ಶಿಕ್ಷಣದಿಂದ ಸಮಸ್ಯೆಗೆ ಪರಿಹಾರ: ಡಿಸಿ
ಕ.ಪ್ರ. ವಾರ್ತೆ, ರಾಯಚೂರು, ಫೆ.5
ಸಾಮಾಜಿಕ ಸಮಸ್ಯೆಗಳಿಗೆ ಶಿಕ್ಷಣದಿಂದ ಮಾತ್ರ ಪರಿಹಾರ ಕಂಡುಕೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಮಕ್ಕಳಿಗೆ ಶಿಕ್ಷಣರು ಮೌಲ್ಯಾಧಾರಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಅವಶ್ಯಕತೆಯಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೇಳಿದರು.
ಅವರು ನಗರದಲ್ಲಿ ಬುಧವಾರ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜನಸಂಗ್ರಾಮ ಪರಿಷತ್, ಹೈ-ಕ ಖಾಸಗಿ ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಖರ ಹಾಗೂ ಆಡಳಿತ ಮಂಡಳಿಯ ಒಕ್ಕೂಟದಿಂದ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಮತ್ತು ಗುಣಾತ್ಮಕ ಶಿಕ್ಷಣ ನೀಡಿಕೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿಕೆ ಎಲ್ಲ ಶಿಕ್ಷಕರ ಗುರಿಯಾಗಬೇಕಿದೆ. ಶಿಕ್ಷಕರು ಮಕ್ಕಳ ಭವಿಷ್ಯದ ಬೆನ್ನೆಲುಬು ಎಂದ ಅವರು, ಸಮಾಜದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಮಕ್ಕಳ ಪ್ರಗತಿಗೆ ಪೂರಕ ಬೋಧನಾ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ: ಹೈದರಾಬಾದ್ ಕರ್ನಾಟಕದ ಹಿಂದುಳಿಯುವಿಕೆಗೆ ಶಿಕ್ಷಣದ ಕೊರತೆಯೂ ಕಾರಣವಾಗಿದೆ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಗುಣಮಟ್ಟದಲ್ಲಿ ಹೆಚ್ಚಳವಾಗಬೇಕಿದೆ. ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸುವುದು ಎಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಇಂದಿನ ದಿನಮಾನದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸುವ ಬಗೆಯ ಬಗ್ಗೆ ತಿಳಿಸಿಕೊಡುವ ಕಾರ್ಯ ಶಿಕ್ಷಕರು ಮಾಡಬೇಕಿದೆ. ಅದರಲ್ಲಿ ಪಾಲಕರೂ ಸಹ ಕೈಜೋಡಿಸಬೇಕು. ಮಕ್ಕಳಿಗೆ ಸರಿಯಾದ ರೀತಿಯ ಮಾರ್ಗದರ್ಶನದಿಂದ ಅವರ ಬದುಕು ಕಟ್ಟಿಕೊಡುವ ಕಾರ್ಯ ಪಾಲಕರು ಮಾಡುವಂತೆ ಕರೆ ನೀಡಿದರು.
ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಶೈಕ್ಷಣಿಕ ಪ್ರಗತಿಯ ಬಗ್ಗೆ ಗಮನಹರಿಸಬೇಕು. ವೈಯಕ್ತಿಕವಾಗಿ ವಿದ್ಯಾರ್ಥಿಯ ಸಮಸ್ಯೆಯನ್ನು ಅರ್ಥೈಸಿಕೊಂಡು ಪರಿಹರಿಸುವ ಮೂಲಕ ವಿದ್ಯಾರ್ಥಿಗೆ ನೆರವಾಗಬೇಕು. ಸರ್ಕಾರ ಶಿಕ್ಷಕರಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಒದಗಿಸುತ್ತಿದ್ದು, ಅದಕ್ಕೆ ಪೂರಕವಾಗಿ ಬೋಧನೆಯಲ್ಲಿ ಸುಧಾರಣೆ ತಂದುಕೊಂಡು ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸುವಂತೆ ಮನವಿ ಮಾಡಿದರು.
ಮೀಸಲಾತಿ ಲಭ್ಯ: ಮುಖ್ಯ ಅತಿಥಿ ಶಶಿಲ್ ನಮೋಶಿ ಮಾತನಾಡಿ, ಹೈ.ಕ. ಭಾಗಕ್ಕೆ 371ನೇ ಕಲಂ(ಜೆ) ಅಡಿ ವಿಶೇಷ ಸ್ಥಾನಮಾನ ಇತ್ತೀಚೆಗೆ ದೊರೆತಿದೆ. ಅದರಿಂದ ಮುಂದಿನ ದಿನಗಳಲ್ಲಿ ಈ ಭಾಗಕ್ಕೆ ಅನೇಕ ಸವಲತ್ತುಗಳು ದೊರೆಯಲಿವೆ. ಅದೇ ರೀತಿ ಉದ್ಯೋಗ, ಶಿಕ್ಷಣ ಮತ್ತಿತರೆ ರಂಗಗಳಲ್ಲಿ ಮೀಸಲಾತಿ ಲಭ್ಯವಾಗಲಿದೆ ಎಂದು ಹೇಳಿದರು.
ಶಿಕ್ಷಕರಿಗೆ ಬಡ್ತಿ, ಶಿಕ್ಷಕರ ಹುದ್ದೆ ನೇಮಕಾತಿ ವೇಳೆ ಹೈ.ಕ. ಭಾಗದವರಿಗೆ ಹೆಚ್ಚಿನ ಮೀಸಲಾತಿ ಸೌಲಭ್ಯ ದೊರೆಯಲಿದ್ದು, ಮೀಸಲಾತಿ ನೆರವು ಪಡೆಯುವಂತಾಗಲು ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ವಿಶೇಷ ಸ್ಥಾನಮಾನದ ಲಾಭ ದೊರಕಿಸುವಂತೆ ಮನವಿ ಮಾಡಿದರು.
ಸಮಾರಂಭದಲ್ಲಿ ಜನಸಂಗ್ರಾಮ ಪರಿಷತ್ನ ಮುಖಂಡ ಡಾ. ರಜಾಕ್ ಉಸ್ತಾದ್, ಸುರೇಂದ್ರಬಾಬು, ರಮೇಶ್, ಶೇಖ್ ಅಸರಾರ್ ಸೇರಿ ಅನೇಕರಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ಶಿಕ್ಷಕ ವರ್ಗದವರು ಕಾರ್ಯಾಗಾರದಲ್ಲಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

