ಕುರುಬ ಸಮಾಜ ಎಸ್ಟಿಗೆ ಸೇರಿಸಿ
ಕ.ಪ್ರ. ವಾರ್ತೆ , ಸಿಂಧನೂರು , ಫೆ.19
ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿರುವ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ತಾಲೂಕು ಕುರುಬ ಸಮಾಜದ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ಅಮರಪ್ಪ ಮೈಲಾರ ಮತ್ತಿತರರು, ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವುದಕ್ಕಿಂತ ಪೂರ್ವದಲ್ಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಹೋರಾಟ ಮಾಡಿದ್ದರು, ನಾಯಕತ್ವವನ್ನು ವಹಿಸಿದ್ದರು. ಆದರೆ ಮುಖ್ಯಮಂತ್ರಿಗಳಾದ ಮೇಲೆ ಸಮಾಜವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.
ಮಾ.2ರಂದು ಸಭೆ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಲೋಕಸಭಾ ಸದಸ್ಯರಾಗಿದ್ದಾಗ ಉತ್ತರ ಪ್ರದೇಶ ಹಾಗೂ ತಮಿಳುನಾಡುಗಳಲ್ಲಿ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಅದರನ್ವಯ ಕರ್ನಾಟಕಕ್ಕೂ ಈ ಸೌಲಭ್ಯ ವಿಸ್ತರಿಸುವಂತೆ ಒತ್ತಾಯಿಸಿ ಅನೇಕ ಪೂರಕ ಮಾಹಿತಿಗಳ ಕಡತವನ್ನು ಕೇಂದ್ರ ಸಂಪುಟದ ಗಮನಕ್ಕೆ ತಂದಿದ್ದರು. ಅದು ಈಗಲೂ ಇತ್ಯರ್ಥವಾಗದೆ ಬಾಕಿ ಉಳಿದಿದೆ.
ಈ ಬಗ್ಗೆ ಕೂಲಂಕಷವಾಗಿ ಚರ್ಚಿಸಲು ಸಿದ್ಧರಾಮಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಮಾ. 2ರಂದು ತಿಂಥಿಣಿಯಲ್ಲಿ ಉತ್ತರ ಕರ್ನಾಟಕ ಭಾಗದ ಜನಪ್ರತಿನಿಧಿಗಳ, ಮುಖಂಡರ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿನ ನಿರ್ಣಯಗಳಿಗೆ ಅನುಗುಣವಾಗಿ ಮುಂದಿನ ಹೋರಾಟವನ್ನು ರೂಪಿಸಲಾಗುವುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದಶಕ ಕಳೆದರೂ ಬೇಡಿಕೆ ಈಡೇರಿಲ್ಲ: ಕುರುಬ ಸಮಾಜದ ನಂಜುಂಡಯ್ಯ ಗುರುವಿನ್ ಮಾತನಾಡಿ, 1993ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಗಂಗಾವತಿಯಲ್ಲಿ ತಿಂಗಳುಗಟ್ಟಲೆ ಹೋರಾಟ ನಡೆಸಲಾಗಿತ್ತು. ಆಗ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪ ಧರಣಿ ಸ್ಥಳಕ್ಕೆ ಆಗಮಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸೂಕ್ತವೆಂದು ಸಹಮತ ವ್ಯಕ್ತಪಡಿಸಿದ್ದರು. ಆದರೆ ದಶಕಗಳ ಕಾಲದಿಂದ ಹೋರಾಟ ಮಾಡುತ್ತಾ ಬಂದಿದ್ದರೂ ಬೇಡಿಕೆ ಈಡೇರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕನಕಗುರುಪೀಠದ ತಾಲೂಕಾಧ್ಯಕ್ಷ ಟಿ.ಹನುಮಂತಪ್ಪ ಮಾತನಾಡಿ, ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಿನ ಕುರುಬ ಸಂಘದಲ್ಲಿ ಸಭೆ ಕರೆಯಲಾಗಿತ್ತು. ಆಗ ಮೈಸೂರು, ಬೆಂಗಳೂರು ಭಾಗದವರು ಆಸಕ್ತಿ ತೋರಲಿಲ್ಲ. ಆದ್ದರಿಂದ ಉತ್ತರ ಕರ್ನಾಟಕ ಭಾಗದ ಸಮಾಜ ಬಾಂಧವರು ಒಗ್ಗಟ್ಟಾಗಿ ಹೋರಾಟ ಮಾಡಲು ನಿರ್ಧರಿಸಿದರು. ಅದರನ್ವಯ ಹೋರಾಟದ ಪರಿಣಾಮವಾಗಿ ಬೀದರ್ನಲ್ಲಿ ಈಗಾಗಲೇ ಅದರ ಸೌಲಭ್ಯ ಪಡೆಯುತ್ತಿದ್ದಾರೆ. ಗುಲ್ಬರ್ಗ, ಯಾದಗಿರಿಗಳಲ್ಲಿ ಹೋರಾಟ ತೀವ್ರಗೊಂಡಿದೆ. ಹೈ-ಕ ಭಾಗದ ಉಳಿದ ಪ್ರದೇಶಗಳಲ್ಲೂ ಹೋರಾಟ ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕುವ ಉದ್ದೇಶ ಹೊಂದಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕುರುಬ ಸಮಾಜದ ಮಾಜಿ ಅಧ್ಯಕ್ಷ ಭೀಮಣ್ಣ ಸಂಗಟಿ, ನಿರುಪಾದೆಪ್ಪ ವಗರನಾಳ ವಕೀಲರು, ಮುಖಂಡರಾದ ದೊಡ್ಡಬಸವರಾಜ, ಕೆ.ಭೀಮಣ್ಣ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

