ಕಾಂಗ್ರೆಸ್ ಯಶಸ್ಸಿಗೆ ಕಾರ್ಯಕರ್ತರ ಪರಿಶ್ರಮ ಕಾರಣ
ಮಸ್ಕಿ: ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಪಕ್ಷದ ಯಶಸ್ಸು ಕಾರ್ಯಕರ್ತರ ಪರಿಶ್ರಮಕ್ಕೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎ. ವಸಂತ ಕುಮಾರ ಹೇಳಿದರು.
ಪಟ್ಟಣದ ಭ್ರಮರಾಂಬಾ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಅಲ್ಪಸಂಖ್ಯಾತ ನಿಗಮಗಳ ಸದಸ್ಯರ ಸಾಲಮನ್ನಾದಂತಹ ಜನಪರ ಯೋಜನೆಗಳನ್ನು ಜಾರಿಗೆ ತರುವುದರೊಂದಿಗೆ ಜನಪರ ನಿಲುವು ಸ್ಪಷ್ಟಪಡಿಸಿದೆ ಎಂದರು.
ಕಾರ್ಯಕ್ರಮಕ್ಕೆ ಚಾಲನೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ದಿಗ್ವಿಜಯಸಿಂಗ್ ಅವರ ಸೂಚನೆಯ ಮೇರೆಗೆ ಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಸದಸ್ಯತ್ವದ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ ಎಂದರು.
ಪಕ್ಷದಲ್ಲಿ ಗುಂಪುಗಾರಿಕೆಯನ್ನು ಸಹಿಸಲಾಗದು. ಎಲ್ಲರೂ ಪಕ್ಷಕ್ಕಾಗಿ ದುಡಿದಾಗ ಮಾತ್ರ ಯಶಸ್ಸು ಸಿಗಲು ಸಾಧ್ಯ. ಶಾಸಕರು ಹಾಗೂ ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಲ್ಲ ಕಾರ್ಯಕರ್ತರನ್ನು ವಿಸ್ವಾಸಕ್ಕೆ ತೆಗೆದುಕೊಂಡು ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಬೇಕೆಂದು ಸೂಚಿಸಿದರು.
ನೈರ್ಮಲ್ಯಕ್ಕೆ ಮುಂದಾಗಿ: ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ಜಿಲ್ಲೆಗೆ ಇಪ್ಪತ್ತೇಳು ಸಾವಿರ ಶೌಚಾಲಯ ಮಂಜೂರಿಯಾಗಿದ್ದು, ಪ್ರತಿ ಮನೆಯಲ್ಲೂ ಶೌಚಾಲಯವನ್ನು ನಿರ್ಮಿಸಿಕೊಳ್ಳುವ ಬಗ್ಗೆ ಮಹಿಳೆಯರು ಮುಂದಾಗುವ ಮೂಲಕ ಗ್ರಾಮ ನೈರ್ಮಲ್ಯಕ್ಕೆ ಮುಂದಾಗಬೇಕಿದೆ ಎಂದರು. ಬಿಜೆಪಿ ಸರ್ಕಾರ ಬೇಕಾಬಿಟ್ಟಿ ಯೋಜನೆಗಳಿಗೆ ಮಂಜೂರಾತಿ ನೀಡಿ ಹಣವನ್ನು ಬಿಡುಗಡೆ ಮಾಡದ್ದರಿಂದ ಅನೇಕ ಕಾಮಗಾರಿ ಅನುಷ್ಠಾನಗೊಳ್ಳಲಿಲ್ಲ. ಬಿಜೆಪಿ ಸರ್ಕಾರದ ಅವಧಿಯ 9 ಕೋಟಿ ಕಾಮಗಾರಿ ಬಾಕಿ ಉಳಿದಿದೆ. ಆದ್ದರಿಂದ ಅಭಿವೃದ್ಧಿ ಕೆಲಸಗಳಲ್ಲಿ ನಿಧಾನಗತಿಯಾಗಿದೆ ಎಂದು ವಿವರಿಸಿದರು. ಮಸ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಂದಾನಪ್ಪ ಗುಂಡಳ್ಳಿ, ಲಿಂಗಸ್ಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಬಸವಂತರಾಯ ಕುರಿ ಮಾತನಾಡಿದರು. ಎಚ್.ಬಿ. ಮುರಾರಿ, ಮಂಜುನಾಥ ಪಾಟೀಲ್, ಹನುಮಂತಪ್ಪ ಮುದ್ದಾಪೂರ, ಶ್ರೀಶೈಲಪ್ಪ ಬ್ಯಾಳಿ, ಪಾಮಯ್ಯ ಮುರಾರಿ, ಸಿದ್ರಾಮಣ್ಣ ಸಾಹುಕಾರ, ಮಲ್ಲಿಕಾರ್ಜುನ ಪಾಟೀಲ್, ಯಲ್ಲೋಜಿ ರಾವ್ ಕೋರೆಕರ್ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

