ಪ್ರಭಾರಿ ಅಧಿಕಾರಿಗಳ ಕಾರ್ಯ ವಿಳಂಬ: ಕರವೇ ಪ್ರತಿಭಟನೆ
ಕ.ಪ್ರ. ವಾರ್ತೆ ರಾಯಚೂರು ಏ.24
ನಗರದ ವಿವಿಧ ಸರ್ಕಾರಿ ಕಚೇರಿಗಳ ಹುದ್ದೆಗಳಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಅವರ ಮೂಲಹುದ್ದೆಗೆ ಮರಳಿ ಕಳಿಸಬೇಕು. ಕಾಯಂ ಅಧಿಕಾರಿಗಳನ್ನು ನೇಮಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಖಾಲಿ ಕುರ್ಚಿಗಳನ್ನು ಹಿಡಿದು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಜಿಲ್ಲಾಧಿಕಾರಿಗಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿ, ನಗರದ ವಿವಿಧ ಇಲಾಖೆಗಳ ಪ್ರಮುಖರ ಹುದ್ದೆಗಳಲ್ಲಿ ಪ್ರಭಾರಿ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು, ಅದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.
ತೊಂದರೆ: ನಗರದಲ್ಲಿರುವ ಅಬಕಾರಿ, ಜಿಪಂ, ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ಬಹುತೇಕ ಇಲಾಖೆಗಳ ಹಿರಿಯ ಅಧಿಕಾರಿಗಳ ಹುದ್ದೆಗಳಲ್ಲಿ ಪ್ರಭಾರಿ ಅಧಿಕಾರಿಗಳೇ ಕಾರ್ಯನಿರ್ವಹಿಸುತ್ತಿದ್ದಾರೆ. ಅದರಿಂದಾಗಿ ಇಲಾಖೆಗಳಿಗೆ ವಿವಿಧ ಕೆಲಸ ಕಾರ್ಯ, ಮಾಹಿತಿ ಪಡೆಯಲು ತೆರಳುವವರು ತೊಂದರೆಗೆ ಸಿಲುಕುತ್ತಿದ್ದಾರೆಂದು ದೂರಿದರು.
ಸಾರ್ವಜನಿಕರು ಇಂಥ ಇಲಾಖೆಗಳಿಗೆ ಮಾಹಿತಿ ಮತ್ತು ಕೆಲಸ ಕಾರ್ಯಗಳಿಗೆ ತೆರಳಿದಾಗಲೆಲ್ಲ ತಾವು ಪ್ರಭಾರಿ ಅಧಿಕಾರಿ ಯಾಗಿದ್ದು, ಕಾಯಂ ಅಧಿಕಾರಿಗಳ ನೇಮಕವಾಗುವವರೆಗೆ ಕಾಯುವಂತೆ ಹೇಳಲಾಗುತ್ತಿದೆ. ಈ ರೀತಿಯ ಹಾರಿಕೆಯ ಉತ್ತರಿಂದ ಸಾರ್ವಜನಿಕರ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ ಎಂದು ಆರೋಪಿಸಿದರು.
ಆಗ್ರಹ: ಜಿಲ್ಲಾಧಿಕಾರಿಗಳು ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿರುವವರ ಕಾರ್ಯವೈಖರಿಯ ಬಗ್ಗೆ ಗಮನ ಹರಿಸುತ್ತಿಲ್ಲ. ಇದರಿಂದಾಗಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದ ವೈಫಲ್ಯಕ್ಕೆ ದಾರಿಯಾಗುತ್ತಿದೆ. ಕಾರಣ ಪ್ರಭಾರಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಕೂಡಲೇ ಅವರ ಮೂಲ ಹುದ್ದೆಗೆ ಮರಳಿ ಕಳಿಸಬೇಕು ಎಂದು ಆಗ್ರಹಿಸಿದರು.
ಹೈ.ಕ.ಭಾಗಕ್ಕೆ 371ನೇ ಕಲಂ ಅಡಿ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಸ್ಥಳೀಯರಿಗೆ ಇಂಥ ಖಾಲಿ ಹುದ್ದೆಗಳ ಭರ್ತಿ ಮೂಲಕ ಕಾಯಂ ಅಧಿಕಾರಿಗಳನ್ನು ನೇಮಿಸಲು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಭಾರಿ ಅಧಿಕಾರಿಗಳಿಂದ ಸಾರ್ವಜನಿಕರಿಗಾಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ವೀರೇಶ್ ಹೀರಾ, ವೀರೇಶ್ ರೆಡ್ಡಿ, ಶಾಮ್ ಮಹೇಂದ್ರಕರ್, ವೆಂಕಟೇಶ ರೆಡ್ಡಿ, ವಿರುಪನಗೌಡ, ಶಿವಶಂಕರ್ ಹಿರೇಮಠ, ರಾಜು ಭವಾನಿ, ಎಂ.ಈರಣ್ಣ, ಎಂಡಿ ಸಾದಿಕ್, ಲಕ್ಷ್ಮಣ ಗಡ್ಡಾಳೆ ಸೇರಿದಂತೆ ಅನೇಕ ಕಾರ್ಯಕರ್ತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

