ರಾಯಚೂರು

ಹೊಸ ಪಡಿತರ ಚೀಟಿಗೆ ನವೆಂಬರ್ ಗಡುವು

Published On :

ಕನ್ನಡಪ್ರಭ ವಾರ್ತೆ ಟಿ ರಾಯಚೂರು ಟಿ ನ.15
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ನವೆಂಬರ್ ಅಂತ್ಯದೊಳಗೆ ಪಡಿತರ ಚೀಟಿಯ ವಿತರಣೆ ಪೂರ್ಣಗೊಳಿಸಬೇಕು. ಅರ್ಜಿಗಳ ಕಟ್ಟುನಿಟ್ಟಿನ ಪರಿಶೀಲನೆ ಮೂಲಕ ಬೋಗಸ್ ಕಾರ್ಡುಗಳು ವಿತರಣೆಯಾಗದಂತೆ ಎಚ್ಚರಿಕೆ ವಹಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು.
ಅವರು ತಾಲೂಕಿನ ಶಕ್ತಿನಗರದ ಕೆಪಿಸಿ ಅತಿಥಿ ಗೃಹದಲ್ಲಿ ಶುಕ್ರವಾರ ಕರೆದಿದ್ದ ಉತ್ತರ ಕರ್ನಾಟಕದ ಎಂಟು ಜಿಲ್ಲೆಗಳ ಆಹಾರ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರ ಪಡಿತರ ಚೀಟಿ ಅರ್ಜಿಗಳ ವಿಲೇವಾರಿಗೆ ನ. 15ರಂದು ಕಾಲಮಿತಿ ನಿಗದಿ ಮಾಡಿತ್ತು. ಆದರೆ ಅಧಿಕಾರಿಗಳ ವಿಳಂಬ ನೀತಿಯಿಂದಾಗಿ ಚೀಟಿ ವಿತರಣೆ ಇನ್ನೂ ಬಾಕಿಯಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪರಿಶೀಲನೆ ಕಡ್ಡಾಯ: ಸರ್ಕಾರದ ಮಹಾತ್ವಾಕಾಂಕ್ಷೆ ಯೋಜನೆ ಅನ್ನಭಾಗ್ಯದ ಸಮರ್ಪಕ ಜಾರಿಗೆ ಎಲ್ಲ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸ ಬೇಕು. ಅಷ್ಟೇ ಅಲ್ಲ, ನ್ಯಾಯಬೆಲೆ ಅಂಗಡಿಗಳಲ್ಲಿನ ಬೋಗಸ್ ಕಾರ್ಡುಗಳ ಬಗ್ಗೆ ಕೂಲಂಕಷ ಪರಿಶೀಲನೆ ಕಡ್ಡಾಯ. ಆಹಾರ ನಿರೀಕ್ಷಕರು, ಆಹಾರ ಇಲಾಖೆ ಹಿರಿಯ ಅಧಿಕಾರಿಗಲು ಪ್ರತಿ ತಿಂಗಳು ಎರಡು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಆಹಾರ ಧಾನ್ಯ ವಿತರಣೆ ಪ್ರಕ್ರಿಯೆ ಪರಿಶೀಲಿಸಬೇಕೆಂದು ಸೂಚಿಸಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಬೋಗಸ್ ಕಾರ್ಡುಗಳು ಕಂಡುಬಂದಲ್ಲಿ ಆಯಾ ಜಿಲ್ಲೆಯ ಮೇಲಧಿಕಾರಿಗಳನ್ನೇ ಹೊಣೆಯಾಗಿಸಲಾಗುತ್ತದೆ. ಆಹಾರ ನಿರೀಕ್ಷಕರು ನಿರ್ಲಕ್ಷ್ಯ ತೋರಿದಲ್ಲಿ ಅಂಥವರನ್ನು ಸೇವೆಯಿಂದ ಅಮಾನತು ಶಿಕ್ಷೆಯ ಜತೆಗೆ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದರು.
ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಯ ಆಹಾರ ಇಲಾಖೆಯ ಅಧಿಕಾರಿಗಳು ಪಡಿತರ ಚೀಟಿ ವಿತರಣೆ ಕುರಿತು ಸಭೆಗೆ ಮಾಹಿತಿ ನೀಡಿ ಸಿಬ್ಬಂದಿ ಕೊರತೆಯಿಂದಾಗಿ ಕಾರ್ಯ ವಿಳಂಬವಾಗಿದೆ. ಡಿ.15ರವರೆಗೆ ಕಾಲವಕಾಶ ನೀಡುವಂತೆ ಮನವಿ ಮಾಡಿದರು.
ಅಧಿಕಾರಿಗಳ ಹೊಣೆ: ಈ ವೇಳೆ ಮಾತನಾಡಿದ ಇಲಾಖೆ ಆಯುಕ್ತ ಹರ್ಷ ಗುಪ್ತಾ ಅವರು, ಬಿಪಿಎಲ್ ಕಾರ್ಡುಗಳ ಸಂಖ್ಯೆ ಹೆಚ್ಚು ಕಂಡುಬಂದಲ್ಲಿ ಅಂಥ ಕಾರ್ಡುದಾರರ ಮನೆ ಮನೆಗೆ ತೆರಳಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಯಾವುದೇ ಕಾರಣಕ್ಕೆ ಅನರ್ಹರಿಗೆ ಬಿಪಿಎಲ್ ಕಾರ್ಡು ದೊರೆಯುವಂತಿಲ್ಲ. ಅದೇ ರೀತಿ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ಬಿಡುಗಡೆ ವೇಳೆಯೂ ಕಣ್ಣಿಡುವುದು ಅನಿವಾರ್ಯ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯು ಕಾಳಸಂತೆಯಲ್ಲಿ ಮಾರಾಟವಾಗದಂತೆ ತಡೆವ ಹೊಣೆ ಅಧಿಕಾರಿಗಳ ಮೇಲಿದೆ ಎಂದು ಎಚ್ಚರಿಸಿದರು.
ಅಕ್ರಮಗಳಿಗೆ ಅವಕಾಶ ನೀಡುವ ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಬೇಕು. ಜತೆಗೆ ಅಂಥ ನ್ಯಾಯಬೆಲೆ ಅಂಗಡಿಗಳ ಮಾಲಿಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಸೂಚಿಸಿ, ಆಹಾರ ನಿರೀಕ್ಷಕರ ಬಗ್ಗೆ ಮೆದುಧೋರಣೆ ಸರಿಯಲ್ಲ. ಅವರಿಂದಲೇ ಬೋಗಸ್ ಕಾರ್ಡುಗಳಿಗೆ ಅವಕಾಶ ದೊರೆಯುವಿಕೆ ಸಾಧ್ಯ ಎಂಬುದನ್ನು ಮರೆಯುವಂತಿಲ್ಲ ಎಂದು ಕಿವಿಮಾತು ಹೇಳಿದರು.
ಅಕ್ರಮಕ್ಕೆ ಕಡಿವಾಣ: ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಸಭೆಯಲ್ಲಿ ಮಾತನಾಡಿ, ವಿವಿಧ ಗೋದಾಮುಗಳಿಂದ ಆಹಾರ ಧಾನ್ಯವು ಆಯಾ ತಾಲೂಕುಗಳಿಗೆ ಸಮರ್ಪಕವಾಗಿ ತಲುಪುವುದು ಮತ್ತು ಅಕ್ರಮಕ್ಕೆ ಕಡಿವಾಣ ಹಾಕಲು ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುವುದು ಅವಶ್ಯ ಎಂದು ಸಲಹೆ ನೀಡಿದರು. ಆಹಾರಧಾನ್ಯ ಹೊತ್ತ ಲಾರಿಯು ಸಾಗುವ ಮಾರ್ಗದ ಎಲ್ಲ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು  ಪೊಲೀಸ್ ಅಧಿಕಾರಿಗಳಿಗೆ ಎಸ್ಎಂಎಸ್ ರವಾನೆ ಮಾಡುವ ಮೂಲಕ ನಿಗಾಯಿರಿಸುವ ಸೌಲಭ್ಯ ಬಳಕೆ ಮಾಡಿಕೊಳ್ಳುವ ಮೂಲಕ ಅಕ್ರಮಕ್ಕೆ ಕಡಿವಾಣ ಹಾಕಬಹುದು ಎಂದು ಸಭೆಗೆ ಸಲಹೆ ನೀಡಿದರು.
ಈ ಕುರಿತು ಶೀಘ್ರ ಪರಿಶೀಲಿಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಂತರ ವಿವಿಧ ಜಿಲ್ಲೆಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ಕಾರ್ಯದರ್ಶಿ ಲತಾ ಕೃಷ್ಣರಾವ್, ಜಿಪಂ ಸಿಇಒ ಡಾ.ಮುದ್ದುಮೋಹನ್, ಹೆಚ್ಚುವರಿ ಡಿಸಿ ಎಂ.ತಿಮ್ಮಪ್ಪ, ಬೀದರ್, ಗುಲ್ಬರ್ಗಾ, ಬಳ್ಳಾರಿ, ಕೊಪ್ಪಳ, ರಾಯಚೂರು, ಬಿಜಾಪುರ, ಬಾಗಲಕೋಟೆ, ಯಾದಗಿರಿ ಜಿಲ್ಲೆಗಳ ಆಹಾರ ಇಲಾಖೆ ಉಪನಿರ್ದೇಶಕರು ಹಾಗೂ ಸಿಬ್ಬಂದಿ ಸಭೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.