ರಾಯಚೂರು

ದೇವದಾಸಿ, ದಲಿತರ ಸೌಲಭ್ಯಕ್ಕೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಮೇ 21
ದೇವದಾಸಿ ಮಹಿಳೆಯರ ಮತ್ತು ದಲಿತರ ಹಕ್ಕುಗಳಿಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸಿದರು.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಧರಣಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಮತ್ತು ದಲಿತರ ಪಾತ್ರ ಪ್ರಮುಖವಾಗಿದೆ. ಮಹಿಳೆಯರ ಮತ್ತು ದಲಿತರ ಏಳಿಗೆಯಾಗದೇ ದೇಶದ ಅಭಿವೃದ್ಧಿ ಅಸಾಧ್ಯ ಎಂಬ ಸತ್ಯವನ್ನು ಸರ್ಕಾರ ಅರಿಯಬೇಕಿದೆ ಎಂದು ಹೇಳಿದರು.
ಬದುಕು ಶೋಚನೀಯ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಸಮಾಜದಲ್ಲಿ ಜಾರಿಯಲ್ಲಿರುವ ಅನಿಷ್ಟ ದೇವದಾಸಿ ಪದ್ಧತಿಯಿಂದ ದಲಿತ ಮಹಿಳೆಯರ ಬದುಕು ಶೋಚನೀಯವಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಸ್ಪೃಶ್ಯತೆ ಆಚರಣೆಗೆ ತಡೆಗೆ ಕೂಡಲೇ ಬಿಗಿ ಕಾನೂನು ಕ್ರಮ ಕೈಗೊಳ್ಳಬೇಕು. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಸರ್ಕಾರ ಮುಂದಾಗಬೇಕು. ದೌರ್ಜನ್ಯ ಪ್ರಕರಣಗಳ ಸಂದರ್ಭ ನೀಡುವ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.
ವಿವಿಧ ಬೇಡಿಕೆ: ಖಾಲಿಯಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಖಾಸಗಿ ವಲಯದಲ್ಲಿ ನೇಮಕಾತಿ ಸೇರಿದಂತೆ ವಿವಿಧ ಸಂದರ್ಭದಲ್ಲಿ ಮೀಸಲಾತಿ ಕಲ್ಪಿಸಬೇಕು. ಸ್ವಯಂ ಉದ್ಯೋಗ ಕೈಗೊಳ್ಳಲು ತರಬೇತಿ ನೀಡಿ ಬಡ್ಡಿ ರಹಿತ ಶೇ.50ರಷ್ಟು ಸಹಾಯ ಧನದ ಸಾಲ ಸೌಲಭ್ಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ದೇವದಾಸಿ ಮಹಿಳೆಯರಿಗೆ ಸರ್ಕಾರ ಸದ್ಯ ನೀಡುತ್ತಿರುವ ಮಾಸಿಕ ಸಹಾಯಧನವನ್ನು 1500ಕ್ಕೆ ಹೆಚ್ಚಳ ಮಾಡಬೇಕು. ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುದಾನವನ್ನು ಕೂಡಲೇ ಹೆಚ್ಚಳ ಮಾಡಬೇಕು. ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಕಡ್ಡಾಯವಾಗಿ ದಲಿತರ ಏಳಿಗೆಗೆ ಬಳಕೆ ಮಾಡುವಂತೆ ಎಂದು ಆಗ್ರಹಿಸಿದರು.
ವಸತಿ ಮನೆ ನಿರ್ಮಾಣಕ್ಕೆ ಆಗ್ರಹ: ದೇವದಾಸಿ ಮಹಿಳೆಯರಿಗೆ ಉಚಿತ ನಿವೇಶನ ನೀಡಿ, ವಸತಿ ಯೋಜನೆ ಅಡಿ ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸಬೇಕು. ಕೃಷಿಗೆ ಯೋಗ್ಯವಾದ ಜಮೀನನ್ನು ನೀಡಿ ನೀರಾವರಿ ಸೌಲಭ್ಯ ಒದಗಿಸಬೇಕು. ರಿಯಾಯಿತಿ ದರದಲ್ಲಿ ವ್ಯವಸಾಯ ಸಾಮಗ್ರಿಗಳನ್ನು ದೇವದಾಸಿ ಮಹಿಳೆಯರಿಗೆ ಒದಗಿಸುವಂತೆ ಒತ್ತಾಯಿಸಿದರು.
ದೇವದಾಸಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಅಂತ್ಯೋದಯ ಪಡಿತರ ಚೀಟಿಗಳನ್ನು ಸಮರ್ಪಕವಾಗಿ ಹಂಚಿಕೆ ಮಾಡಿ ಎಲ್ಲ ಅವಶ್ಯಕ ಆಹಾರಧಾನ್ಯ ಒದಗಿಸಬೇಕು. ದೇವದಾಸಿ ಮಹಿಳೆಯರಿಗೆ ಮತ್ತು ದಲಿತರಿಗೆ ನೀಡಿದ ಎಲ್ಲ ರೀತಿಯ ಸಾಲವನ್ನು ಸತತ ಬರಗಾಲದ ಹಿನ್ನೆಲೆಯಲ್ಲಿ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಧರಣಿಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ತಾಲೂಕು ಅಧ್ಯಕ್ಷೆ ಸಂತೋಷಮ್ಮ, ಕಾರ್ಯದರ್ಶಿ ದೇವಮ್ಮ, ತಾಯಮ್ಮ, ಅಯ್ಯಮ್ಮ, ಫರೀದಾ, ಜೆ.ಎಂ. ಚನ್ನಬಸಯ್ಯ, ಗಂಗಮ್ಮ  ಭಾಗವಹಿಸಿದ್ದರು.



ಬೇಡಿಕೆಗಳು


   ಖಾಲಿಯಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ  ಮಾಡಬೇಕು.
   ಖಾಸಗಿ ವಲಯದಲ್ಲಿ ನೇಮಕಾತಿ ಸೇರಿ ವಿವಿಧ ಸಂದರ್ಭದಲ್ಲಿ ಮೀಸಲಾತಿ ಕಲ್ಪಿಸಬೇಕು.
   ಸ್ವಯಂ ಉದ್ಯೋಗ ಕೈಗೊಳ್ಳಲು ಬಡ್ಡಿ ರಹಿತ ಶೇ.50ರಷ್ಟು ಸಹಾಯ ಧನ ಒದಗಿಸಬೇಕು.
   ದೇವದಾಸಿ ಮಹಿಳೆಯರಿಗೆ ಸರ್ಕಾರ  ನೀಡುತ್ತಿರುವ ಮಾಸಿಕ ಸಹಾಯಧನ  ಹೆಚ್ಚಿಸಿ
    ದೇವದಾಸಿ ಮಹಿಳೆಯರಿಗೆ ಮತ್ತು ದಲಿತರಿಗೆ ನೀಡಿದ ಸಾಲ ಮನ್ನಾ ಮಾಡಬೇಕು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.