ಮಕ್ಕಳ ಹಕ್ಕು ಜನಜಾಗೃತಿ ಎಲ್ಲರ ಹೊಣೆ: ಜಿಲ್ಲಾಧಿಕಾರಿ
ರಾಯಚೂರು: ಎಲ್ಲ ಮಕ್ಕಳಿಗೂ ಶಿಕ್ಷಣ ದೊರೆತು ಉತ್ತಮ ಪರಿಸರ ಕಲ್ಪಿಸುವ ಮೂಲಕ ಪ್ರಗತಿಗೆ ದಾರಿ ಮಾಡಬೇಕಿದೆ. ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಿ ಉತ್ತಮ ಪ್ರಜೆಗಳಾಗಿ ರೂಪಿಸುವ ಹೊಣೆ ಎಲ್ಲರದ್ದಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೇಳಿದರು.
ಅವರು ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಯುನಿಸೆಫ್ ಮತ್ತಿತರೆ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಕ್ಲಬ್ಗಳ ನಿರ್ದೇಶಕರ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿ, ಶಾಲೆಯಿಂದ ಯಾವುದೇ ಮಗು ಹೊರಗುಳಿಯದಂತೆ ಮಾಡುವುದು ಆದ್ಯ ಕರ್ತವ್ಯವಾಗಬೇಕಿದೆ ಎಂದು ಕರೆ ನೀಡಿದರು.
ದುಷ್ಪರಿಣಾಮ: ಎಲ್ಲರಿಗೂ ಗುಣಮಟ್ಟದ ಶಿಕ್ಷಣ ನೀಡಿಕೆಗೆ ಪೂರಕ ಕ್ರಮ ಕೈಗೊಳ್ಳಬೇಕಿದೆ. ಒಳ್ಳೆಯ ಶಿಕ್ಷಣ ಪಡೆದು ಬದುಕಿನಲ್ಲಿ ಉತ್ತುಂಗಕ್ಕೇರುವ ಕಾರ್ಯ ವಿದ್ಯಾರ್ಥಿಗಳು ಮಾಡಲೆಂದರು. ಇಂದಿನ ಮಕ್ಕಳು ಇಂದಿನ ಪ್ರಜೆಗಳಾಗಬೇಕು. ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹದಿಂದುಂಟಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳ ಪಾಲಕರಲ್ಲಿ ಅರಿವು ಮೂಡಿಸಬೇಕಿದೆ. ಬಾಲ್ಯ ವಿವಾಹ ಪದ್ದತಿ ತಡೆಯಲು ಅನೇಕ ಕಾನೂನಿದ್ದರೂ ಅವುಗಳ ಜಾರಿಯಲ್ಲಿ ವಿಫಲರಾಗುತ್ತಿದ್ದು, ಮಕ್ಕಳಲ್ಲಿ ಶೈಕ್ಷಣಿಕ ಅರಿವಿನ ಮೂಲಕ ಇಂಥ ಎಲ್ಲ ಅನಿಷ್ಟ ಪದ್ಧತಿಗಳಿಗೆ ಕಡಿವಾಣ ಹಾಕಬಹುದಾಗಿದೆ ಎಂದು ಸಲಹೆ ನೀಡಿದರು.
ಜವಾಬ್ದಾರಿ: ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಕನಸು ಪ್ರತಿಯೊಬ್ಬ ಪಾಲಕ ಕಾಣಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಪ್ರಮಾಣ ಶೇ.100ಕ್ಕೆ ತಲುಪುವಂತೆ ಮಾಡುವುದು ಶಿಕ್ಷಣ ಇಲಾಖೆಯ ಬಹುದೊಡ್ಡ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆ ಮೂಲಕ ತಮ್ಮ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ಮಾಹಿತಿ ಪಡೆದು ಅಳವಡಿಸಿಕೊಳ್ಳಲು ಮನವಿ ಮಾಡಿದರು.
ಡಿಡಿಪಿಐ ರಾಮಾಂಜನೇಯ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಶೈಕ್ಷಣಿಕ ಪ್ರಗತಿಗೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಸಮಾಜದಲ್ಲಿ ಎಲ್ಲ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪಾಲಕರು ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು. ಜಿಲ್ಲಾ ಕಾರ್ಮಿಕಾಧಿಕಾರಿ ಆರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ದೊರೆಸ್ವಾಮಿ ಮಾತನಾಡಿದರು.
ಬಿಇಒ ಮಲ್ಲಿಕಾರ್ಜುನ, ಯುನಿಸೆಫ್ ಅಧಿಕಾರಿ ರಾಘವೆಂದ್ರ ಭಟ್ ಇದ್ದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಮಕ್ಕಳ ಹಕ್ಕು ಕ್ಲಬ್ ನಿರ್ದೇಶಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

