ರಾಯಚೂರು

ಮುರಾರಿ ಲಿಂಗಸ್ಗೂರು ಕ್ಷೇತ್ರ ಕೆಜೆಪಿ ಅಭ್ಯರ್ಥಿ

Published On :

ಕ.ಪ್ರ. ವಾರ್ತೆ ಲಿಂಗಸ್ಗೂರು ಮಾ.21
ಬರುವ ವಿಧಾನಸಭೆ ಚುನಾವಣೆಯಲ್ಲಿ ಲಿಂಗಸ್ಗೂರು ಕ್ಷೇತ್ರಕ್ಕೆ ಕರ್ನಾಟಕ ಜನತಾ ಪಕ್ಷದಿಂದ ಸ್ಪರ್ಧಿಸಲು ಎಚ್.ಬಿ. ಮುರಾರಿ ಹೆಸರು ಅಧಿಕೃತವಾಗಿ ಗುರುವಾರ ಘೋಷಣೆಯಾಗುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.
ನಂತರ ಅಧಿಕೃತ ಅಭ್ಯರ್ಥಿ ಎಚ್.ಬಿ. ಮುರಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯ ಇಂದಿನ ದಿನಮಾನಗಳಲ್ಲಿ ಜಾತಿ ಬಲ, ಹಣ ಬಲ, ತೋಳ್ಬಲದ ವಾತಾವರಣ ನಿರ್ಮಾಣವಾಗಿರುವುದು ವಿಷಾದನೀಯ ಸಂಗತಿ. ಆದರೆ ಅಭಿವೃದ್ಧಿ ಪರ ಚಿಂತನೆಯುಳ್ಳ ಕರ್ನಾಟಕ ಜನತಾ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೇಂದ್ರದ ಮಾಜಿ ಸಚಿವ ಬಸವರಾಜ ಪಾಟೀಲರ ಶ್ರೀರಕ್ಷೆಯಿಂದ ಹಿಂದುಳಿದ ವರ್ಗದ ನನ್ನನ್ನು ಗುರುತಿಸಿ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿರುವುದು ಸಾಮಾಜಿಕ ನ್ಯಾಯ ಒದಗಿಸಿದಂತಾಗಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ: ಪಕ್ಷದ ನಾಯಕರು ನೀಡಿದ ಜವಾಬ್ದಾರಿ ಜನಸಾಮಾನ್ಯರಿಗೆ ಲಭಿಸಿದಂತಾಗಿದ್ದು, ಬರುವ ಚುನಾವಣೆಯನ್ನು ನಾನು ಸವಾಲಾಗಿ ಸ್ವೀಕರಿಸುವ ಜೊತೆಗೆ ಬಸವಾದಿ ಶರಣರ ಆದರ್ಶದಂತೆ ಎಲ್ಲ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸುತ್ತೇನೆ. ಹಲವು ವರ್ಷಗಳ ರಾಜಕೀಯ ಕ್ಷೇತ್ರದಿಂದ ಸ್ಥಾನಮಾನ ಪಡೆದರೂ ದುರಾಸೆ, ಉದ್ಯೋಗ, ಕೈಗಾರಿಕೆ ಸ್ಥಾಪನೆ, ಗುತ್ತಿಗೆದಾರಿಕೆ ಸೇರಿದಂತೆ ಮುಂತಾದ ವ್ಯವಹಾರಿಕ ದೃಷ್ಟಿಕೋನದಿಂದ ಅಧಿಕಾರ ಹಿಡಿಯದೆ ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಾ ಬಂದಿದ್ದೇನೆ. ಮುಂದೆಯೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆಂದು ಭರವಸೆ ನೀಡಿದರು.
ವಜ್ಜಲ್ ರೈತರ ದಾರಿ ತಪ್ಪಿಸುತ್ತಿದ್ದಾರೆ: ಲಿಂಗಸ್ಗೂರು ಕ್ಷೇತ್ರದಲ್ಲಿ ಕಳೆದ 5 ವರ್ಷಗಳ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಮಹತ್ವದ ನಂದವಾಡಗಿ ಏತನೀರಾವರಿ ಯೋಜನೆ ಜಾರಿ ವಿಷಯದಲ್ಲಿ ಶಾಸಕ ಮಾನಪ್ಪ ವಜ್ಜಲರು ಕ್ಷೇತ್ರದ ರೈತರಿಗೆ ದಾರಿ ತಪ್ಪಿಸುವಲ್ಲಿ ನಿರತರಾಗಿದ್ದಾರೆ. ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕ್ಷೇತ್ರದ ಜನತೆ ತಮಗೆ ಮತ ನೀಡಿ ಜಯ ಗಳಿಸಲು ಆಶೀರ್ವದಿಸಲಿದ್ದಾರೆ. ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರ ಪಡೆದರೆ ಕ್ಷೇತ್ರದಲ್ಲಿ ರಸ್ತೆ, ಕುಡಿವ ನೀರು, ಶಿಕ್ಷಣ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಜೊತೆಗೆ ಸಮಗ್ರ ಅಭಿವೃದ್ಧಿ ಶ್ರಮಿಸುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ರಮೇಶ ಶಾಸ್ತ್ರಿ, ಜೆ.ಬಾಬು ಹಟ್ಟಿ, ಶರಣಗೌಡ ಬಸಾಪೂರ, ಜಗದೀಶಯ್ಯಸ್ವಾಮಿ, ಶರಣಯ್ಯ ಹಿರೇಮಠ, ಮಹಾಂತೇಶ ಆನ್ವರಿ, ವೀರೇಶ ಪತ್ತಾರ ಸೇರಿದಂತೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.