ಉ-ಕ ಭಾಗದ ಶೈಕ್ಷಣಿಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ: ಆರ್‌ವಿ
ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಸೆ.6
ಹೈದ್ರಾಬಾದ್ ಕರ್ನಾಟಕದ ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು, ಈ ನಿಟ್ಟಿನಲ್ಲಿ ಶಿಕ್ಷಣದ ಕೊರತೆ ನೀಗಿಸಲು ಹಾಗೂ ಪ್ರೇಕ್ಷಣೀಯ ಸ್ಥಳಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಗಮನ ಹರಿಸುವುದಾಗಿ ಉನ್ನತ ಶಿಕ್ಷಣ ಹಾಗೂ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು.
ಪಟ್ಟಣದ ವಳಬಳ್ಳಾರಿ ಚನ್ನಬಸವೇಶ್ವರ ಕಾಲೇಜಿನಲ್ಲಿ ಯುಜಿಸಿ ಅನುದಾನದ ಮಹಿಳಾ ವಸತಿ ನಿಲಯ ಉದ್ಘಾಟಿಸಿ ಮಾತನಾಡಿದ ಅವರು, ಹಿಂದುಳಿದ ಹೈ-ಕ ಪ್ರದೇಶದ ಸಮಗ್ರ ಅಭಿವೃದ್ಧಿ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 371(ಜೆ) ಕಲಂ ಅನುಷ್ಠಾನಗೊಂಡರೆ ಶಿಕ್ಷಣ, ಉದ್ಯೋಗ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಸೌಲಭ್ಯ ದೊರಕಲಿದೆ ಎಂದರು.
ಮಹಿಳಾ ಕಾಲೇಜು ಸ್ಥಾಪನೆ ವಿಸ್ತರಣೆ: ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉನ್ನತ ಶಿಕ್ಷಣದ ಮಹತ್ವ ಅರಿತು ಗ್ರಾಮೀಣ ಮತ್ತು ನಗರ ಪ್ರದೇಶಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು, ವಿಶೇಷವಾಗಿ ಹೆಣ್ಣುಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸುಮಾರು 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಪ್ರಾರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸುವ ಚಿಂತನೆ ಹೊಂದಿದೆ. ಅದರಂತೆ ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ, ತುರ್ವಿಹಾಳ, ತಾವರಗೇರಾ ಸೇರಿದಂತೆ ವಿವಿಧೆಡೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಮಸ್ಯೆ ಪರಿಹಾರಕ್ಕೆ ಕ್ರಮ: ಹಿಂದುಳಿದ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದ ಕಾಲೇಜು ಆರಂಭಿಸುವುದು. ಸರ್ಕಾರಿ ಕಾಲೇಜುಗಳು ಶೈಕ್ಷಣಿಕ ಸ್ವಾಯತ್ತತೆಗೆ ಅರ್ಹವೆಂದು ಘೋಷಿಸಲು ಅನುದಾನ ಬಿಡುಗಡೆಗೊಳಿಸಿ ಮೂಲ ಸೌಕರ್ಯ ಕಲ್ಪಿಸುವುದು. ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ನೀಗಿಸುವುದು ಸೇರಿದಂತೆ ಇನ್ನು ಅನೇಕ ಕಾರ್ಯಕ್ರಮಗಳನ್ನು ಕ್ರಮೇಣ ರೂಪಿಸುವ ಕುರಿತು ಚಿಂತನೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ದೇಶದ ಆಸ್ತಿಯಾಗಿದ್ದು, ಉತ್ತಮ ಚಾರಿತ್ರ್ಯ ಹೊಂದಿ ಸ್ವಾಭಿಮಾನಿಗಳಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು.
ಲಿಂಗಸ್ಗೂರು ಶಾಸಕ ಮಾನಪ್ಪ ವಜ್ಜಲ್, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ, ಕಾಲೇಜು ಆಡಳಿತಾಧಿಕಾರಿ ಸಿ.ಶರಣಪ್ಪ, ಪ್ರಾಚಾರ್ಯ ವಿ.ಅಶೋಕ ಸೇರಿದಂತೆ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

