ರಾಯಚೂರು

ನಿಲ್ಲದ ವಾಂತಿ-ಭೇದಿ: ಆಸ್ಪತ್ರೆಗೆ 35 ರೋಗಿಗಳು

Published On :

ಸಿಂಧನೂರು: ತಾಲೂಕಿನ ಹಂಪನಾಳ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಪ್ರಾರಂಭವಾದ ವಾಂತಿ- ಭೇದಿ ಇನ್ನೂ ಹತೋಟಿಗೆ ಬಾರದಿರುವುದು ಗ್ರಾಮಸ್ಥರನ್ನು ತಲ್ಲಣಗೊಳಿಸಿದೆ. 35ಕ್ಕೂ ಅಧಿಕ ರೋಗಿಗಳು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಲ್ಲಿಯವರೆಗೆ ಮಸ್ಕಿ, ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ 150ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಗ್ರಾಮದ ಶಾಲೆಯನ್ನು ಆಸ್ಪತ್ರೆಯನ್ನಾಗಿ ಮಾಡಿಕೊಂಡು ನಿರಂತರ ಚಿಕಿತ್ಸೆ ನೀಡುತ್ತಿದ್ದರೂ ಪರಿಸ್ಥಿತಿ ಹತೋಟಿಗೆ ಬರುತ್ತಿಲ್ಲ ಎನ್ನುವುದು ಪ್ರತಿನಿತ್ಯ ಹೊಸ ಹೊಸ ರೋಗಿಗಳು ದಾಖಲಾಗುತ್ತಿರುವುದೇ ಸಾಕ್ಷಿ.
ತಾಲೂಕು ಆರೋಗ್ಯಾಧಿಕಾರಿಗಳು ಪರಿಸ್ಥಿತಿ ಹತೋಟಿಗೆ ಬರುತ್ತಿದೆ ಎಂದು ಹೇಳಿಕೊಂಡಿದ್ದಾದರೂ ಇಲ್ಲಿಯವರೆಗೆ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿರುವುದಿಲ್ಲ ಎಂದು ಗ್ರಾಮಸ್ಥರು ನೋವು ತೋಡಿಕೊಳ್ಳುತ್ತಿದ್ದಾರೆ.
ನೀರಿಲ್ಲದ ಆಸ್ಪತ್ರೆ: ವಾಂತಿ- ಭೇದಿಯಿಂದ ನರಳುತ್ತಿರುವವರಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಶೌಚಾಲಯಕ್ಕೆ ನೀರಿಲ್ಲದಿರುವುದರಿಂದ ರೋಗಿಗಳ ಸಹಾಯಕರನ್ನು ಸಿಟ್ಟಿಗೆಬ್ಬಿಸಿದೆ.
 ಆಸ್ಪತ್ರೆಯ ಎಲ್ಲ ವಾರ್ಡ್‌ಗಳಲ್ಲಿ ಶೌಚಾಲಯಗಳು ಗಬ್ಬು ನಾರುತ್ತಿವೆ. ಚಿಕಿತ್ಸೆ ಪಡೆಯಲು ಬಂದ ರೋಗಿಗಳು ಮತ್ತಷ್ಟು ತೊಂದರೆಗೆ ಒಳಗಾಗಿದ್ದಾರೆ.
ಜಿಪಂ ಸದಸ್ಯೆ ಬಸಮ್ಮ ಭೇಟಿ: ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಪರಿಸ್ಥಿತಿಯನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಬಸಮ್ಮ ಕುಂಟೋಜಿ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಆಸ್ಪತ್ರೆಯಲ್ಲಿ ನೀರಿಲ್ಲದ್ದನ್ನು ಕಣ್ಣಾರೆ ನೋಡಿದ ಅವರು ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜೊತೆಗೆ ಮಾತನಾಡಿ, ತಕ್ಷಣ ಪೈಪ್‌ಲೈನ್ ಹಾಕಿಸಿ ನೀರಿನ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.