ರಾಯಚೂರು

ವಿಶೇಷ ಸ್ಥಾನಮಾನದಿಂದ ಹೈ.ಕ. ಸಮಗ್ರ ಅಭಿವೃದ್ಧಿ

Published On :

ಕನ್ನಡಪ್ರಭ ವಾರ್ತೆ ,  ರಾಯಚೂರು ,  ಸೆ.17
ರಾಜ್ಯದ ಹೈದ್ರಾಬಾದ್ ಕರ್ನಾಟಕ ಭಾಗದ ಹಿಂದುಳಿಯುವಿಕೆಗೆ ಐತಿಹಾಸಿಕ ಕಾರಣಗಳಿವೆ ಎಂದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಸಂವಿಧಾನದ 371(ಜೆ) ಕಲಂ ಅಡಿ ವಿಶೇಷ ಸ್ಥಾನಮಾನ ನೀಡಿಕೆ ಮೂಲಕ ಸರ್ಕಾರ ಈ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ ಎಂದು ಹೇಳಿದರು.
ನಗರದಲ್ಲಿ ಮಂಗಳವಾರ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಂದರ್ಭ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಕೇಂದ್ರದ ಯುಪಿಎ ಸರ್ಕಾರ ಹೈ.ಕ. ಭಾಗದಲ್ಲಿ ಕಳೆದ ಅನೇಕ ವರ್ಷಗಳಿಂದ ವಿಶೇಷ ಸ್ಥಾನಮಾನಕ್ಕಾಗಿ ನಡೆದಿದ್ದ ಹೋರಾಟದ ಹಿನ್ನೆಲೆ ವಿಶೇಷ ಸ್ಥಾನಮಾನ ನೀಡಲು ಸಮ್ಮತಿಸಿದೆ.
ಕೇಂದ್ರಕ್ಕೆ ಉಪಸಮಿತಿ ವರದಿ: ಅದರಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಸಹ ಈಗಾಗಲೇ ಹೈ.ಕ. ಭಾಗದವರ ಬೇಕು- ಬೇಡಗಳನ್ನು ಅರ್ಥೈಸಿಕೊಂಡು ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪೂರಕ ಕಾನೂನುಗಳ ರಚನೆಗೆ ಸಂಪುಟ ಉಪಸಮಿತಿಯ ಶಿಫಾರಸು ಅಂಗೀಕರಿಸಿ ಕೇಂದ್ರಕ್ಕೆ ಕಳಿಸಿಕೊಟ್ಟಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ರಾಜ್ಯದ ಮನವಿಗೆ ಒಪ್ಪಿಗೆ ಸೂಚಿಸಿ ರಾಷ್ಟ್ರಪತಿಗಳ ಬಳಿ ಕಳಿಸಲಿದ್ದು, ವಿಶೇಷ ಸ್ಥಾನಮಾನದ ಕಾನೂನುಗಳ ಸಮರ್ಪಕ ಅನುಷ್ಠಾನಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಈ ಭಾಗದ ನಿರುದ್ಯೋಗಿಗಳು ಉದ್ಯೋಗದಲ್ಲಿ ಮೀಸಲಾತಿ ಪಡೆಯಲಿದ್ದಾರೆಂದು ಹೇಳಿದರು.
ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಬದ್ಧ: ಅದೇ ರೀತಿ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಪ್ರಗತಿಗೆ ಪೂರಕವಾದ ಪರಿಸರ ನಿರ್ಮಾಣವಾಗಲಿದ್ದು, ಸರ್ಕಾರ ಹೈ.ಕ. ಭಾಗದ ಸರ್ವಾಂಗೀಣ ಪ್ರಗತಿಗೆ ಬದ್ಧವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವು, ಪಾರದರ್ಶಕ ಹಾಗೂ ಉತ್ತಮ ಆಡಳಿತ ನೀಡುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾದ ಹಾನಿಯ ಪರಿಹಾರ ಕಾರ್ಯ ಕೈಗೊಳ್ಳಲು ಈಗಾಗಲೇ ಆದೇಶ ನೀಡಲಾಗಿದೆ. ಸರ್ಕಾರ ಪರಿಹಾರ ಕಾರ್ಯಗಳಿಗೆ ಅಗತ್ಯ ಅನುದಾನ ಒದಗಿಸಿದೆ. ಸದ್ಯ ಬೆಳೆ ಮತ್ತು ಆಸ್ತಿಪಾಸ್ತಿಗೆ ಆಗಿರುವ ಹಾನಿಯ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.
ನೂತನ ಕಟ್ಟಡಕ್ಕೆ ಜಿಲ್ಲಾ ಆಸ್ಪತ್ರೆ: ನಗರದ ಜಿಲ್ಲಾ ಆಸ್ಪತ್ರೆಯನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಶೀಘ್ರದಲ್ಲಿಯೇ ಸುಸಜ್ಜಿತ ಆಸ್ಪತ್ರೆ ಜನರ ಸೇವೆಗೆ ಲಭ್ಯವಾಗಲಿದೆ. ಅನ್ನಭಾಗ್ಯ ಮತ್ತು ಕ್ಷೀರಭಾಗ್ಯ ಯೋಜನೆಗಳ ಮೂಲಕ ರಾಜ್ಯ ಸರ್ಕಾರ ಜನಪರ ಎಂಬುದನ್ನು ಸಾಬೀತು ಮಾಡಿದೆ ಎಂದು ತಿಳಿಸಿದರು.
ವಿಮೋಚನೆ ಹೋರಾಟ ಜಿಲ್ಲೆಯಿಂದಲೇ ಪ್ರಾರಂಭ: ಹೈ.ಕ. ವಿಮೋಚನೆಯ ಹೋರಾಟ ರಾಯಚೂರಿನಿಂದಲೇ ಆರಂಭಗೊಂಡಿತ್ತೆಂದು ಸ್ಮರಿಸಿದ ಸಚಿವ ಪಾಟೀಲ್, ದಿ. ಎಂ.ನಾಗಪ್ಪ, ಕಾಶೀರಾವ್ ಪಾಟೀಲ್, ಜನಾರ್ಧನರಾವ್ ದೇಸಾಯಿ ಸೇರಿ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಶ್ರಮದ ಫಲವಾಗಿ ಹೈ.ಕ. ವಿಮೋಚನೆ ಸಾಧ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ಜಿಲ್ಲಾ ಪೊಲೀಸ್, ಶಾಲಾ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ಸ್, ಸೇವಾದಳಗಳಿಂದ ಗೌರವವಂದನೆ ನೀಡಲಾಯಿತು. ಅದೇ ರೀತಿ ಸ್ವಾತಂತ್ರ್ಯ ಹೋರಾಟಗಾರರನ್ನು ಜಿಲ್ಲಾಡಳಿತದಿಂದ ಸನ್ಮಾನಿಸಲಾಯಿತು. ನಂತರ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು.
ಸಮಾರಂಭದಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಪ್ರತಾಪಗೌಡ ಪಾಟೀಲ್, ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು, ಎಸ್ಪಿ ನಾಗರಾಜ್, ಎಡಿಸಿ ತಿಮ್ಮಪ್ಪ, ಸಹಾಯಕ ಆಯುಕ್ತೆ ಮಂಜುಶ್ರೀ, ತಹಸೀಲ್ದಾರ್ ಶಾಹನೂರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತ ಕುಮಾರ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.