ರಾಯಚೂರು

ಶಾಸಕರ ನಿರ್ಲಕ್ಷ್ಯವೇ ಜೆಡಿಎಸ್‌ಗೆ ವರದಾನ: ಅಮರೇಶ್ವರ

Published On :

ರಾಯಚೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಹಾಲಿ ಶಾಸಕ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಾಜಾ ರಾಯಪ್ಪ ನಾಯಕರ ನಿರ್ಲಕ್ಷ್ಯದಿಂದ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಾಗಿಲ್ಲ. ನೀರಾವರಿ ಯೋಜನೆಗಳ ಜಾರಿಗೆ ಅವಕಾಶಗಳಿದ್ದರೂ ಅತ್ತ ಗಮನಹರಿಸದಿರುವುದು ಸಾಬೀತಾಗಿದ್ದು, ಗ್ರಾಮೀಣ ಕ್ಷೇತ್ರದಲ್ಲಿ ಜೆಡಿಎಸ್ ಪರ ಅಲೆಯಿದೆ ಎಂದು ರಾಯಚೂರು ಗ್ರಾಮೀಣ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಹೇಳಿದರು.
ಅವರು ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರವನ್ನು ಇದುವರೆಗೆ ಪ್ರತಿನಿಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ರಾಜಾ ರಾಯಪ್ಪ ನಾಯಕ ಹಾಗೂ ಸಂಸದ ಸಣ್ಣಪಕ್ಕೀರಪ್ಪ ಅವರು ಕ್ಷೇತ್ರದ ಅಭಿವೃದ್ಧಿಗೆ ಗಮನ ಕೊಡದಿರುವುದು ಸ್ಪಷ್ಟವಾಗಿದೆ. ಈಗಲೂ ಜನತೆ ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗ್ರಾಮೀಣ ಕ್ಷೇತ್ರದಲ್ಲಿ ಎರಡು ನದಿಗಳು ಹರಿಯುತ್ತಿದ್ದರೂ ಕುಡಿಯುವ ನೀರಿನ ಅಭಾವ ತೀವ್ರವಾಗಿದೆ. ನೀರಾವರಿ ಸೌಲಭ್ಯಗಳ ಕೊರತೆಯೂ ಇದೆ. ನಿರಂತರ ವಿದ್ಯುತ್ ಕಡಿತದಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ ಎಂದು ಆರೋಪಿಸಿದರು.
ತಾವು ಈ ಹಿಂದೆ ಈ ಕ್ಷೇತ್ರದ ಶಾಸಕರಾಗಿದ್ದಾಗ ಅನೇಕ ಅಭಿವೃದ್ಧಿ ಕಾರ್ಯ ಕೈಗೊಂಡಿದ್ದು, ಶಾಸಕ ಸ್ಥಾನದ ಅವಧಿ ಪೂರ್ಣಗೊಳಿಸುವ ಮೊದಲೇ ಚುನಾವಣೆಗಳು ಎದುರಾಗಿದ್ದರಿಂದ ಆನಂತರದಲ್ಲಿ ಅಧಿಕಾರಕ್ಕೆ ಬಂದವರು ಅಭಿವೃದ್ಧಿ ಕಾರ್ಯ ಮುಂದುವರಿಸಿಲ್ಲ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಎಲ್ಲರೂ ಕೇವಲ ಧ್ವಜಾರೋಹಣ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾತ್ರ ಜಿಲ್ಲೆಗೆ ಭೇಟಿ ನೀಡಿದ್ದು ಬಿಟ್ಟರೆ ಎಂದೂ ಅಭವೃದ್ಧಿ ವಿಚಾರಗಳಿಗೆ ಗಮನ ಹರಿಸಲಿಲ್ಲ. ಅದರಿಂದಾಗಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಂಡಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ಭೇಟಿ ವೇಳೆ ಗಮನಸೆಳೆಯಲಾಗಿದ್ದು, ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ಕೊಟ್ಟಿದ್ದಾರೆಂದು ಹೇಳಿದರು.
ಗ್ರಾಮೀಣ ಕ್ಷೇತ್ರದಲ್ಲಿ ಸದ್ಯ ಜೆಡಿಎಸ್ ಪರವಾದ ಅಲೆಯಿದ್ದು, ಮತದಾರರು ತಮ್ಮನ್ನು ಬೆಂಬಲಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ಹಾಲಿ ಶಾಸಕ ಹಾಗೂ ಅಭ್ಯರ್ಥಿ ರಾಜಾ ರಾಯಪ್ಪ ನಾಯಕ ಅವರು ಬಿಜೆಪಿ ಸರ್ಕಾರದ ಕಾರಣದಿಂದಲೇ ಸಮರ್ಪಕ ಅನುದಾನ ದೊರೆಯದೇ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗಲಿಲ್ಲ ಎಂದು ಹೇಳಿಕೆ ನೀಡುವ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕಾರ್ಯ ಮಾಡುತ್ತಿದ್ದಾರೆಂದು ಲೇವಡಿ ಮಾಡಿದರು. ಶಾಸಕ ರಾಜಾ ರಾಯಪ್ಪ ನಾಯಕ ಅವರು ಕ್ಷೇತ್ರದ ಅಭಿವೃದ್ಧಿಗೆ ತೋರಿದ ನಿರ್ಲಕ್ಷ್ಯ ತಮಗೆ ವರವಾಗಿದೆ ಎಂದರು. ಪ್ರಸಕ್ತ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಮತದಾರರು ಪ್ರಾದೇಶಿಕ ಪಕ್ಷದತ್ತಲೇ ಹೆಚ್ಚಿನ ಒಲವು ಹೊಂದಿದ್ದಾರೆಂದರು. ತಮಗೆ ಮತದಾರರು ಬೆಂಬಲಿಸಿದಲ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಜೆಡಿಎಸ್ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಭರವಸೆ ನೀಡಿದರು.
ಜೆಡಿಎಸ್ ಮುಖಂಡರಾದ ವಿರೂಪಾಕ್ಷಿ, ನಿಜಾಮುದ್ದೀನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.