ರಾಯಚೂರು

ವೆಂಕಟೇಶ ನಾಯಕರಿಗೆ ಸಚಿವ ಸ್ಥಾನ; ಒತ್ತಾಯ

Published On :

ರಾಯಚೂರು: ದೇವದುರ್ಗ ಕ್ಷೇತ್ರದ ಶಾಸಕ ವೆಂಕಟೇಶ ನಾಯಕ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಒತ್ತಾಯಿಸಿದ್ದಾರೆ.
ಈ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮನಗೌಡ ಪೊಲೀಸ್ ಪಾಟೀಲ್ ನಾಗಡದಿನ್ನಿ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಅವರಿಗೆ ಪತ್ರ ಬರೆದು, ಕಳೆದ 1968ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿದ್ದು, ನಾಲ್ಕು ಬಾರಿ ಸಂಸದರಾಗಿದ್ದಾರೆ. ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಸ್ವಾರ್ಥ ರಾಜಕಾರಣದಿಂದ ದೂರವಿರುವ ಇವರು ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದಾರೆಂದು ತಿಳಿಸಿದ್ದಾರೆ.
ಕ್ಷೇತ್ರದಲ್ಲಿ ಈ ಮೊದಲು ಬಿಜೆಪಿ ಶಾಸಕರಾಗಿದ್ದವರು ಕ್ಷೇತ್ರದ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಸಿದರೂ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ವೆಂಕಟೇಶ ನಾಯಕ ಅವರನ್ನು ಆಯ್ಕೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಅವರು ಆಗ್ರಹಿಸಿದ್ದಾರೆ.
ದೇವದುರ್ಗ ವರದಿ: ಶಾಸಕ ವೆಂಕಟೇಶ ನಾಯಕಗೆ ಸಚಿವ ಸ್ಥಾನ ನೀಡಬೇಕೆಂದು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಮುಖಂಡ ಮಾನಪ್ಪ ಮೇಸ್ತ್ರಿ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ಶಾಸಕ ಎ. ವೆಂಕಟೇಶ ನಾಯಕ ಅವರು ಈಗಾಗಲೇ ನಾಲ್ಕು ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ದೇವದುರ್ಗದ ಶಾಸಕರಾಗಿದ್ದಾರೆ. ಭ್ರಷ್ಟಾಚಾರ ರಹಿತ, ಪ್ರಾಮಾಣಿಕ ವ್ಯಕ್ತಿತ್ವದ ರಾಜಕಾರಣಿಯಾಗಿರುವ ಇವರಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ.
ಹಿಂದುಳಿದ ತಾಲೂಕಿನ ಅಭಿವೃದ್ಧಿಗಾಗಿ ಶಾಸಕ ಎ. ವೆಂಕಟೇಶ ನಾಯಕರಿಗೆ ಸಚಿವ ಸ್ಥಾನ ನೀಡಬೇಕೆಂದು ಸಂಘಟನೆಯ ಮಲ್ಲಪ್ಪ ಅಂಚೆಸೂಗೂರು, ಬಸವರಾಜ ಮಸರಕಲ್ ಮತ್ತಿತರರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಕರೆಮ್ಮ ಮನವಿ: ಶಾಸಕ ಎ. ವೆಂಕಟೇಶ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಹಿಳಾ ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಕರೆಮ್ಮ ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.
ಈ ಕುರಿತು ಸಿಎಂ ಅವರಿಗೆ ಪತ್ರ ಬರೆದಿರುವ ಅವರು, ಶಾಸಕರಾಗಿ ಚುನಾಯಿತಗೊಂಡಿರುವ ಎ.ವೆಂಕಟೇಶ ನಾಯಕರು ಸುಮಾರು 40 ವರ್ಷದಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ. 4 ಬಾರಿ ಸಂಸದರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಹೈದ್ರಾಬಾದ್ ಕರ್ನಾಟಕ ಭಾಗದ ಹಿರಿಯ ರಾಜಕಾರಣಿಯಾಗಿದ್ದಾರೆ. ನೇರ, ನಿಷ್ಠುರ, ಮತ್ತು ಸರಳ ವ್ಯಕ್ತಿತ್ವದೊಂದಿಗೆ ಇಡೀ ಜಿಲ್ಲೆಯಲ್ಲಿಯೇ ಹಿರಿಯ ರಾಜಕೀಯ ಮುತ್ಸದ್ದಿಯಾಗಿರುವ ಎ.ವೆಂಕಟೇಶ ನಾಯಕರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.