ನೀರಿನ ಸಮಸ್ಯೆ ಪರಿಹಾರಕ್ಕೆ ಸಿಎಂ ಬಳಿ ದೂರು: ಡಿಸಿ
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯ ಕಡೆಯ ಭಾಗದ ಮಾನವಿ ಮತ್ತು ರಾಯಚೂರು ತಾಲೂಕಿನ ರೈತರ ನೀರಿನ ಸಮಸ್ಯೆ ಹೋಗಲಾಡಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರ ಬಳಿ ಸಮಗ್ರ ಮಾಹಿತಿಯೊಂದಿಗೆ ತೆರಳಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುವುದಾಗಿ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೇಳಿದರು.
ಅವರು ಏಳು ಮೈಲ್ ಕ್ರಾಸ್ ಬಳಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ತುಂಗಭದ್ರಾ ಎಡದಂಡೆ ಕಾಲುವೆಯ ವ್ಯಾಪ್ತಿಯಲ್ಲಿನ ಅಕ್ರಮ ನೀರಾವರಿ, ಕಾಲುವೆಯಿಂದ ನೇರವಾಗಿ ನೀರು ಪಡೆಯುತ್ತಿರುವುದು, ಹಳ್ಳಕ್ಕೆ ಅನಗತ್ಯ ನೀರು ಪೋಲು ಮಾಡುವುದು ಸೇರಿದಂತೆ ವಿವಿಧ ರೀತಿಯ ಸಮಸ್ಯೆಗಳ ಬಗ್ಗೆ ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್ರಿಂದ ಮಾಹಿತಿ ಕೇಳಿದ್ದು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಿಎಂ ಬಳಿ ತೆರಳಿ ದೂರು ಸಲ್ಲಿಸುವುದಾಗಿ ತಿಳಿಸಿದರು.
ಪ್ರತಿ ವರ್ಷ ರೈತರು ನೀರಿಗಾಗಿ ಹೋರಾಟ ಮಾಡುವಂಥ ಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ರೈತರು ಎದುರಿಸುತ್ತಿರುವ ನೀರಿನ ಸಮಸ್ಯೆ ಹೋಗಲಾಡಿಸುವ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಕಾಲುವೆಯಿಂದ ನೀರಿನ ಅಕ್ರಮ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿರ್ಧರಿಸಲಾಗುತ್ತದೆ ಎಂದು ಹೇಳಿದರು.
ರಾಯಚೂರು ನಗರ ಸೇರಿದಂತೆ ತುಂಗಭದ್ರಾ ನದಿ ನೀರನ್ನು ಕುಡಿಯುವುದಕ್ಕೆ ಬಳಸುವ ಎಲ್ಲ ಗ್ರಾಮಗಳಿಗೆ ಬೇಸಿಗೆಯಲ್ಲಿ ನೀರಿನ ಅಭಾವವಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲಿದೆ. ಗಣೇಕಲ್ ಜಲಾಶಯ ಭರ್ತಿಗೆ ಆದ್ಯತೆ ನೀಡಲಿದೆ ಎಂದು ಹೇಳಿದರು.
--
ಇಂದು ಸಿಎಂ ಸಭೆ: ತಿಪ್ಪರಾಜು
ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆಯಿಂದ ನೀರು ಪಡೆಯುವ ನಿಟ್ಟಿನಲ್ಲಿ ರೈತರು ನಡೆಸುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಣೆ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಶಾಸಕರ, ಸಚಿವರ ಸಭೆಯನ್ನು ಫೆ.6ರಂದು ಕರೆದಿದ್ದಾರೆಂದು ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ತಿಳಿಸಿದರು. ಅವರು ಏಳು ಮೈಲ್ ಕ್ರಾಸ್ನಲ್ಲಿ ಬುಧವಾರ ರಸ್ತೆ ತಡೆ ಚಳವಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎಡದಂಡೆ ಕಡೆಯ ಭಾಗದಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳಲು ಅಧಿಕಾರಿಗಳು ವಿಫಲವಾಗಿರುವುದು ಹಾಗೂ ಮೇಲ್ಭಾಗದಲ್ಲಿ ರೈತರು ಅಕ್ರಮವಾಗಿ ನೀರು ಕಬಳಿಸುತ್ತಿರುವುದರ ಬಗ್ಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಹುಡುಕುವ ಉದ್ದೇಶದಿಂದ ಸಭೆ ಕರೆದಿದ್ದು, ಸಮಸ್ಯೆಗಳನ್ನು ಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

