ಪತ್ರಿಕೆಗಳಲ್ಲಿ ಅಶ್ಲೀಲ ಚಿತ್ರಗಳ ಪ್ರಕಟಣೆ; ಖಂಡನೆ
ಮುದಗಲ್: ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗಲು ಪತ್ರಿಕೆಗಳಲ್ಲಿ ಪ್ರಕಟಗೊಳ್ಳುವ ಅಶ್ಲೀಲ ಚಿತ್ರಗಳು ಕಾರಣವಾಗಿದೆ ಎಂದು ರಾಜ್ಯ ರೈತಸಂಘದ ಹಸಿರುಸೇನೆ ರಾಜ್ಯಾಧ್ಯಕ್ಷ ಎಸ್.ರಂಗಸ್ವಾಮಿ ಖಂಡಿಸಿದರು.
ಸಮೀಪದ ಗುಡಿಹಾಳದಲ್ಲಿ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಏರ್ಪಡಿಸಿದ್ದ ಧಾರ್ಮಿಕ ಮತ್ತು ರೈತ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ದ್ವಾಪಾರಯುಗದಿಂದಲೂ ಹೆಣ್ಣಿಗೆ ಗೌರವ ನೀಡಿದ ಇತಿಹಾಸವಿದೆ. ಮಹಿಳೆಯರ ಬಗ್ಗೆ ಗೌರವ ಹೆಚ್ಚಿಸಿಕೊಳ್ಳಬೇಕು. ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎಂಬುದನ್ನು ತಿಳಿಯಬೇಕು. ಗ್ರಾಮೀಣ ಪ್ರದೇಶದಲ್ಲಿ ಹೆಣ್ಣುಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ ಶಿಕ್ಷಣವಂತರನ್ನಾಗಿ ಮಾಡಬೇಕು ಎಂದರು.
ಜನಪ್ರತಿನಿಧಿಗಳ ಕಾರ್ಯಗಳವೈಖರಿಗೆ ಲೇವಡಿ: ರಾಜ್ಯದಲ್ಲಿ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನೀಡಲು ಕಳೆದ 30 ವರ್ಷಗಳಿಂದ ಹೋರಾಟ ನಡೆಯುತ್ತಿದ್ದರೂ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರಿಗೆ ಬೆಂಬಲ ಬೆಲೆ ನೀಡಲು ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎನ್ನುವ ಮಂತ್ರಿಗಳಿಗೆ ವಿಧಾನಸೌಧದ ಗೋಡೆಗಳನ್ನು ಕೆಡವಿ ಮತ್ತೆ ಕಟ್ಟಲು ಹಣ ಎಲ್ಲಿಂದ ಬರುತ್ತದೆ ಎಂದು ಚುನಾಯಿತ ಶಾಸಕ, ಮಂತ್ರಿಗಳನ್ನು ಲೇವಡಿ ಮಾಡಿದರು.
ವಿಶೇಷ ಉಪನ್ಯಾಸಕರಾಗಿ ವಿವಿ ಸಂಘದ ಆಡಳಿತಾಧಿಕಾರಿ ಬಸವಂತರಾಯ ಕುರಿ ಮಾತನಾಡಿ, ನಮ್ಮ ದೇಶದಲ್ಲಿ ಕಾಯ್ದೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸುವಲ್ಲಿ 6 ದಶಕ ಕಳೆಯಬೇಕಾಯಿತು. ಸಾವಿರಾರು ಕಾಯ್ದೆಗಳನ್ನು ಜಾರಿಗೆ ತಂದಿದ್ದರೂ ಜನರಿಗೆ ಅವುಗಳ ತಿಳಿವಳಿಕೆ ಇಲ್ಲ. ವೈಜ್ಞಾನಿಕ ಯುಗದಲ್ಲಿ ಜನರಿಗೆ ಅಶಾಂತಿ ಹೆಚ್ಚಾಗಿದೆ. ಅದರಲ್ಲಿ ಮಧ್ಯಮ ವರ್ಗದ ಜನರಂತೂ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಹಿಸಿದ್ದರು. ಕಾರ್ಯಕ್ರಮವನ್ನು ಸಂತೆಕೆಲ್ಲೂರು ಗುರುಬಸವ ಸ್ವಾಮೀಜಿ ಉದ್ಘಾಟಿಸಿದರು. ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಮಲ್ಲಣ್ಣ ನಾಗರಹಾಳ, ಬಸವರಾಜ ಸ್ವಾಮೀಜಿ ಗುಡಿಹಾಳ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

