ರಾಯಚೂರು

ಅಧಿಕಾರಿ ಅಸಡ್ಡೆ: ಜನಪ್ರತಿನಿಧಿ ಆಕ್ರೋಶ

Published On :

ಕನ್ನಡಪ್ರಭ ವಾರ್ತೆ ರಾಯಚೂರು ಮಾ.19
ಅಧಿಕಾರಿಗಳ ಅಸಮರ್ಪಕ ಕಾರ್ಯನಿರ್ವಹಣೆ ಮತ್ತು ಸಭೆಗೆ ಗೈರು ಹಾಜರಾಗುವವರ ವಿರುದ್ಧ ತೀವ್ರ ಬೇಸರ ವ್ಯಕ್ತಪಡಿಸಿದ ಜಿಪಂ ಅಧ್ಯಕ್ಷೆ ಲಲಿತಮ್ಮ ಅವರು ಸಭೆಗೆ ಹಾಜರಾಗದವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಜಿಪಂ ಅಧಿಕಾರಿಗಳಿಗೆ ಸೂಚಿಸಿದರು.
ನಗರದಲ್ಲಿ ಮಂಗಳವಾರ ನಡೆದ ಜಿಪಂ ಸಭೆಯ ವೇಳೆ ಅಧಿಕಾರಿಗಳ ಗೈರು ಹಾಜರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲೆಯು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅವುಗಳ ನಿವಾರಣೆ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕಿದೆ. ಆದರೆ ಸಭೆಗೆ ಹಾಜರಾಗದೇ ಅಗೌರವ ತೋರಿದ್ದು ಅಂಥವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಅಸಮಾಧಾನ: ಜಿಪಂ ಸಭೆಗಳಿಗೆ ಅಸಮರ್ಪಕ ಮಾಹಿತಿಯೊಂದಿಗೆ ಅಧಿಕಾರಿಗಳು ಹಾಜರಾಗುತ್ತಿರುವ ಬಗ್ಗೆ ಅಧ್ಯಕ್ಷೆ ಲಲಿತಮ್ಮ ಅಸಮಾಧಾನ ವ್ಯಕ್ತಪಡಿಸಿ, ಅಂಥವರು ಸಭೆಗೆ ಹಾಜರಾಗದೇ ದೂರ ಉಳಿಯುವುದು ಒಳಿತು ಎಂದು ಕಿಡಿಕಾರಿದರು. ಅಧಿಕಾರಿಗಳು ಕಾರ್ಯನಿರ್ವಹಿಸಿದ ಪ್ರಗತಿಯ ವಿವರವನ್ನು ಆಯಾ ತಿಂಗಳ 5ನೇ ತಾರೀಕಿನೊಳಗೆ ಜಿಪಂಗೆ ಸಲ್ಲಿಸಬೇಕು ಎಂದು ಸೂಚಿಸಿದರು. ಮುಂದಿನ ದಿನಗಳಲ್ಲಿ ನಡೆಯುವ ಸಭೆಗಳಿಗೆ ಆಗಮಿಸುವ ಅಧಿಕಾರಿಗಳ ಹಾಜರಾತಿ ಪುಸ್ತಕ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ನಂತರ ಮಾತನಾಡಿದ ಜಿಪಂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಸಂಬಂಧಿಸಿ ಮಾಹಿತಿ ನೀಡಿ, # 21ಕೋಟಿ ಕುಡಿಯುವ ನೀರು ನಿರ್ವಹಣೆಯ ಯೋಜನೆ ಸಿದ್ಧಪಡಿಸಲಾಗಿದೆ ಎಂದು ವಿವರಿಸಿದರು.ಪ್ರಸ್ತಾವನೆ: ಈಗಾಗಲೇ ರಾಜ್ಯ ಸರ್ಕಾರಕ್ಕೆ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಅಗತ್ಯವಿರುವ # 21ಕೋಟಿ ಅನುದಾನಕ್ಕಾಗಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಈ ವೇಳೆ ಮಾತನಾಡಿದ ಸ್ಥಾಯಿ ಸಮಿತಿ ಸದಸ್ಯ ಜಾಫರ್ ಪಟೇಲ್, ನದಿ ನೀರನ್ನು ಅವಲಂಬಿಸಿದ ಗ್ರಾಮಗಳ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಲು ಆದೇಶಿಸಿದರು. ಇದಕ್ಕೆ ಅಧಿಕಾರಿಗಳು ಸದ್ಯ ನದಿ ತೀರದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗಿದೆ. ನದಿಗೆ ನೀರು ಹರಿಸುವ ಮೂಲಕ ಕುಡಿಯುವ ನೀರಿನ ಸಂಗ್ರಹಣೆ ಮತ್ತು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಕೊಳವೆಬಾವಿಗಳ ಮೂಲಕವೂ ನೀರು ಒದಗಿಸುವ ಚಿಂತನೆ ಮಾಡಲಾಗಿದೆ ಎಂದು ವಿವರಿಸಿದರು.
ಅನುದಾನ: ಲಿಂಗಸ್ಗೂರು ಶಾಸಕರ ಶಾಲೆಯ ಖರ್ಚುವೆಚ್ಚ ಬಿಡುಗಡೆ ಮಾಡದಿರುವ ಬಗ್ಗೆ ಜಿಪಂ ಸದಸ್ಯ ಭೂಪನಗೌಡ ಕರಡಕಲ್ ಸಭೆಯ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಡಿಪಿಐ ಪರಮೇಶ್ವರ್ ಅವರು, ಪೂರ್ವಾನುಮೋದನೆ ಪಡೆಯದೇ ಶಾಲೆಯಲ್ಲಿ ಹಣ ವೆಚ್ಚ ಮಾಡಿರುವುದರಿಂದಲೇ ಅನುದಾನ ಬಿಡುಗಡೆ ವಿಳಂಬಕ್ಕೆ ಕಾರಣ ಎಂದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಸಭೆಯಲ್ಲಿ ಮಾತನಾಡಿ, ನದಿಯಲ್ಲಿ ನೀರು ಲಭ್ಯವಿಲ್ಲದಿರುವುದರಿಂದ ರೈತರು ಬತ್ತದ ಬಿತ್ತನೆಗೆ ಆಸಕ್ತಿ ತೋರಿಲ್ಲ. ಕಾರಣ ಬತ್ತದ ಇಳುವರಿಯಲ್ಲಿ ಕುಸಿತವಾಗಲಿದೆ ಎಂದು ಸಭೆಗೆ ತಿಳಿಸಿದರು. ನಂತರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.  ಜಿಪಂ ಅಧ್ಯಕ್ಷೆ ಲಲಿತಮ್ಮ, ಉಪಾಧ್ಯಕ್ಷ ಕೆ.ಶರಣಪ್ಪ, ಯೋಜನಾಧಿಕಾರಿ ಡಾ.ಟಿ.ರೋಣಿ, ಉಪ ಕಾರ್ಯದರ್ಶಿ ಎಂಡಿ ಯುಸೂಫ್ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.