ಮೂಲ ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ; ಧರಣಿ
ಮುದಗಲ್: ಪಟ್ಟಣ ಪಂಚಾಯಿತಿ ವ್ಯಾಪ್ತಿಯ 5, 6 ಮತ್ತು 13ನೇ ವಾರ್ಡ್ಗಳಿಗೆ ಮೂಲ ಸೌಲಭ್ಯ ಕಲ್ಪಿಸುವಲ್ಲಿ ಆಡಳಿತ ಮಂಡಳಿ ಮತ್ತು ಮುಖ್ಯಾಧಿಕಾರಿಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸದಸ್ಯರಾದ ಶಿವರಾಜ ತಳವಾರ, ವೀರಭದ್ರಪ್ಪ ಕೊಳ್ಳಿ, ಮಾಸೂಮ ಷರೀಫ್ ಪಪಂ ಮುಂದೆ ಧರಣಿ ನಡೆಸಿದರು.
ಮೊಹರಂ ನಿಮಿತ್ತ ಪಟ್ಟಣದ ಎಲ್ಲ ವಾರ್ಡ್ಗಳನ್ನು ಸ್ವಚ್ಛಗೊಳಿಸುವುದಲ್ಲದೆ, ಕುಡಿವ ನೀರು, ಬೀದಿ ದೀಪಗಳನ್ನು ಅಳವಡಿಸಿದ್ದಾರೆ. ಅಲ್ಲದೆ ರಸ್ತೆಗಳ ಗುಂಡಿಗಳನ್ನು ಮುಚ್ಚಿದ್ದಾರೆ. ಆದರೆ ತಮ್ಮ ವಾರ್ಡ್ಗಳನ್ನು ನಿರ್ಲಕ್ಷಿಸಿದ್ದು ಅಧಿಕಾರಿಗಳು ಪಕ್ಷ ಭೇದ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊಹರಂ ನಿಮಿತ್ತ ಪಟ್ಟಣದ ರಸ್ತೆ, ಚರಂಡಿಗಳು ಸೇರಿದಂತೆ ಮೂಲ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗಳು 4 ಲಕ್ಷ ಅನುದಾನ ನೀಡಿದ್ದು, ಮುಖ್ಯಾಧಿಕಾರಿಗಳು ಅನುದಾನ ದುರ್ಬಳಕೆ ಮಾಡುತ್ತಿದ್ದಾರೆ. ಅಧ್ಯಕ್ಷರು, ಮುಖ್ಯಾಧಿಕಾರಿಗಳು ಅಭಿವೃದ್ಧಿ ಕಾರ್ಯಗಳಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದ್ದರಿಂದ ತಮ್ಮ ವಾರ್ಡ್ಗಳ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಹಾಯಕ ಆಯುಕ್ತರಿಗೆ ನೀಡಿದ ಮನವಿಯಲ್ಲಿ ಆರೋಪಿಸಿದ್ದಾರೆ.
ಕೂಡಲೇ ಜಿಲ್ಲಾಧಿಕಾರಿಗಳು ನೀಡಿರುವ ಅನುದಾನ ದುರ್ಬಳಕೆ ಬಗ್ಗೆ ತನಿಖೆ ಮಾಡಬೇಕು. ನಿರ್ಲಕ್ಷಿಸಿರುವ ತಮ್ಮ ವಾರ್ಡ್ಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಸದಸ್ಯರು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ವಾರ್ಡ್ ನಾಗರಿಕರು, ದಲಿತ ಮುಖಂಡರು ಭಾಗವಹಿಸಿದ್ದರು.
ವಾಗ್ವಾದ: ತಮ್ಮ ವಾರ್ಡ್ಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಸದಸ್ಯರು ಮತ್ತು ಅಧ್ಯಕ್ಷರನ್ನು ಸಹಾಯಕ ಆಯುಕ್ತರು ಪಪಂ.ಗೆ ಕರೆಯಿಸಿ ಚರ್ಚಿಸುತ್ತಿರುವಾಗ ಕೆಲ ಸಂಘಟಕರು ಮಧ್ಯ ಪ್ರವೇಶಿಸಿದಾಗ ಸದಸ್ಯರು ಮತ್ತು ಸಂಘಟಕರ ನಡುವೆ ವಾಗ್ವಾದ ನಡೆಯಿತು.
ನಿರ್ಲಕ್ಷ್ಯ ಮಾಡಲಾದ ವಾರ್ಡ್ಗಳಲ್ಲಿನ ಸಮಸ್ಯೆಗಳನ್ನು ಸರಿಪಡಿಸುವಂತೆ ಮುಖ್ಯಾಧಿಕಾರಿಗೆ ಸೂಚಿಸಿದರು. ಪಪಂ ಅಧ್ಯಕ್ಷ ರಜ್ಜಬಲಿ ಟಿಂಗ್ರಿ, ಸ್ಥಾಯಿ ಸಮಿತಿ ಅಧ್ಯಕ್ಷ ಹೆಮಂತ ನಾಗಲಾಪೂರ, ಸದಸ್ಯರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

