ರಾಯಚೂರು

ವಿಪತ್ತು ನಿರ್ವಹಣೆಗೆ ಜನರ ಸಹಕಾರ ಅಗತ್ಯ

Published On :

ಕ.ಪ್ರ. ವಾರ್ತೆ , ರಾಯಚೂರು , ಫೆ.14
ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ಕಾರ್ಯದಲ್ಲಿ ಸಾರ್ವಜನಿಕರು ಆಡಳಿತದೊಂದಿಗೆ ಕೈಜೋಡಿಸುವ ನಿಟ್ಟಿನಲ್ಲಿ ಸಿದ್ಧರಾಗುವಂತೆ ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು.
ನಗರದಲ್ಲಿ ಶುಕ್ರವಾರ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಏರ್ಪಡಿಸಿದ್ದ ಎರಡು ದಿನಗಳ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ತುರ್ತು ಸಂದರ್ಭವನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಎಲ್ಲರೂ ಸಿದ್ಧರಾಗಿರುವಂತೆ ಸಲಹೆ ನೀಡಿದರು.
ತುರ್ತು ಸಂದರ್ಭದಲ್ಲಿ ಉಂಟಾಗುವ ಹಾನಿ ವೇಳೆ ಸಾರ್ವಜನಿಕರು ಮಾನವೀಯತೆ ಮೆರೆಯಬೇಕು. ಅವಘಡಗಳು ಸಂಭವಿಸಿದಾಗ ಮನೆ ಕಳೆದುಕೊಂಡವರಿಗೆ ಆಶ್ರಯ ನೀಡುವ ಕಾರ್ಯ ಮಾಡಬೇಕು. ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚುವ ಸಹೃದಯತೆ ಬೆಳೆಸಿಕೊಳ್ಳಲು ಕರೆ ನೀಡಿದರು.
ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ವಿಜಯಾನಂದ್ ಮಾತನಾಡಿ, ಈ ಹಿಂದೆ ವಿಪತ್ತು ನಿರ್ವಹಣೆಯ ಬಗ್ಗೆ ಮಾಹಿತಿಯ ಕೊರತೆಯಿತ್ತು. ಆದರೆ ಈಚಿನ ದಿನಗಳಲ್ಲಿ ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಘಟಕ ರಚಿಸಿದ್ದು, ಸಮಯೋಚಿತ ಕಾರ್ಯನಿರ್ವಹಣೆ ಮೂಲಕ ತುರ್ತು ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಬರ ಪರಿಸ್ಥಿತಿಯನ್ನು ಎದುರಿಸುವ ಬಗೆಯ ಕುರಿತು ಸದ್ಯದ ಕಾರ್ಯಾಗಾರದಲ್ಲಿ ತರಬೇತಿ ನೀಡಲಾಗುತ್ತಿದ್ದು, ಕಾರ್ಯಾಗಾರದ ಪ್ರಯೋಜನ ಪಡೆದು ಕಾರ್ಯ ನಿರ್ವಹಣಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಮನವಿ ಮಾಡಿದರು. ರೆಡ್‌ಕ್ರಾಸ್ ಸಂಸ್ಥೆಯ ರಾಜ್ಯ ಸಂಚಾಲಕ ವಿ. ಎನ್. ಚಿತ್ತಾರಿ ಮಾತನಾಡಿ, ಸಂಸ್ಥೆಯ ಉಗಮ, ಕಾರ್ಯಸೂಚಿ, ಹಾಗೂ ರೆಡ್‌ಕ್ರಾಸ್ ಚಿಹ್ನೆಗಳನ್ನು ಯಾವ ಸಂದರ್ಭದಲ್ಲಿ ಹಾಗೂ ಯಾರು ಉಪಯೋಗಿಸಬಹುದು, ದುರ್ಬಳಕೆ ಇತ್ಯಾದಿಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಡಾ. ರಾಜಶೇಖರ ಪಾಟೀಲ್, ವಿಜ್ಞಾನ ಪರಿವೀಕ್ಷಕ ಅಮರೇಶ ಸೇರಿ ಅನೇಕರಿದ್ದರು. ರೆಡ್‌ಕ್ರಾಸ್ ಸಂಸ್ಥಾಪಕ ಜೆ.ಎಚ್. ಡುನಾಟ್ ಹಾಗೂ ದಿ. ಸುಭಾಷರೆಡ್ಡಿ ಪಾಟೀಲ್ ಶಾವಂತಗೇರಾ ಅವರ ಭಾವಚಿತ್ರಗಳಿಗೆ ಹೂಮಾಲೆ ಅರ್ಪಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.