ವಿದ್ಯುತ್ ಪೋಲು ತಡೆಯಲು 'ಎನರ್ಜಿ ಆಡಿಟ್'
ಗುಲ್ಬರ್ಗ: ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ (ಕೆಡೆಲ್)ಯಲ್ಲಿನ ಪ್ರಾದೆಶಿಕ ಕಚೇರಿ 'ಎನರ್ಜಿ ಆಡಿಟ್' ಕಾರ್ಯ ಕೈಗೊಂಡಿದೆ.
ಹೈ-ಕ ಆರೂ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಈ ಕಚೇರಿ ಈಗಾಗಲೇ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಉಪಯೋಗತೆ ಪರೀಕ್ಷಣಾ ಕಾರ್ಯ (ಎನರ್ಜಿ ಆಡಿಟ್) ಪ್ರಾರಂಭಿಸಿದೆ. ವಿದ್ಯುತ್ ಪೋಲಾಗುವುದನ್ನು ತಡೆಗಟ್ಟುವುದಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಲಿದೆ.
ಕಚೇರಿಗೆ ಎಷ್ಟು ಪ್ರಮಾಣದಲ್ಲಿ ವಿದ್ಯುತ್ ಸರಬರಾಜಾಗುತ್ತದೆ. ಅದರಲ್ಲಿ ಎಷ್ಟು ಪ್ರಮಾಣದಲ್ಲಿ ಪೋಲಾಗುತ್ತಿದೆ ಎಂಬುದರ ಕುರಿತು ಪರಿವೀಕ್ಷಣೆ ಮಾಡಿ ವರದಿ ಸಿದ್ಧಪಡಿಸಲಾಗುತ್ತಿದೆ. ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳನ್ನು ಅಭಿವೃದ್ಧಿಗೊಳಿಸಲು ಕೇಂದ್ರ- ರಾಜ್ಯ ಸರ್ಕಾರ ನೋಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿರುವ 'ಕ್ರೆಡಿಲ್' ಸಂಸ್ಥೆ ಇದೀಗ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಪೋಲಾಗುವುದನ್ನು ತಡೆಗಟ್ಟುವುದಕ್ಕಾಗಿ ಈ ಮಹತ್ವದ ಕಾರ್ಯಕ್ಕೆ ಮುಂದಾಗಿದೆ.
ಈಗಾಗಲೇ ಇಲ್ಲಿನ ಮಿನಿ ವಿಧಾನಸೌಧ, ಪೊಲೀಸ್ ಭವನ, ಪ್ರತಿಷ್ಠಿತ ಐವಾನ್ಶಾಹಿ ಅತಿಥಿಗೃಹ ಅಲ್ಲದೇ ಕೊಪ್ಪಳದ ಜಿಲ್ಲಾಧಿಕಾರಿಗಳ ಕಚೇರಿಯ ಎನರ್ಜಿ ಆಡಿಟ್ ಕೆಲಸ ಪೂರ್ಣಗೊಂಡಿದೆ ಎಂದು ಕ್ರೆಡಿಲ್ ಸಂಸ್ಥೆಯ ಇಲ್ಲಿನ ಪ್ರಾದೇಶಿಕ ಕಚೇರಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ರಮೇಶ ನಗರ ತಿಳಿಸಿದ್ದಾರೆ.
ಸಕ್ರಿ ನೇತೃತ್ವ: ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಇಲ್ಲಿನ ಪೂಜ್ಯ ದೊಡ್ಡಪ್ಪ ಅಪ್ಪ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥ ಸಂಗಮೇಶ ಜಿ. ಸಕ್ರಿ ನೇತೃತ್ವದಲ್ಲಿ ಈ ನಾಲ್ಕು ಕಚೇರಿಗಳ 'ಎನರ್ಜಿ ಆಡಿಟ್' ಕೆಲಸ ನಡೆಸಲಾಗಿದೆ. ಇದಲ್ಲದೇ ನಗರದಲ್ಲಿ ಹೈಕೋರ್ಟ್ ಪೀಠ ಮತ್ತು ಸ್ಥಳೀಯ ಮಹಾನಗರ ಪಾಲಿಕೆಯಲ್ಲೂ ಆಡಿಟ್ ಕೈಗೊಳ್ಳಲಾಗುತ್ತಿದ್ದು, ಬೆಂಗಳೂರಿನ ಸಂಸ್ಥೆಯೊಂದು ಈ ಕಾರ್ಯ ಕೈಗೆತ್ತಿಕೊಳ್ಳಲಿದೆ.
ಹೈ-ಕ ಪ್ರದೇಶದ ಆರೂ ಜಿಲ್ಲೆಗಳಾದ ಗುಲ್ಬರ್ಗ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿರುವ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಮುಂದಿನ ಹಂತದಲ್ಲಿ ಎನರ್ಜಿ ಆಡಿಟ್ ಕಾರ್ಯ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಈ ತಪಾಸಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಕರೆದಿದ್ದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ದೆಹಲಿ ಮೂಲದ ಕಂಪನಿ ಈ ತಪಾಸಣಾ ಕಾರ್ಯ ಕೈಗೆತ್ತಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

