ರಾಯಚೂರು

ಶೀಘ್ರ ಬೆಳೆ ಪರಿಹಾರ ವಿತರಿಸದಿದ್ರೆ ಹೋರಾಟ

Published On :

ಕನ್ನಡಪ್ರಭ ವಾರ್ತೆ, ರಾಯಚೂರು, ಸೆ.20
ಜಿಲ್ಲೆ ಸೇರಿ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ ತಿಂಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಲಕ್ಷಾಂತರ ರು. ಮೊತ್ತದ ಬೆಳೆ ಹಾನಿ ಸಂಭವಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಪರಿಹಾರ ವಿತರಣೆ ನಿಟ್ಟಿನಲ್ಲಿ ಬೆಳೆ ಹಾನಿ ಸಮೀಕ್ಷೆಗೆ ಮುಂದಾಗಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಒತ್ತಾಯಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದೆರಡು ವರ್ಷ ಬರದಿಂದ ತತ್ತರಿಸಿದ್ದ ಜಿಲ್ಲೆಯ ರೈತರು ಪ್ರಸಕ್ತ ವರ್ಷ ಸಮರ್ಪಕ ಮುಂಗಾರು ಮಳೆಯಿಂದಾಗಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಆದರೆ ಸೆಪ್ಟೆಂಬರ್‌ನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಬೆಳೆ ಸಂಪೂರ್ಣ ನಾಶವಾಗಿದೆ ಎಂದು ಹೇಳಿದರು.
ಎಕರೆಗೆ 20-25 ಸಾವಿರ ವೆಚ್ಚ: ರೈತರು ಬೆಳೆದ ಹತ್ತಿ, ಸೂರ್ಯಕಾಂತಿ, ಸಜ್ಜೆ, ತೊಗರಿ ಸೇರಿದಂತೆ ಅನೇಕ ಬೆಳೆಗಳು ಹಾಳಾಗಿವೆ. ಈಗಾಗಲೇ ರೈತರು ಹತ್ತಿ ಬೆಳೆಗೆ ಪ್ರತಿ ಎಕರೆಗೆ 20ರಿಂದ 25 ಸಾವಿರ ವೆಚ್ಚ ಮಾಡಿದ್ದಾರೆ. ಸೂರ್ಯಕಾಂತಿ, ಸಜ್ಜೆ, ತೊಗರಿ ಬೇಳೆಗೆ 10ರಿಂದ 20 ಸಾವಿರ ವೆಚ್ಚ ಮಾಡಿದ್ದಾರೆ. ಆದರೆ ಸದ್ಯವೇ ಮಳೆ ಸುರಿಯತೊಡಗಿದ್ದರಿಂದ ಬೆಳೆ ಹಾನಿಗೀಡಾಗಿದೆ ಎಂದು ತಿಳಿಸಿದರು.
ಜಿಲ್ಲಾಡಳಿತವು ಬೆಳೆ ಹಾನಿ ಸಮೀಕ್ಷೆಗೆ ಮುಂದಾಗುತ್ತಿಲ್ಲ. ಸಹಾಯಕ ಆಯುಕ್ತರಿಗೆ ಕೃಷಿ ಕಾರ್ಯಗಳ ಬಗ್ಗೆ ಅರಿವಿಲ್ಲ. ಹೀಗಾಗಿ ಅವರು ಬೆಳೆ ಹಾನಿಯಾಗಿಲ್ಲ ಎಂಬ ವ್ಯತಿರಿಕ್ತ ಹೇಳಿಕೆ ನೀಡುತ್ತಿದ್ದಾರೆ. ಮಳೆಯಿಂದಾಗಿ ಹೊಲಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನಿಂತಿದ್ದರಿಂದ ಬೆಳೆಯು ಹಾನಿಗೀಡಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತು ಹಾನಿಯ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.
28ರಂದು ಪ್ರತಿಭಟನೆ- ಎಚ್ಚರಿಕೆ: ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳಲು ಜಿಲ್ಲಾಡಳಿತ ನಿರ್ಲಕ್ಷ್ಯ ತೋರಿದಲ್ಲಿ ಸೆ.28ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ರಾಜ್ಯ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಬೆಳೆ ಹಾನಿ ಅನುಭವಿಸಿದ ರೈತರಿಗೆ 20- 200ರವರೆಗೆ ಪರಿಹಾರ ನೀಡಿದ ಸರ್ಕಾರದ ಕ್ರಮ ಅವೈಜ್ಞಾನಿಕ ಹಾಗೂ ಅವಿವೇಕತನದ್ದಾಗಿದೆ ಎಂದು ಟೀಕಿಸಿದರು.
ರೈತರಿಗೆ ಹೀಗೆ ಅವಮಾನಿಸುವ ರೀತಿಯಲ್ಲಿ ಕಡಿಮೆ ಮೊತ್ತದ ಪರಿಹಾರದ ಚೆಕ್‌ಗಳನ್ನು ವಿತರಿಸಿರುವುದು ಸರ್ಕಾರಕ್ಕೆ ರೈತರೆಡೆಗಿರುವ ಕಾಳಜಿಯನ್ನು ಪ್ರದರ್ಶಿಸಿದೆ. ಬೆಳೆ ಹಾನಿಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಬೇಕು. ಸೂಕ್ತ ಪರಿಹಾರ ನೀಡಿಕೆಗೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ನ.24ರಂದು ಬೆಂಗಳೂರಲ್ಲಿ ರ್ಯಾಲಿ: ರಾಜ್ಯ ರೈತ ಸಂಘವು ಬೆಂಗಳೂರಿನಲ್ಲಿ ನ.4ರಂದು ರೈತರ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಿದ್ದು, ಬೆಳೆ ಹಾನಿ ಸಮೀಕ್ಷೆ ಸೇರಿದಂತೆ ವಿವಿಧ 24 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುತ್ತದೆ ಎಂದ ಅವರು, ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿ ಹಾಗೂ ರಾಯಚೂರು ಮತ್ತು ಮಾನವಿ ತಾಲೂಕು ಸಮಿತಿಯನ್ನು ಈಚೆಗೆ ಸಭೆ ನಡೆಸಿ ಪುನಾರಚಿಸಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.