ಪ್ರಕೃತಿ ವಿಪತ್ತು ನಿರ್ವಹಣೆಯಲ್ಲಿ ದೇಶ ಪ್ರಥಮ
ಗುಲ್ಬರ್ಗ: ಪ್ರಕೃತಿ ವಿಕೋಪಗಳನ್ನು ಅಧ್ಯಯನ ಮಾಡಲು ದೇಶ ತನ್ನದೇ ಆದ ಉಪಗ್ರಹ ವ್ಯವಸ್ಥೆ ಹೊಂದಿದೆ. ಇದರಿಂದ ಚಂಡಮಾರುತ, ಭಾರಿ ಮಳೆ, ಬಿರುಗಾಳಿ ಸಂಭವಿಸುವ ಬಗ್ಗೆ ಮಾಹಿತಿ ಪಡೆದು ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗುತ್ತಿದೆ. ಪ್ರಕೃತಿ ವಿಕೋಪ ಗುರುತಿಸಿ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ದೇಶ ಪ್ರಥಮ ಸ್ಥಾನದಲ್ಲಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವರ್ಗ ಸಂಯೋಜಕ ಡಾ. ಜಿ.ವಿಶ್ವನಾಥ ತಿಳಿಸಿದರು.
ನಗರದ ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನಲ್ಲಿ ಬುಧವಾರ ಪೊಲೀಸ್ ಇಲಾಖೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಪೇದೆ, ಪೇದೆ, ಇಲಾಖೆ ಸಿಬ್ಬಂದಿಗೆ 3 ದಿನಗಳ ಕಾಲ ಹಮ್ಮಿಕೊಂಡಿದ್ದ ಪ್ರಕೃತಿ ವಿಕೋಪ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚೆಗೆ ದೇಶಕ್ಕೆ ಗಂಡಾಂತರಕಾರಿಯಾಗಿ ಪರಿಣಮಿಸಿದ್ದ ಫೈಲಿನ್ ಚಂಡಮಾರುತ ಬಗ್ಗೆ ಮುಂಜಾಗ್ರತೆ ವಹಿಸಿದ್ದರಿಂದ ಅಪಾರ ಪ್ರಮಾಣದ ಜೀವಹಾನಿ ತಪ್ಪಿಸಿರುವುದು ಭಾರತದ ರಕ್ಷಣಾ ವ್ಯವಸ್ಥೆಯ ಹೆಗ್ಗಳಿಕೆ. ದೇಶ 3.2 ಮಿಲಿಯನ್ ಕಿಲೋ ಮೀಟರ್ ಭೂಪ್ರದೇಶ ಹೊಂದಿದೆ. ಈ ಪೈಕಿ 65 ಪ್ರತಿಶತ ಭೂಪ್ರದೇಶ ಪ್ರಕೃತಿ ವಿಕೋಪಕ್ಕೆ ಗುರಿಯಾಗುತ್ತದೆ. ಇದರಿಂದ ಪ್ರತಿವರ್ಷ ಸುಮಾರು 25000 ಹಾನಿಯಾಗುತ್ತಿದೆ. ಇದನ್ನು ಕೇಂದ್ರ ಸರ್ಕಾರ ಭರಿಸುತ್ತಿದೆ ಎಂದು ಹೇಳಿದರು.
ಪ್ರಕೃತಿ ಮತ್ತು ಮಾನವ ನಿರ್ಮಿತ ವಿಕೋಪಗಳಿಂದ ಅಪಾರ ಪ್ರಮಾಣದ ಪ್ರಾಣಹಾನಿ ಮತ್ತು ಆಸ್ತಿ-ಪಾಸ್ತಿಗಳ ಹಾನಿಯಾಗುತ್ತದೆ. ಇವುಗಳನ್ನು ಪುನರ್ ಸ್ಥಾಪಿಸಲು ಸಾಧ್ಯವಿಲ್ಲ. ಆದರೆ, ಮುಂಜಾಗ್ರತೆ ಹಾಗೂ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಲ್ಲಿ ಹಾನಿ ತಗ್ಗಿಸಬಹುದು. ಈ ನಿಟ್ಟಿನಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಆಯೋಜಿಸಿ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ರಕ್ಷಣಾ ಕಾರ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.
ಆಡಳಿತ ತರಬೇತಿ ಸಂಸ್ಥೆಯಿಂದ ಇಲ್ಲಿಯವರೆಗೆ ಐ.ಎ.ಎಸ್, ಐ.ಪಿ.ಎಸ್. ಅಧಿಕಾರಿಗಳು ಸೇರಿದಂತೆ ಒಟ್ಟು 350 ಕಾರ್ಯಾಗಾರ ಆಯೋಜಿಸಲಾಗಿದೆ. ಪಿಎಸ್ಐ ಮತ್ತು ಹೆಚ್ಚಿನ ವೃಂದದ ಅಧಿಕಾರಿಗಳಿಗೆ ಸುಮಾರು 8 ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನ ಪ್ರಾಂಶುಪಾಲ, ಪೊಲೀಸ್ ವರಿಷ್ಠಾಧಿಕಾರಿ ಎಚ್.ಆರ್.ಭಗವಾನದಾಸ ಮಾತನಾಡಿ, ನೈಸರ್ಗಿಕ ವಿಕೋಪಗಳು ಸಂಭವಿಸುವುದನ್ನು ಮುಂಚಿತವಾಗಿ ತಿಳಿದು ಪೂರ್ವಸಿದ್ಧತೆ ಮಾಡಿಕೊಂಡರೆ ಪ್ರಾಣಹಾನಿ, ಆಸ್ತಿಹಾನಿ ತಪ್ಪಿಸಬಹುದು. ಈ ನಿಟ್ಟಿನಲ್ಲಿ ಇಲಾಖೆ ಅಧಿಕಾರಿಗಳು ಪ್ರಮುಖ ಜವಾಬ್ದಾರಿ ನಿರ್ವಹಿಸಬೇಕು. ಇದಕ್ಕಾಗಿ ಇಲಾಖೆಯು ಸಂಪನ್ಮೂಲಗಳನ್ನು ಹೆಚ್ಚಿಸಿಕೊಳ್ಳಬೇಕು. ಪ್ರಕೃತಿ-ಮಾನವ ವಿಕೋಪಗಳ ವೈಜ್ಞಾನಿಕ ಹಾಗೂ ಯೋಜನಾಬದ್ಧ ಕಾರ್ಯಾಚರಣೆ ನಡೆಸಿ ಕ್ರಮಕ್ಕೆ ಮುಂದಾಗಬೇಕು ಎಂದರು.
ತರಬೇತಿಯಲ್ಲಿ ಈಶಾನ್ಯ ವಲಯ ಜಿಲ್ಲೆಗಳ ಸುಮಾರು 30 ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ನಾಗನಹಳ್ಳಿ ಪೊಲೀಸ್ ತರಬೇತಿ ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಬಿ.ವೈ.ಬೆಳ್ಳುಬ್ಬಿ ಸ್ವಾಗತಿಸಿ, ಎಸ್.ಎಚ್. ಸುಬೇದಾರ ನಿರೂಪಿಸಿದರು. ಎಸ್.ಎಸ್. ಚಂದ್ರಶೇಖರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

