ರಾಯಚೂರು

ಬಿಸಿಯೂಟ ನೌಕರರ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಮೇ 28
ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಎದುರು ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ತಾಲೂಕು ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಜಿಪಂ ಸಿಇಒಗೆ ಮನವಿ ಸಲ್ಲಿಸಿ, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಒದಗಿಸುವ ಯೋಜನೆಯು 2001ರಿಂದಲೇ ಆರಂಭಗೊಂಡಿದೆ. 11 ವರ್ಷಗಳೇ ಕಳೆದರೂ ಇದುವರೆಗೆ ಬಿಸಿಯೂಟ ತಯಾರಿಸುವ ನೌಕರರಿಗೆ ಕೇವಲ 1 ಸಾವಿರ ಪ್ರತಿ ತಿಂಗಳು ನೀಡಲಾಗುತ್ತಿದೆ ಎಂದು ಆರೋಪಿಸಿದರು.
ವಜಾ ಖಂಡನೆ: ಪೂರ್ಣ ಪ್ರಮಾಣದ ಈ ಕೆಲಸದಲ್ಲಿರುವ ಸಿಬ್ಬಂದಿಗೆ ಕನಿಷ್ಠ ವೇತನ 10 ಸಾವಿರ ಪಾವತಿಸುವಂತೆ ಒತ್ತಾಯಿಸಿದ ಕಾರ್ಯಕರ್ತರು, ಸದ್ಯದ ದಿನಗಳಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಅದರಿಂದ ಬಿಸಿಯೂಟ ನೌಕರರ ಜೀವನ ನಿರ್ವಹಣೆ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ವೇತನವನ್ನು 10 ಸಾವಿರ ರು.ಗೆ ಹೆಚ್ಚಿಸಿ ಪಾವತಿಸಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡಿಸೇಲ್ ದರದಲ್ಲಿ ನಿರಂತರವಾಗಿ ಏರಿಕೆ ಮಾಡುತ್ತಲೇ ಸಾಗಿದೆ. ಇಂಥ ಕಷ್ಟದ ಪರಿಸ್ಥಿತಿಯಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದು ತಾಲೂಕಿನ ಕುರಕನಡೋಣಾ, ಮಟಮಾರಿ ಗ್ರಾಮಗಳಲ್ಲಿನ ಮೂವರು ಬಿಸಿಯೂಟ ನೌಕರರನ್ನು ಸೇವೆಯಿಂದ ಅಲ್ಲಿನ ಶಾಲಾ ಮುಖ್ಯಗುರುಗಳು ವಜಾಗೊಳಿಸಿದ್ದನ್ನು ಖಂಡಿಸಿದರು.
ವೇತನ ಬಿಡುಗಡೆ ಮಾಡಿ: ವಿನಾ ಕಾರಣ ಸೇವೆಯಿಂದ ವಜಾಗೊಂಡ ನೌಕರರನ್ನು ಕೂಡಲೇ ಪುನಾ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದ ಹೋರಾಟಗಾರರು, ಪ್ರತಿ ತಿಂಗಳು ಬಿಸಿಯೂಟ ನೌಕರರಿಗೆ 5ನೇ ತಾರೀಕಿನೊಳಗೆ ವೇತನ ಪಾವತಿಸಬೇಕು. ತುರುಕನ ಡೋಣಿಯಲ್ಲಿ ವಜಾಗೊಂಡ ಮೂವರನ್ನು ಪುನಾ ನೇಮಿಸಬೇಕು. ನೌಕರರಿಗೆ ತಡೆಹಿಡಿದ ವೇತನವನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಸಿಯೂಟ ತಯಾರಿಕೆಯು ಪೂರ್ಣ ಪ್ರಮಾಣದ ಕೆಲಸವಾಗಿದ್ದು, ಈ ಹಿನ್ನೆಲೆಯಲ್ಲಿ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು. ನೌಕರರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು ಬಿಸಿಯೂಟ ನೌಕರರ ವೇತನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿದರು.
ಶಾಲೆಗಳ ರಜೆ ಅವಧಿಗೆ ಸಂಬಂಧಿಸಿ ಬಿಸಿಯೂಟ ನೌಕರರಿಗೆ ವೇತನ ಪಾವತಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು. ಸದಯದ ವೇತನ 1 ಸಾವಿರ ಕನಿಷ್ಠ ವೇತನ 10 ಸಾವಿರ ನಿಗದಿ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಗೌರವಾಧ್ಯಕ್ಷ ವೈ. ಈರಣ್ಣ, ಅಧ್ಯಕ್ಷೆ ಕಲ್ಯಾಣಿ, ಕಾರ್ಯದರ್ಶಿ ಅಕ್ಕಮ್ಮ, ಸಂಘದ ಪ್ರಮುಖರಾದ ಶಕುಂತಲಾ, ಈಶ್ವರಿ, ನಾಗಮ್ಮ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.