ರಾಯಚೂರು

ಕೃಷಿ ಇಲಾಖೆಗೆ ನೋಟಿಸ್; ಆದೇಶ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಅ.31
ಬೆಳೆ ಹಾನಿ ಅಂದಾಜಿಸುವಲ್ಲಿ ವಿಳಂಬ ತೋರಿದ ಕೃಷಿ ಇಲಾಖೆ ಅಧಿಕಾರಿಗಳಿಗೆ ನೋಟಿಸ್ ಜಾರಿಗೆ ಸೂಚನೆ, ಮಾರ್ಚ್ ಅಂತ್ಯಕ್ಕೆ ನಿಗದಿಪಡಿಸಿದ ಗುರಿ ಸಾಧಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ. ಜಿಲ್ಲೆಯಲ್ಲಿ ಶಿಶುಮರಣ ಪ್ರಮಾಣ ತಗ್ಗಿಸಲು ಆರೋಗ್ಯ ಇಲಾಖೆಗೆ ಸ್ಪಷ್ಟ ಸೂಚನೆ.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದು ಹೀಗೆ.
ಕೃಷಿ ಇಲಾಖೆ ಮೇಲಿನ ಚರ್ಚೆಯಲ್ಲಿ ಕೃಷಿ ಅಧಿಕಾರಿ ರುದ್ರೇಶ್ ಮಾತನಾಡಿ, ಸೆಪ್ಟಂಬರ್‌ನಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯಲ್ಲಿ ಒಟ್ಟು 2316 ಹೆಕ್ಟೇರ್‌ನಷ್ಟು ಪ್ರದೇಶದಲ್ಲಿ ಬೆಳೆದಿದ್ದ ತೊಗರಿ, ಹತ್ತಿ ಸೇರಿ ವಿವಿಧ ಬೆಳೆಗೆ ಹಾನಿಯಾಗಿದೆ. ಪರಿಹಾರಕ್ಕೆ ಕೋರಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಸಚಿವ ಡಾ.ಪಾಟೀಲ್ ಅವರು, ಬೆಳೆ ಹಾನಿ ಸಮೀಕ್ಷೆ ತೀರಾ ವಿಳಂಬವಾಗಿದೆ. ಅದಕ್ಕೆ ಕೃಷಿ ಇಲಾಖೆಯೇ ಹೊಣೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಈಗಾಗಲೇ ಪರಿಹಾರ ವಿತರಣೆ ಕಾರ್ಯ ಜಾರಿಯಲ್ಲಿದೆ. ರಾಯಚೂರು ಜಿಲ್ಲೆಯಲ್ಲಿ ಮಾತ್ರ ಹಾನಿ ಸಮೀಕ್ಷೆ ಮುಗಿದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಸ್ಪಷ್ಟನೆ ನೀಡಿದ ಕೃಷಿ ಅಧಿಕಾರಿಯು ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದು ಅದರಿಂದಲೇ ಸಮೀಕ್ಷೆಯಲ್ಲಿ ವಿಳಂಬವಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿನ ಸಿಬ್ಬಂದಿ ಬಿತ್ತನೆ ಬೀಜ ವಿತರಣೆ ಕಾರ್ಯದಲ್ಲಿದ್ದುದರಿಂದ ಸಮೀಕ್ಷೆಗೆ ತಡವಾಗಿದೆ ಎಂದು ವಿವರಿಸಿದರು.
ಇದರಿಂದ ಸಂತೃಪ್ತರಾಗದ ಸಚಿವರು ವಿಳಂಬಕ್ಕೆ ಕಾರಣ ಕೇಳಿ ನೋಟಿಸ್ ಜಾರಿ ಮಾಡುವಂತೆ ಜಿಪಂ ಸಿಇಒ ಡಾ.ಮುದ್ದುಮೋಹನ್ ಅವರಿಗೆ ಸೂಚನೆ ನೀಡಿ ಕರ್ತವ್ಯ ಲೋಪವನ್ನು ಯಾವುದೇ ಕಾರಣಕ್ಕೆ ಸಹಿಸಲಾಗದು ಎಂದು ಎಚ್ಚರಿಸಿದರು.
ನಂತರ ನಡೆದ ಪಾಲ್ಗೊಂಡು ಮಾತನಾಡಿದ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಜಿಲ್ಲೆಯಲ್ಲಿ ಬತ್ತದ ದರ ಮಾರುಕಟ್ಟೆಯಲ್ಲಿ ಕುಸಿತ ಕಂಡಿದೆ. ಅದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಆವರ್ತ ನಿಧಿ ಬಳಸಿ ಬೆಂಬಲ ಬೆಲೆಯಲ್ಲಿ ಖರೀದಿಗೆ ಮುಂದಾಗಬೇಕು. ಈ ಬಗ್ಗೆ ಸರ್ಕಾರದ ಗಮನ ಸೆಳೆಯುವಂತೆ ಮನವಿ ಮಾಡಿದರು.
ಅತಿವೃಷ್ಠಿ ಹಾನಿಯಿಂದಾದ ವಿವಿಧ ಕಾಮಗಾರಿಗಳ ಪ್ರಗತಿ ಕುರಿತ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್, ವಿವಿಧ ಇಲಾಖೆಗಳಿಂದ ಕೈಗೊಂಡ ಕಾಮಗಾರಿಗಳು ತೀರಾ ಕಳಪೆಯಾಗಿವೆ. ಅದರಿಂದ ಕೈಗೊಂಡ ಕಾಮಗಾರಿ ವ್ಯರ್ಥವಾಗಿದೆ. ಲಕ್ಷಾಂತರ ರು. ವೆಚ್ಚ ಮಾಡಿದ್ದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಸಚಿವ ಡಾ.ಪಾಟೀಲ್ ಮಾತನಾಡಿ, 3ನೇ ತಂಡದ ಪರಿಶೀಲನೆ ನಂತರದಲ್ಲಿ ಅಂಥ ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಜಿಲ್ಲೆಯಲ್ಲಿ ಅತಿವೃಷ್ಠಿ ಪರಿಹಾರ ಕಾಮಗಾರಿಗಳಲ್ಲಿ ಒಟ್ಟು 150 ಕಾಮಗಾರಿ ಕೈಗೆತ್ತಿಕೊಂಡಿದ್ದು ನಿಧಾನಗತಿಯಲ್ಲಿವೆ. ವಿವಿಧ ಇಲಾಖೆಗಳಿಗೆ ಅಗತ್ಯ ಅನುದಾನ ಒದಗಿಸಿದ್ದರೂ ಕಾಮಗಾರಿ ವೇಗ ಪಡೆದಿಲ್ಲ ಎಂದು ಸಭೆಗೆ ತಿಳಿಸಿದರು.
ಸಚಿವರು ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಶುಸಂಗೋಪನಾ ಇಲಾಖೆಗೆ ಸಂಬಂಧಿಸಿ ಜಿಲ್ಲೆಯಲ್ಲಿ 6 ಲಕ್ಷ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ಹಾಕುವ ಗುರಿಯಿತ್ತು. ಆ ಪೈಕಿ 2.77 ಲಕ್ಷ ಲಸಿಕೆ ಹಾಕಲಾಗಿದೆ. ಸಿಬ್ಬಂದಿ ಕೊರತೆಯಿಂದ ಸರ್ಕಾರದ ಕಾರ್ಯಕ್ರಮಗಳ ಜಾರಿಗೆ ವಿಳಂಬವಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ 73 ಪಶುವೈದ್ಯರ ಹುದ್ದೆಗಳಿದ್ದು ಅವುಗಳಲ್ಲಿ ಕೇವಲ 14 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಅದೇ ರೀತಿ 61 ಪಶು ವೈದ್ಯಕೀಯ ನಿರೀಕ್ಷಕರ ಹುದ್ದೆಗಳಲ್ಲಿ 51 ಜನ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಬ್ಬಂದಿ ಕೊರತೆಯಿದೆ ಎಂದು ಸಭೆಗೆ ವಿವರಿಸಿದರು.
ಆರೋಗ್ಯ ಇಲಾಖೆಯ ಚರ್ಚೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾರಾಯಣಪ್ಪ, ಜಿಲ್ಲೆಯಲ್ಲಿ ಇದುವರೆಗೆ 40 ಚಿಕೂನ್ ಗುನ್ಯಾ ಪ್ರಕರಣ ವರದಿಯಾಗಿದೆ. ಅದರಲ್ಲಿ 9 ಪ್ರಕರಣ ಖಚಿತವಾಗಿವೆ. ಹಾಗೆಯೇ ಡೆಂಘೀಜ್ವರದ 784 ಶಂಕಿತ ಪ್ರಕರಣ ವರದಿಯಾಗಿದೆ. ಅವುಗಳಲ್ಲಿ 128 ಜನರಿಗೆ ಡೆಂಘೀ ಇರುವುದು ಖಚಿತವಾದ ಹಿನ್ನೆಲೆ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಡೆಂಘೀಯಿಂದ ಜಿಲ್ಲೆಯಲ್ಲಿ 2 ಸಾವು ಸಂಭವಿಸಿದೆ ಎಂದು ತಿಳಿಸಿದರು.
ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಮಾತನಾಡಿ, ಡೆಂಘೀಜ್ವರದಿಂದ ಹೆಚ್ಚು ಪೀಡಿತ ಪ್ರದೇಶದಲ್ಲಿ ಜಾಗೃತಿ ಕಾರ್ಯಕ್ರಮ, ಸೊಳ್ಳೆಗಳ ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿ, ಅದಕ್ಕೆ ಜಿಪಂ ನೆರವು ಪಡೆಯಲು ಆದೇಶಿಸಿದರು.
ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಸಾಕಷ್ಟಿದೆ. ಈಚೆಗೆ 14 ಹುದ್ದೆಗಳಿಗೆ ನೇಮಕಕ್ಕೆ ಅರ್ಜಿ ಕರೆಯಲಾಗಿತ್ತು. ಆದರೆ, ಕೇವಲ 4 ಜನ ಎಂಬಿಬಿಎಸ್ ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಅದೇ ರೀತಿ ಜಿಲ್ಲೆಯಲ್ಲಿ ಕೇವಲ ಇಬ್ಬರು ಕಣ್ಣಿನ ತಜ್ಞರಿದ್ದು, ಅಂಧತ್ವ ನಿವಾರಣೆ ಕಾರ್ಯಕ್ರಮಗಳಿಗೆ ಹಿನ್ನಡೆ ಆಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಕೇಂದ್ರದ ಎನ್‌ಆರ್‌ಎಚ್‌ಎಂ ಯೋಜನೆಯಡಿ ತಜ್ಞವೈದ್ಯರ ನೇಮಕಕ್ಕೆ ಅರ್ಜಿ ಕರೆಯಲಾಗಿದೆ ಎಂದು ಸಭೆಗೆ ಅವರು ತಿಳಿಸಿದರು. ಈ ವೇಳೆ ಮಾತನಾಡಿದ ಸಚಿವ ಡಾ.ಪಾಟೀಲ್, ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ತಗ್ಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಸದ್ಯ ಶೇ.28.7 ರಷ್ಟಿದ್ದು ಮುಂದಿನ ದಿನಗಳಲ್ಲಿ ಈ ಪ್ರಮಾಣವನ್ನು ಶೇ.19 ಕ್ಕಿಳಿಸುವ ನಿಟ್ಟಿನಲ್ಲಿ ಪೂರಕವಾಗಿ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೇವೆ ಬಲಪಡಿಸುವ ಕಾರ್ಯ ಆಡಳಿತ ಕೈಗೊಳ್ಳಬೇಕೆಂದು ಸೂಚಿಸಿದರು.
ನಂತರ ರೇಷ್ಮೆ, ಅರಣ್ಯ ಸೇರಿ ವಿವಿಧ ಇಲಾಖೆಗಳ ಪ್ರಗತಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಜಿಪಂ ಅಧ್ಯಕ್ಷೆ ಲಲಿತಮ್ಮ ಪಾಟೀಲ್, ಉಪಾಧ್ಯಕ್ಷ ಕೆ.ಶರಣಪ್ಪ, ಜಿಪಂ ಸಿಇಒ ಡಾ.ಮುದ್ದುಮೋಹನ್, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಹೆಚ್ಚುವರಿ ಎಸ್ಪಿ ಅಶೋಕ ಸದಲಗಿ ಇದ್ದರು. ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.