ವದಂತಿಗೆ ಕಿವಿಗೊಡಬೇಡಿ: ಎಂ.ಜಿ. ನಾಯಕ
ಕ.ಪ್ರ. ವಾರ್ತೆ ಸುರಪುರ ಮೇ 1
ಇಲ್ಲಿಯ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಬಿಜೆಪಿ ಅಭ್ಯರ್ಥಿ ನಮ್ಮೊಂದಿಗೆ ಚುನಾವಣೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು ವದಂತಿಗೆ ಪಕ್ಷದ ಕಾರ್ಯಕರ್ತರು ಮತ್ತು ಮತದಾರರು ಕಿವಿಗೊಡಬಾರದು ಎಂದು ಬಿಜೆಪಿ ಅಭ್ಯರ್ಥಿ ರಾಜಾ ಮದನಗೋಪಾಲ ನಾಯಕ ಹೇಳಿದರು.
ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಕ್ಷೇತ್ರದಲ್ಲಿ ಈಗಾಗಲೇ ಎರಡು ಸುತ್ತಿನ ಪ್ರಚಾರ ಮುಗಿಸಿದ್ದೇನೆ. ತಾಲೂಕಿನಾದ್ಯಂತ ಬಿಜೆಪಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗುತ್ತಿದೆ. ಕಾರ್ಯಕರ್ತರ ಉತ್ಸಾಹ, ಹುರುಪು ನನ್ನನ್ನು ಗೆಲವಿನ ಅಂಚಿನಲ್ಲಿ ನಿಲ್ಲಿಸಿದೆ. ನನ್ನ ಗೆಲುವಿನ ಅಲೆ ಸಹಿಸದ ನನ್ನ ವಿರೋಧಿಗಳು ಈ ರೀತಿಯ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
ತಪ್ಪು ಭಾವನೆಗೆ ಯತ್ನ: ಈಗಾಗಲೆ ಎರಡು ಬಾರಿ ಸೋತಿದ್ದು ಮತ್ತೊಮ್ಮೆ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ರಾಜಾವೆಂಕಟಪ್ಪ ನಾಯಕ ಮತ್ತು ಜೆಡಿಎಸ್ ಅಭ್ಯರ್ಥಿ ರಾಜುಗೌಡ ಸೋಲಿನ ಭೀತಿಯಿಂದ ಈ ರೀತಿ ಹೇಳಿಕೆ ನೀಡುವ ಮೂಲಕ ಮತದಾರರಲ್ಲಿ ತಪ್ಪು ಭಾವನೆ ಮೂಡಿಸುತ್ತಿದ್ದಾರೆ ಎಂದು ಹರಿಹಾಯ್ದರು.
ಈ ಬಾರಿಯ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಒಂದಾಗಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ರಾಜುಗೌಡ ಮತ್ತು ನಮ್ಮೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾ ಮತದಾರರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರ ಆಡಳಿತದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳು ಮತ್ತು ಜನಪರ ಯೋಜನೆಗಳು ರಾಜ್ಯದಲ್ಲಿ ಮಾದರಿಯಾಗಿವೆ. ಹೀಗಾಗಿ ಬಿಜೆಪಿಯ ಉತ್ತಮ ಯೋಜನೆಗೆ ರಾಜ್ಯಾದ್ಯಂತ ಮಾರುಹೋದ ಜನತೆ ಬಿಜಪಿಯತ್ತ ಹರಿದು ಬರುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ. ಜಗದೀಶ ಶೆಟ್ಟರ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಾನು ಯಾರೊಂದಿಗೂ ಹೊಂದಾಣಿಕೆ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ. ಏನಿದ್ದರು ಚುನಾವಣೆಯನ್ನು ನೇರವಾಗಿ ಎದುರಿಸುತ್ತಿದ್ದೇನೆ. ವಿರೋಧಿಗಳು ಮಾಡುವ ಅಪಪ್ರಚಾರಕ್ಕೆ ಕ್ಷೇತ್ರದ ನನ್ನ ಕಾರ್ಯಕರ್ತರು ಮತ್ತು ಮತದಾರರು ಹಾಗೂ ಅಭಿಮಾನಿಗಳು ಕಿವಿಗೊಡಬಾರದು. ಚುನಾವಣೆಯಲ್ಲಿ ನನ್ನ ಕಮಲದ ಗುರುತಿಗೆ ಮತ ನೀಡುವ ಮೂಲಕ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ರಾಜಾ ವಿಷ್ಣುವರ್ಧನ ನಾಯಕ, ಲಕ್ಷ್ಮಣ ಗುತ್ತೇದಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

