ರಾಯಚೂರು

ಜ.4 ರಿಂದ ವಿಚಾರ ಸಂಕಿರಣ: ಕುಲಪತಿ

Published On :

ಕನ್ನಡಪ್ರಭ ವಾರ್ತೆ ರಾಯಚೂರು ನ.28
ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಜ.4, 5ರಂದು ಪ್ರಾದೇಶಿಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್, ಇದೇ ಮೊದಲ ಬಾರಿಗೆ ಬೆಂಗಳೂರಿನ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಜಿಲ್ಲಾ ಕೃಷಿ ವಿವಿ ಹಾಗೂ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಎರಡು ದಿನಗಳ ವಿಚಾರ ಸಂಕಿರಣವನ್ನು ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ವಿಜ್ಞಾನ ಮತ್ತು ತಂತ್ರಜ್ಞಾನದಿಂದ ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ಬಳಕೆಯ ಮೂಲಕ ಸುಸ್ಥಿರ ಅಭಿವೃದ್ಧಿ ಸಾಧಿಸುವ ಕುರಿತ ವಿಚಾರ ಸಂಕಿರಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು, ಪೋಸ್ಟರ್‌ಗಳ ಪ್ರದರ್ಶನ ಆಯೋಜಿಸಿದ್ದು, ರಾಜ್ಯದ ವಿವಿಧೆಡೆಯಿಂದ ಸಂಶೋಧಕರು, ವಿಜ್ಞಾನಿಗಳು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸೇರಿ 500 ಜನ ಪಾಲ್ಗೊಳ್ಳಲಿದ್ದಾರೆಂದು ಹೇಳಿದರು.
ಪೋಸ್ಟರ್ ಆಹ್ವಾನ: ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದ ಮೇಲಿನ ಪೋಸ್ಟರ್‌ಗಳನ್ನು ಸ್ಪರ್ಧೆಗೆ ಆಹ್ವಾನಿಸಿದ್ದು, ಆಸಕ್ತರು ಡಿ.16 ರೊಳಗೆ ಪ್ರೊ. ಸಿ.ಡಿ. ಪಾಟೀಲ್, ಸದಸ್ಯ ಕಾರ್ಯದರ್ಶಿ, ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರ, ರಾಷ್ಟ್ರಕವಿ ಕುವೆಂಪುವನ, ವಿಜ್ಞಾನ ಬೆಟ್ಟ, ಮಂತ್ರಾಲಯ ರಸ್ತೆ, ರಾಯಚೂರು- ಇವರಿಗೆ ಕಳಿಸಬೇಕು. ಹೆಚ್ಚಿನ ಮಾಹಿತಿಗೆ ಅವರನ್ನು ಮೊ. 9448427585 ಇಲ್ಲಿಗೆ ಸಂಪರ್ಕಿಸಬಹುದು. ಕಡೆಯ ದಿನಾಂಕದ ನಂತರದಲ್ಲಿ ಬಂದಂಥ ಪೋಸ್ಟರ್‌ಗಳನ್ನು ಪರಿಗಣಿಸುವುದಿಲ್ಲ ಎಂದು ತಿಳಿಸಿದರು.
ಬಹುಮಾನ: ಈ ಸ್ಪರ್ಧೆಯ ವಿಜೇತರಿಗೆ ಮೊದಲ ಬಹುಮಾನ 10 ಸಾವಿರ, ಎರಡನೇ ಬಹುಮಾನ 7,500 ಮತ್ತು ಮೂರನೇ ಬಹುಮಾನವಾಗಿ 5 ಸಾವಿರ ನೀಡಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರೊ. ಸಿ.ಡಿ. ಪಾಟೀಲ್ ಮಾತನಾಡಿ, ಜ. 4ರಂದು ನಡೆಯುವ ವಿಚಾರ ಸಂಕಿರಣದ ಉದ್ಘಾಟನೆಯನ್ನು ಪದ್ಮಭೂಷಣ ಪ್ರೊ. ಯು.ಆರ್. ರಾವ್ ನೆರವೇರಿಸುವರು. ವಿವಿಧೆಡೆಯಿಂದ ಆಗಮಿಸುವ ವಿಜ್ಞಾನಿಗಳು ವಿಶೇಷ ಉಪನ್ಯಾಸ ನೀಡುವರು ಎಂದು ತಿಳಿಸಿದರು.
ಎರಡು ದಿನಗಳ ವಿಚಾರ ಸಂಕಿರಣ ಅಚ್ಚುಕಟ್ಟಾಗಿ ನಡೆಯುವಂತಾಗಲು ವಿವಿಧ ಸಮಿತಿ ರಚಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ರಾಯಚೂರು ಕೃಷಿ ವಿವಿ ರಿಜಿಸ್ಟ್ರಾರ್ ಡಾ. ಡಿ.ಪಿ. ಬಿರಾದಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.