ರಾಯಚೂರು

ರಾಹುಲ್ ಪ್ರಚಾರ 7ಕ್ಕೆ

Published On :

ರಾಯಚೂರು: ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಏ.7ರಂದು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಪರ ಚುನಾವಣೆ ಪ್ರಚಾರ ಸಭೆ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ್, ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಡುತ್ತಿರುವ ವೈಯಕ್ತಿಕ ತೇಜೋವಧೆ ಆರೋಪಗಳ ಹಿನ್ನೆಲೆ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಅವರು ಪಕ್ಷದಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಸಕ್ತ ಚುನಾವಣೆಯಲ್ಲಿ ಕ್ಷೇತ್ರದಲ್ಲಿನ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಪರ ತೋರುತ್ತಿರುವ ಒಲವಿನಿಂದ ಬಿಜೆಪಿ ಅಭ್ಯರ್ಥಿ ಹತಾಶರಾಗಿದ್ದಾರೆ. ಮತದಾರರ ಒಲವು ಸಹಿಸದೆ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಸೋಲಿನ ಭೀತಿಯಿಂದ ಜನರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಅಪ್ರಭುದ್ಧ ಹೇಳಿಕೆ ನೀಡುತ್ತಿದ್ದಾರೆಂದು ಟೀಕಿಸಿದರು.
ಕೆಲ ದಿನಗಳ ಹಿಂದೆ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಚುನಾವಣೆ ಆಯೋಗಕ್ಕೆ ಮೌಖಿಕವಾಗಿ ದೂರು ನೀಡಿತ್ತು. ಆದರೂ ಸಹ ವೈಯಕ್ತಿಕ ವಿಚಾರ ಪ್ರಸ್ತಾಪಿಸಿ ತೇಜೋವಧೆ ಮಾಡುವ ವರ್ತನೆ ಅವರು ಮುಂದುವರಿಸಿದ್ದು, ಈ ಹಿನ್ನೆಲೆಯಲ್ಲಿ ಆಯೋಗಕ್ಕೆ ಲಿಖಿತ ರೂಪದಲ್ಲಿ ದೂರು ಸಲ್ಲಿಸಲಾಗುವುದು. ವೈಯಕ್ತಿಕ ತೇಜೋವಧೆ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ. ನಾಯಕ ಮಾನನಷ್ಟ ಮೊಕದಮೆ ಹೂಡಲಿದ್ದಾರೆ ಎಂದು ತಿಳಿಸಿದರು.
ದಾಖಲೆ ಬಹಿರಂಗ: ಸೋಲಿನ ಭೀತಿಯಿಂದ ಕಂಗಾಲಾಗಿರುವ ಕೆ. ಶಿವನಗೌಡ ನಾಯಕ ವೈಯಕ್ತಿಕ ನಿಂದನೆಯ ತಂತ್ರ ಅನುಸರಿಸುತ್ತಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಯಾವುದೇ ಪಕ್ಷದ ಅಭ್ಯರ್ಥಿಗಳೂ ಮುಂದಾಗುವುದು ಸರಿಯಲ್ಲ. ಚುನಾವಣೆ ಸ್ಪರ್ಧೆಯಲ್ಲಿ ವ್ಯಕ್ತಿಗತ ಆರೋಪ ಮಾಡುವ ಮುನ್ನ ಆಲೋಚಿಸುವುದು ಒಳ್ಳೆಯದು.  ಬಿಜೆಪಿ ಮಾಡುತ್ತಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದರು.
ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಮಾಡುತ್ತಿರುವ ಆರೋಪಕ್ಕೆ ಪ್ರತಿಯಾಗಿ ದಾಖಲೆ ಬಹಿರಂಗಪಡಿಸಬೇಕು ಎಂದು ಅವರು ಸವಾಲು ಹಾಕಿದರು.
ಏ.7ಕ್ಕೆ ರಾಹುಲ್ ಪ್ರಚಾರ: ಪ್ರಸಕ್ತ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ವಿ. ನಾಯಕ ಅವರ ಪರ ಪ್ರಚಾರ ಮಾಡಲು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಏ.7ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 1ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಚಾರ ಸಭೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಪಕ್ಷದ ಹಿರಿಯ ಮುಖಂಡರಾದ ಪಾರಸಮಲ್ ಸುಖಾಣಿ, ಎ. ಪಾಪಾರೆಡ್ಡಿ, ಜಿ.ಬಸವರಾಜ ರೆಡ್ಡಿ, ಕೆ. ಶಾಂತಪ್ಪ, ಜಿ. ಶಿವಮೂರ್ತಿ, ತಾಯಣ್ಣ ನಾಯಕ, ಅಮರೇಗೌಡ ಹಂಚಿನಾಳ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.