರ್ಯ ಸರ್ಕಾರ ಮಾಡಬೇಕೆಂದು ಆಗ್ರಹಿಸಿದರು.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ತಾಲೂಕಿನ ಕಲ್ಮಲಾ, ಜೇಗರಕಲ್ ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿ ಜನಾಂಗಕ್ಕೆ ಸೇರದವರು ವಿವಿಧ ಯೋಜನೆಗಳ ಲಾಭ ಪಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಧರಣಿ ನಿರತರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಆರೋಗ್ಯಪ್ಪ ಪನ್ನೂರು, ಶರಣಬಸವ, ಜೆ.ಬಿ.ರಾಜು, ಹೇಮರಾಜ್ ಅಸ್ಕಿಹಾಳ್ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

