ಬಡವರಿಗೆ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೌಲಭ್ಯ
ಕನ್ನಡಪ್ರಭ ವಾರ್ತೆ ರಾಯಚೂರು ನ.1
ಸರ್ಕಾರದ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಯು ಬಡವರಿಗೆ ಸಮರ್ಪಕವಾಗಿ ತಲುಪಬೇಕು. ಈ ಉದ್ದೇಶದಿಂದಲೇ ಒಪೆಕ್ ಆಸ್ಪತ್ರೆಯನ್ನು ಸರ್ಕಾರವೇ ನಿರ್ವಹಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ವಿವಿಧ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳು ಕಡಿಮೆ ದರದಲ್ಲಿ ಎಲ್ಲರಿಗೂ ದೊರೆಯುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
ನಗರದಲ್ಲಿ ಶುಕ್ರವಾರ ಒಪೆಕ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಆಸ್ಪತ್ರೆಯನ್ನು ಪುನಾರಂಭಗೊಳಿಸಿ ಮಾತನಾಡಿ, ಕಳೆದೊಂದು ವರ್ಷದಿಂದ ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಬಡರೋಗಿಗಳಿಗೆ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸವಲತ್ತು ದೊರೆತಿರಲಿಲ್ಲ. ಅದರಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದು ಸರ್ಕಾರದ ಗಮನಕ್ಕಿತ್ತು. ಈ ಹಿನ್ನೆಲೆಯಲ್ಲಿ ಒಪೆಕ್ ಆಸ್ಪತ್ರೆ ತುರ್ತಾಗಿ ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ಸೌಲಭ್ಯ ಒದಗಿಸಲು ಕ್ರಮ: ಒಪೆಕ್ ಆಸ್ಪತ್ರೆಯಲ್ಲಿ ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಆಧುನಿಕ ಚಿಕಿತ್ಸಾ ಸೌಲಭ್ಯ ದೊರೆಯಲಿದೆ. ಸರ್ಕಾರ ಹಂತಹಂತವಾಗಿ ವೈದ್ಯಕೀಯ ಉಪಕರಣ ಮತ್ತು ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಿದೆ. ಈಗಾಗಲೇ ಕೋಟ್ಯಂತರ ರು. ಆಸ್ಪತ್ರೆಯ ಪುನಾರಂಭಕ್ಕೆ ಸರ್ಕಾರದಿಂದ ಮಂಜೂರಾಗಿದೆ. ಉಪಕರಣಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಜಾರಿಯಲ್ಲಿದೆ ಎಂದರು.
ರಾಜ್ಯ ಸರ್ಕಾರದ ಎಲ್ಲ ಆರೋಗ್ಯ ಸಂಬಂಧಿ ಯೋಜನೆಗಳಡಿ ಬಡವರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ದೊರೆಯಬೇಕೆಂಬುದು ಸರ್ಕಾರದ ಆಶಯ. ಅಂತೆಯೇ ಬಾಲಸಂಜೀವಿನಿ, ಯಶಸ್ವಿನಿ ಸೇರಿ ವಿವಿಧ ಯೋಜನೆಗಳನ್ನು ಒಪೆಕ್‌ನಲ್ಲಿ ಅಳವಡಿಸಿ ಬಡವರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತೆ ಮಾಡಲಾಗುತ್ತದೆ ಎಂದು ಹೇಳಿದರು.
ಗುಣಮಟ್ಟದ ಆರೋಗ್ಯ ಸೇವೆಗೆ ಬದ್ಧ: ರಾಜ್ಯ ಸರ್ಕಾರ ಬಡವರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ. ಜನವರಿಯಲ್ಲಿ ರಿಮ್ಸ್ ಬೋಧಕ ಆಸ್ಪತ್ರೆಯು ತನ್ನ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ. ಆನಂತರ ಮತ್ತಷ್ಟು ಜನತೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಒಪೆಕ್ ಆಸ್ಪತ್ರೆಯ ಸಮರ್ಪಕ ಕಾರ್ಯನಿರ್ವಹಣೆ ನಿಟ್ಟಿನಲ್ಲಿ ಸದ್ಯ ನೇಮಕಗೊಂಡಿರುವ ಸಿಬ್ಬಂದಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು. ಆರಂಭದಲ್ಲಿ ಸಿಬ್ಬಂದಿಗೆ ಕೆಲ ಸೌಲಭ್ಯಗಳು ದೊರೆಯದಿರಬಹುದು. ಆದರೆ ಮುಂದಿನ ದಿನಗಳಲ್ಲಿ ಸರ್ಕಾರ ಎಲ್ಲ ರೀತಿಯ ಸೌಲತ್ತು ಒದಗಿಸಲಾಗುತ್ತದೆ ಎಂದು ತಿಳಿಸಿದರು.
ಸದ್ಯ ಆಸ್ಪತ್ರೆಯಲ್ಲಿ ಸಿ ಗ್ರೂಪ್‌ನ 40 ಹಾಗೂ ಡಿ ಗ್ರೂಪ್‌ನ 32 ಸಿಬ್ಬಂದಿ ನೇಮಿಸಲಾಗಿದೆ. ಸೂಪರ್ ಸ್ಪೆಷಾಲಿಟಿ ವೈದ್ಯರ ಅರ್ಜಿ ಕರೆದ ಸಂದರ್ಭದಲ್ಲಿ ವ್ಯಕ್ತವಾದ ಪ್ರತಿಕ್ರಿಯೆಯಿಂದ ಸರ್ಕಾರಕ್ಕೆ ಆಸ್ಪತ್ರೆಯ ಪುನಾರಂಭಕ್ಕೆ ಸ್ಫೂರ್ತಿ ಮೂಡಿದೆ. ಸಾಕಷ್ಟು ಜನ ತಜ್ಞವೈದ್ಯರು ಆಸಕ್ತಿ ತೋರಿದ್ದರಿಂದ ಆಸ್ಪತ್ರೆ ಪುನಾರಂಭ ಸಾಧ್ಯವಾಗಿದೆ. ಆಸ್ಪತ್ರೆಯ ಸಿಬ್ಬಂದಿ ಸಮರ್ಪಕವಾಗಿ ದುಡಿಯುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಪ್ರತಾಪಗೌಡ ಪಾಟೀಲ್, ತಿಪ್ಪರಾಜು, ಹಂಪಯ್ಯ ನಾಯಕ, ಮಾಜಿ ಶಾಸಕ ರಾಜಾ ರಾಯಪ್ಪ ನಾಯಕ, ಕಾಂಗ್ರೆಸ್ ಮುಖಂಡ ಎನ್.ಎಸ್. ಬೋಸರಾಜು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಸಂತಕುಮಾರ್, ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು, ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ್, ಜಿಪಂ ಸಿಇಒ ಡಾ.ಮುದ್ದುಮೋಹನ್ ಸೇರಿ ಅನೇಕರಿದ್ದರು. ಒಪೆಕ್ ಆಸ್ಪತ್ರೆಯ ಸಿಬ್ಬಂದಿ, ನಗರದ ಜನತೆ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

