ಬಹಿಷ್ಕಾರ: ಫಲಿಸಿದ ಮನವೊಲಿಕೆ
ಕ.ಪ್ರ. ವಾರ್ತೆ ್ಣ ಲಿಂಗಸ್ಗೂರು ್ಣ ಏ.17
ತಾಲೂಕಿನಾದ್ಯಂತ ಕೆಲ ಗ್ರಾಮಗಳಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರು ನಿರ್ಧರಿಸಿದ್ದರೂ, ಅಧಿಕಾರಿಗಳು ಮನವೊಲಿಸಿದ್ದು ಮತದಾನ ಶಾಂತಿಯುತವಾಗಿ ನಡೆಯಿತು.
ಪಟ್ಟಣ ಸೇರಿದಂತೆ ತಾಲೂಕಿನ ಮುದಗಲ್, ಹಟ್ಟಿ, ಗುರುಗುಂಟಾ, ಆನೆಹೊಸೂರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಬೆ.7ರಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡಲು ಸಮಯ ನಿಗದಿ ಪಡಿಸಲಾಗಿತ್ತು. ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಜನತೆ ಬೆಳಗ್ಗೆ 8ರಿಂದ ಮಧ್ಯಾಹ್ನದವರೆಗೆ ಮತದಾನ ಸ್ವಲ್ಪ ಮಟ್ಟಿಗೆ ಚುರುಕಾಗಿ ಕಂಡು ಬಂದಿತು. ಬೇಸಿಗೆ ಬಿಸಿಲು ಹೆಚ್ಚುತ್ತಿದ್ದಂತೆ ಮತದಾನದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂದಿತು. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಲವೆಡೆ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮನವೊಲಿಸುವಲ್ಲಿ ಯಶಸ್ವಿ: ತಾಲೂಕಿನ ಅಂಕನಾಳ, ಪಲಗಲದಿನ್ನಿ, ಹಲ್ಕಾವಟಗಿ, ಹಿರೇಯರದಿಹಾಳ, ಚಿಕ್ಕಯರದಿಹಾಳ, ಆನ್ವರಿ ಗ್ರಾಮಗಳ ಜನತೆ ರಸ್ತೆ, ಕುಡಿವ ನೀರು, ಸಾರಿಗೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಮತದಾನ ಬಹಿಷ್ಕರಿಸಲು ನಿರ್ಧರಿಸಿ ಕಳೆದ ಒಂದು ವಾರದ ಹಿಂದೆ ಅಧಿಕಾರಿಗಳಿಗೆ ಎಚ್ಚರಿಕೆ ಮನವಿ ಸಲ್ಲಿಸಿದ್ದರು.
ಈ ವೇಳೆ ಸಹಾಯಕ ಚುನಾವಣಾಧಿಕಾರಿಗಳ ನೇತೃತ್ವದ ತಂಡ ಆಯಾ ಗ್ರಾಮಗಳಿಗೆ ಭೇಟಿ ನೀಡಿ ಮತದಾನ ಮಾಡುವಂತೆ ಜನರ ಮನಮೊಲಿಸುವಲ್ಲಿ ಯಶಸ್ವಿಯಾಗಿದ್ದರು. ಅದರಂತೆ ಏ.17 ರಂದು ಸದರಿ ಗ್ರಾಮಗಳಲ್ಲಿ ಮತದಾನ ಶಾಂತಿಯುತವಾಗಿ ಜರುಗಿರುವುದಾಗಿ ತಿಳಿದು ಬಂದಿದೆ.
ಬಹಿಷ್ಕಾರಕ್ಕೆ ನಿರ್ಧರಿಸಿದ್ರು: ಫೂಲಭಾವಿ ಗ್ರಾಮದಲ್ಲಿ ಬಗರ್ಹುಕುಂ ಸಾಗುವಳಿ ಜಮೀನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತಮ್ಮ ಕಬ್ಜಾಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಗ್ರಾಮದಲ್ಲಿ ರಸ್ತೆ, ಕುಡಿಯುವ ನೀರು, ವಿದ್ಯುತ್, ಸಾರಿಗೆ ಸೇರಿದಂತೆ ಮೂಲ ಸೌಕರ್ಯ ಮರೀಚಿಕೆಯಾಗಿವೆ ಎಂದು ಆರೋಪಿಸಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದರು. ಬುಧವಾರ ಸಂಜೆ ತಹಶೀಲ್ದಾರರು ಗ್ರಾಮಕ್ಕೆ ಭೇಟಿ ನೀಡಿ ಮನಮೊಲಿಸಲು ಪ್ರಯತ್ನಿಸಿದರಾದರೂ ಗ್ರಾಮಸ್ಥರು ಮತದಾನ ಮಾಡಲು ನಿರಾಕರಿಸಿದ್ದರು. ಏ.17 ರಂದು ಗುರುವಾರ ಸಹಾಯಕ ಚುನಾವಣಾಧಿಕಾರಿ ಯೋಗೇಶ್, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಡಿವೈಎಸ್ಪಿ ಬಸವರಾಜ, ಸಿಪಿಐ ವರದರಾಜ್ ಸೇರಿದಂತೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಮತದಾನ ಮಾಡಲು ಮನವೊಲಿಸುವಲ್ಲಿ ಯಶಸ್ವಿಯಾದರು. ಇದರಿಂದ ಗ್ರಾಮದಲ್ಲಿ ಬೆ. 10.30 ಗಂಟೆಯಿಂದ ಮತದಾನ ಆರಂಭವಾಯಿತು.
ಗ್ರಾಮೀಣ ಪ್ರದೇಶಗಳಲ್ಲಿ ಮಧ್ಯಾಹ್ನದವರೆಗೆ ಚುರುಕು ಪಡೆದಿದ್ದ ಮತದಾನ ನಂತರ ನೀರಸ ಪ್ರತಿಕ್ರಿಯೆ ಕಂಡುಬಂದಿತು. ಮತಗಟ್ಟೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

