ರಾಯಚೂರು

ವರದಿಗಾರನಿಗೆ ಬೆದರಿಕೆ: ಜಿಲ್ಲಾ ಪತ್ರಕರ್ತರ ಸಂಘ ಖಂಡನೆ

Published On :

ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯದ ಮಾರಾಮಾರಿ ಸುದ್ದಿಗೆ ಸಂಬಂಧಿಸಿ ದೇವದುರ್ಗ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ದೂರವಾಣಿ ಮೂಲಕ ಪತ್ರಕರ್ತನಿಗೆ ಬೆದರಿಕೆ ಹಾಕಿದ ಘಟನೆಯನ್ನು ಜಿಲ್ಲಾ ಪತ್ರಕರ್ತರ ಸಂಘ ಖಂಡಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ, ಬುಧವಾರ ರಾತ್ರಿ ಗಬ್ಬೂರಿನಲ್ಲಿ ನಡೆದ ಮಾರಾಮಾರಿ ಘಟನೆ ಬಗ್ಗೆ ವರದಿ ಮಾಡಿದ 'ಸುವರ್ಣ ಸುದ್ದಿವಾಹಿನಿ'ಯ ಜಿಲ್ಲಾ ವರದಿಗಾರ ಗುರುರಾಜ್ ಹೂಗಾರ್ ಅವರಿಗೆ ದೂರವಾಣಿ ಕರೆ ಮಾಡಿದ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲ ಬೆದರಿಕೆಯೊಡ್ಡಿದ್ದಾರೆಂದು ದೂರಲಾಯಿತು.
ಚುನಾವಣೆ ಸಂದರ್ಭದಲ್ಲಿ ಹಗಲಿರುಳು ದುಡಿಯುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಸುಭದ್ರಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರು ತಮ್ಮದೇ ಆದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಆದರೆ ಕಾರ್ಯನಿರ್ವಹಣೆಗೆ ಅಡ್ಡಿಯುಂಟು ಮಾಡುವ ರೀತಿಯಲ್ಲಿ ದೂರವಾಣಿ ಮೂಲಕ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಬೆದರಿಕೆಯೊಡ್ಡಿರುವುದು ಅವರ ದುರ್ವರ್ತನೆ ಪ್ರದರ್ಶಿಸಿದೆ ಎಂದು ಸಂಘದ ಪದಾಧಿಕಾರಿಗಳು ಟೀಕಿಸಿದರು.
ಕಾರಣ ಕೂಡಲೇ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಿ ಬೆದರಿಕೆಯೊಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಣ್ಣ, ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷ ವೆಂಕಟಸಿಂಗ್, ಪ್ರಮುಖರಾದ ಸುರೇಂದ್ರಾಚಾರ್ಯ ಕೊರ್ತಕುಂದಾ, ಮೃತ್ಯುಂಜಯ ಕಪಗಲ್, ಸಿದ್ದು ಬಿರಾದಾರ್, ದತ್ತು ಸರ್ಕಿಲ್, ಗುರುರಾಜ್ ಹೂಗಾರ್, ಬಸವರಾಜ ನಾಗಡದಿನ್ನಿ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.