'ಬೋಧನೆ ಪರಿಣಾಮಕಾರಿಯಾಗಿರಲಿ'
ಕನ್ನಡಪ್ರಭ ವಾರ್ತೆ , ರಾಯಚೂರು , ಸೆ.5
ಶಿಕ್ಷಕರು ಪರಿಣಾಮಕಾರಿ ಬೋಧನೆಗೆ ಹೆಚ್ಚಿನ ಒತ್ತು ನೀಡಬೇಕು. ಆ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವಂತೆ ಗ್ರಾಮೀಣ ಕ್ಷೇತ್ರದ ಶಾಸಕ ತಿಪ್ಪರಾಜು ಹವಾಲ್ದಾರ್ ಸಲಹೆ ನೀಡಿದರು.
ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲಾ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಸಿದ್ಧ: ಪ್ರತಿ ವಿದ್ಯಾರ್ಥಿಯ ಸಾಧನೆಗೆ ಶಿಕ್ಷಕರ ಮಾರ್ಗದರ್ಶನವೇ ಕಾರಣವಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಪರಿಶ್ರಮ ವಹಿಸಿ ದುಡಿಯಬೇಕು. ಜಿಲ್ಲೆಯಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವತ್ತ ತಾವು ಸದಾ ಸ್ಪಂದಿಸುವುದಾಗಿ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹಾಂತೇಶ ಮಸ್ಕಿ ಉಪನ್ಯಾಸ ನೀಡಿ, ಪಾಠದ ಬೋಧನೆ ಎಂಬುದು ಪವಿತ್ರ ಕೆಲಸವಾಗಿದೆ. ಮಕ್ಕಳಿಗೆ ಶಿಕ್ಷಣ ಕಲಿಕೆಯತ್ತ ಆಸಕ್ತಿ ಮೂಡಿಸುವ ಕಾರ್ಯ ಆಗಬೇಕಿದೆ. ದೇಶ ಕಂಡ ಮಹಾನ್ ನಾಯಕರೆಲ್ಲರೂ ಅವರಿಗೆ ಶಿಕ್ಷಣ ನೀಡಿದ ಬೋಧಕ ವರ್ಗದ ಪ್ರೇರಣೆಯಿಂದಲೇ ಸಾಧನೆ ಮೆರೆದಿದ್ದಾರೆ ಎಂದರು.
ಸರ್ಕಾರ ಪರಾಮರ್ಶಿಸಲಿ: ರಾಜ್ಯ ಸರ್ಕಾರ ಬಿಸಿಯೂಟ ಮತ್ತು ಕ್ಷೀರಭಾಗ್ಯದಂಥ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಅಂಥ ಯೋಜನೆಗಳ ಜಾರಿಯಿಂದ ಶಿಕ್ಷಕರಿಗೆ ಉಂಟಾಗುತ್ತಿರುವ ತೊಡಕುಗಳ ಬಗ್ಗೆ ಗಮನಹರಿಸಬೇಕಿದೆ. ಕಲಿಕೆ ಸಮಯದಲ್ಲಿ ಇಂಥ ಕಾರ್ಯಕ್ರಮಗಳು ಎಷ್ಟರ ಮಟ್ಟಿಗೆ ಲಾಭದಾಯಕ ಎಂಬುದನ್ನು ಸರ್ಕಾರ ಪರಾಮರ್ಶಿಸಬೇಕಿದೆ ಎಂದು ಮನವಿ ಮಾಡಿದರು.
ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ: ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ಶಾಸಕ ಡಾ. ಶಿವರಾಜ ಪಾಟೀಲ್ ವಹಿಸಿ ಮಾತನಾಡಿದರು. ಈ ಸಂ್ಟಘ್ಗದಲ್ಲಿ ಜಿಲ್ಲೆ ಮತ್ತು ತಾಲೂಕು ಮಟ್ಟದ ಪ್ರಸಕ್ತ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.
ವಿಧಾನಪರಿಷತ್ ಸದಸ್ಯ ಎನ್.ಅಮರನಾಥ ಪಾಟೀಲ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್.ಶಂಕ್ರಪ್ಪ ಮಾತನಾಡಿದರು. ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮೇಶ ಮದ್ಲಾಪುರ, ತಾಪಂ ಅಧ್ಯಕ್ಷ ಪಿ.ಚಂದ್ರಶೇಖರ ರೆಡ್ಡಿ, ಉಪಾಧ್ಯಕ್ಷೆ ಜಯಮ್ಮ, ನಗರಸಭೆ ಸದಸ್ಯ ಜಯಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಆರ್.ತಿಮ್ಮಯ್ಯ, ಜಿಪಂ. ಸಿಇಒ ಡಾ. ಮುದ್ದು ಮೋಹನ್, ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಸಂಘಗಳ ಅಧ್ಯಕ್ಷರಾದ ತಿಮ್ಮಪ್ಪ, ತಿಮಣ್ಣ, ಸೂಗಯ್ಯ, ಡಯೆಟ್ ಪ್ರಾಚಾರ್ಯ ಕೆಂಚೇಗೌಡ ಸೇರಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಅನೇಕ ಶಿಕ್ಷಕರು ಹಾಗೂ ಸಿಬ್ಬಂದಿಯಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

