ಕಬ್ಬಿಗೆ ವೈಜ್ಞಾನಿಕ ಬೆಲೆಯೇ ಬೇಕು
ಕನ್ನಡಪ್ರಭ ವಾರ್ತೆ ರಾಯಚೂರು ನ.29
ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ನಗರದಲ್ಲಿ ಶುಕ್ರವಾರ ಕರ್ನಾಟಕ ಜನತಾ ಪಾರ್ಟಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೇ ಬಡವರ, ಹಿಂದುಳಿದವರ, ರೈತರ ಪರವಾಗಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದರು.
2013ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತೀವೃಷ್ಟಿ, ಬರಗಾಲಕ್ಕೆ ತುತ್ತಾಗಿದ್ದು, ನಷ್ಟದ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ವರದಿ ಸರ್ಕಾರದ ಬಳಿಯಿದ್ದರೂ, ಸೂಕ್ತ ಪರಿಹಾರ ನೀಡುವತ್ತ ಸರ್ಕಾರ ಗಮನಹರಿಸುತ್ತಿಲ್ಲ ಎಂದು ಆರೋಪಿಸಿದರು.
ಸಮರ್ಪಕ ಬೆಲೆಗೆ ಒತ್ತಾಯ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಕೆಲ ದಿನದಿಂದ ಕೆಜಿಪಿ ನಾಯಕ ಯಡಿಯೂರಪ್ಪ ಶಾದಿಭಾಗ್ಯ ಯೋಜನೆಯನ್ನು ಎಲ್ಲ ಜಾತಿ ಜನಾಂಗದ ಬಡವರಿಗೆ ವಿಸ್ತರಿಸುವಂತೆ ಒತ್ತಾಯಿಸಿ ಹೋರಾಟ ನಡೆಸಿದ್ದರು. ಹಾಗೆಯೇ ಯಡಿಯೂರಪ್ಪ ಅವರು ಕಬ್ಬು ಬೆಳೆಗಾರರಿಗೆ ಸಮರ್ಪಕ ಬೆಲೆ ನೀಡುವಂತೆ ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದಾರೆ. ಆದರೆ ಸರ್ಕಾರ ಮಾತ್ರ ಕಿವಿಗೊಟ್ಟಿರಲಿಲ್ಲ ಎಂದು ದೂರಿದರು.
ಬೆಳಗಾವಿ ಅಧಿವೇಶನದ ಸಂದರ್ಭ ಸುವರ್ಣಸೌಧದ ಎದುರು ಕಬ್ಬು ಬೆಳೆಗಾರರು ವೈಜ್ಞಾನಿಕ ಬೆಲೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ, ಧರಣಿ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಸಮಸ್ಯೆ ಆಲಿಸದೇ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆಂದು ಟೀಕಿಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಸಕ್ಕರೆ ಕಾರಖಾನೆಗಳ ಮಾಲಿಕರ ಪರವಾದ ನಿಲುವು ತಳೆದಿರುವುದು ಸ್ಪಷ್ಟವಾಗಿದೆ. ಇದ ರಿಂದಾಗಿ ರೈತರು ಬೆಳೆದ ಕಬ್ಬಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಪರಿಣಾಮ ಬೆಳಗಾವಿಯ ರೈತ ವಿಠಲ್ ಅರಭಾವಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸರ್ಕಾರವೇ ರೈತನ ಸಾವಿಗೆ ನೇರ ಹೊಣೆಯೆಂದು ಆರೋಪಿಸಿದರು.
ಆದೇಶ ಹೊರಡಿಸಿ: ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ರೈತ ವಿರೋಧಿ, ಕನಿಷ್ಟ ಸೌಜನ್ಯವಿಲ್ಲದ, ಬಡಜನ ವಿರೋಧಿ, ದುರಂಹಕಾರಿ ವರ್ತನೆಯಾಗಿದೆ. ಅದರಿಂದಾಗಿಯೇ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಅಷ್ಟೇ ಅಲ್ಲ ರೈತರು ಬೆಳೆದ ಬೆಳೆಗೆ ಸಮರ್ಪಕ ಬೆಂಬಲ ಬೆಲೆ ದೊರೆಯದೇ ಆರ್ಥಿಕ ನಷ್ಟಕ್ಕೆ ಗುರಿಯಾಗುವಂತಾಗಿದೆ ಎಂದು ಟೀಕಿಸಿದರು. ರಾಜ್ಯ ಸರ್ಕಾರ ಕೂಡಲೇ ಕಬ್ಬು ಬೆಳೆಗಾರರಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ ಆದೇಶ ಹೊರಡಿಸಬೇಕು. ರೈತನ ಆತ್ಮಹತ್ಯೆಗೆ ಕಾರಣರಾದ ಸಿಎಂ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಬಸವರಾಜ ಕಳಸ, ಶಂಕರಗೌಡ ಹರವಿ, ಮಲ್ಲಿಕಾರ್ಜುನ ತಳವಾರ್, ಶಿವಕುಮಾರ್ ಪೊಲೀಸ್ ಪಾಟೀಲ್, ಸುರೇಶ್ ವೆಂಕಟಾಪೂರ, ಶಶಿರಾಜ್ ಮಸ್ಕಿ, ಪಂಪನಗೌಡ ಮಿರ್ಜಾಪುರ ಸೇರಿದಂತೆ ಅನೇಕರಿದ್ದರು.
ರೈತ ವಿಠಲ್ ಆತ್ಮಹತ್ಯೆಗೆ ಸರ್ಕಾರ ಹೊಣೆ: ಚಾಮರಸ
ಲಿಂಗಸ್ಗೂರು: ಬೆಳಗಾವಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ರೈತ ಸಂಘದಿಂದ ನಡೆಸುತ್ತಿರುವ ಪ್ರತಿಭಟನಾ ಧರಣಿ ಸಂದರ್ಭದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರವೇ ಹೊಣೆ ಹೊರಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲೀಪಾಟೀಲ್ ಹೇಳಿದರು.
ನಿರ್ಲಕ್ಷ್ಯ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಲಹಾ ಮಂಡಳಿಯಲ್ಲಿ ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿದ್ದರೂ ಸಕ್ಕರೆ ಕಾರ್ಖಾನೆ ಮಾಲೀಕರು ಜಾರಿಗೆ ತರುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಸಕ್ಕರೆ ಕಾರ್ಖಾನೆ ಮಾಲೀಕರು ಸರ್ಕಾರ ನಡೆಸುತ್ತಿದ್ದಾರೋ ಅಥವಾ ಸರ್ಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಹಿಡಿತದಲ್ಲಿದ್ದಾರೋ ತಿಳಿಯುತ್ತಿಲ್ಲ. ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಇದರಿಂದ ಕಬ್ಬು ಬೆಳೆಗಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡ ರೈತ ಅರಭಾವಿ ಕುಟುಂಬ ನಿರ್ವಣೆ ಜವಾಬ್ದಾರಿ ಹೊತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು.
ನಾರಾಯಣಪುರ ಬಲದಂಡೆ, ರಾಂಪೂರ ಏತ ನೀರಾವರಿ ಯೋಜನೆಗಳಿಗೆ ಮಾ.10 ರವರೆಗೆ ನೀರು ಬಿಡುವುದಾಗಿ ಹೇಳಿರುವ ನೀರಾವರಿ ಸಲಹಾ ಸಮಿತಿ ಸಭೆ ನಿರ್ಣಯ ಒಪ್ಪುವುದಿಲ್ಲ. ಶೇಂಗಾ ಬೆಳೆ ಸೇರಿದಂತೆ ಅಲ್ಪಾವಧಿ ಬೆಳೆ ಪಡೆಯಲು ಮಾರ್ಚ ಅಂತ್ಯದವರೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಮತ್ತು ನೀರಾವರಿ ಸಲಹಾ ಸಮಿತಿ ಸಭೆಗೆ ರೈತ ಮುಖಂಡರನ್ನು ಆಹ್ವಾನಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

