ರಾಯಚೂರು

160 ಕೋಟಿಗೆ ಪ್ರಸ್ತಾವನೆ

Published On :

ಕ.ಪ್ರ. ವಾರ್ತೆ, ರಾಯಚೂರು, ಜ.1
ಜಿಲ್ಲೆಯ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ 180 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ತಿಳಿಸಿದರು.
ನಗರದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲಾಡಳಿತವು ಜಿಲ್ಲೆಯ ಎರಡು ನಗರಸಭೆಗಳು, ಮೂರು ಪುರಸಭೆಗಳು ಬಾಗೂ ಒಂದು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮರ್ಪಕ ಅನುದಾನಕ್ಕೆ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು.
6 ಸ್ಥಳೀಯ ಸಂಸ್ಥೆಗಳಿಂದ ಕ್ರಿಯಾಯೋಜನೆ: ಒಟ್ಟು 160 ಕೋಟಿ ಮೊತ್ತದ ಅನುದಾನ ಬಿಡುಗಡೆಗೆ ಕೋರಲಾಗಿದೆ. ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ನಿಟ್ಟಿನಲ್ಲಿ ಕೇಂದ್ರದಿಂದ ರಾಜ್ಯದ ಎಲ್ಲ ನಗರ ಮತ್ತು ಸ್ಥಳೀಯ ಸಂಸ್ಥೆಗಳಿಂದ ಕ್ರಿಯಾಯೋಜನೆ ಸಲ್ಲಿಕೆಗೆ ಸೂಚಿಸಲಾಗಿತ್ತು. ಈ ಪೈಕಿ ರಾಯಚೂರು ಜಿಲ್ಲೆಯಿಂದ ಆರು ಸ್ಥಳೀಯ ಸಂಸ್ಥೆಗಳಿಂದ ಕ್ರಿಯಾಯೋಜನೆ ಸಲ್ಲಿಸಲಾಗಿದೆ ಎಂದರು.
ಇನ್ನುಳಿದಂತೆ ಕನಕಪುರದಿಂದ ಮಾತ್ರ ಕ್ರಿಯಾ ಯೋಜನೆ ಕೇಂದ್ರಕ್ಕೆ ಸಲ್ಲಿಕೆಯಾಗಿದೆ. ಆದರೆ ಉಳಿದ ಜಿಲ್ಲೆಗಳಿಂದ ಯಾವುದೇ ಕ್ರಿಯಾಯೋಜನೆ ಹೋಗಿಲ್ಲ. ಹೀಗಾಗಿ ಕೇಂದ್ರ ಸರ್ಕಾರವು ಜಿಲ್ಲೆಯಿಂದ ಕಳಿಸಿರುವ ಪ್ರಸ್ತಾವನೆಗೆ ಮಂಜೂರಾತಿ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿಸಿದರು.
ಒಪ್ಪಿಗೆ ಸೂಚಿಸುವ ಸಾಧ್ಯತೆ: ಕ್ರಿಯಾಯೋಜನೆ ತಯಾರಿಸುವ ಪೂರ್ವದಲ್ಲಿ ಜಿಲ್ಲೆಯ ಆಯಾ ನಗರ ಮತ್ತು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತಜ್ಞರಿಂದ ಸಮೀಕ್ಷೆ ನಡೆಸಲಾಗಿದೆ. ಜನತೆಗೆ ಬೇಕಿರುವ ಸೌಲಭ್ಯಗಳ ಕುರಿತು ಸಮಾಲೋಚನೆ ನಡೆಸಿ ಕ್ರಿಯಾಯೋಜನೆ ತಯಾರಿಸಿದ್ದು ಕೇಂದ್ರ ಸರ್ಕಾರ ಜಿಲ್ಲಾಡಳಿತ 160 ಕೋಟಿ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಅದೇ ರೀತಿ ನಗರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ವಾಸವಾಗಿರುವ ಪ್ರದೇಶದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಕೇಂದ್ರ ಸರ್ಕಾರದಿಂದ ರಾಯಚೂರು ನಗರಸಭೆಗೆ 10 ಕೋಟಿ ಮಂಜೂರಾಗಿದ್ದು, ಸಿಂಧನೂರು ನಗರಸಭೆಯಿಂದ 10 ಕೋಟಿಗೂ ಹೆಚ್ಚಿನ ಕ್ರಿಯಾಯೋಜನೆ ಸಲ್ಲಿಕೆಯಾಗಿದ್ದರಿಂದ ಕೇಂದ್ರ ಮಂಜೂರಾತಿ ಇದುವರೆಗೆ ನೀಡಿಲ್ಲ ಎಂದು ತಿಳಿಸಿದರು.
ಜಿಲ್ಲಾಡಳಿತ ಭವನಕ್ಕೆ ಸ್ಥಳದ ಕೊರತೆ: ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಕೆಲವರ್ಷಗಳ ಹಿಂದೆಯೇ ಜಿಲ್ಲಾಡಳಿತಕ್ಕೆ 25 ಕೋಟಿ ದೊರೆತಿದೆ. ಆದರೆ ಸೂಕ್ತ ಸ್ಥಳದ ಕೊರತೆಯಿಂದಾಗಿ ನಿರ್ಮಾಣ ವಿಳಂಬವಾಗಿದೆ. ಸದ್ಯ ಜಿಲ್ಲಾ ಆಸ್ಪತ್ರೆಯಿರುವ 10 ಎಕರೆ ಪ್ರದೇಶದ 5 ಎಕರೆಯಲ್ಲಿ ಜಿಲ್ಲಾಡಳಿತ ಭವನ ಮತ್ತು ಇನ್ನುಳಿದ 5 ಎಕರೆಯಲ್ಲಿ ಜಿಲ್ಲಾ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯು ಅದರ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದ್ದಂತೆಯೇ ಜಿಲ್ಲಾಡಳಿತ ಭವನದ ನಿರ್ಮಾಣ ಚುರುಕುಗೊಳಿಸಲಾಗುತ್ತದೆ. ಜಿಲ್ಲಾ ಆಸ್ಪತ್ರೆಗೆ ಸೇರಿದ ಜಾಗ ಒತ್ತುವರಿ ಮಾಡಿಕೊಂಡವರನ್ನು ತೆರವುಗೊಳಿಸಲಾಗುತ್ತದೆ ಎಂದು ಎಚ್ಚರಿಸಿದ ಅವರು, ನಂತರ ಜಿಲ್ಲಾಡಳಿತ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ ಎಂದು ತಿಳಿಸಿದರು.
ಕಾಲುವೆ ನೀರಿನ ಮಟ್ಟ ಕಾಯ್ದುಕೊಳ್ಳಲು ಸೂಚನೆ: ತುಂಗಭದ್ರಾ ಎಡದಂಡೆ ಕಾಲುವೆಯ ಕಡೆಯ ಭಾಗದ ರೈತರಿಗೆ ಸಮರ್ಪಕ ನೀರು ದೊರೆಯದಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರು ಕೇಳಿಬಂದಿದ್ದು, ಈ ನಿಟ್ಟಿನಲ್ಲಿ ನೀರಾವರಿ ಅಧಿಕಾರಿಗಳಿಗೆ ಕಾಲುವೆಯಲ್ಲಿ ನೀರಿನ ಮಟ್ಟ ಕಾಯ್ದುಕೊಳ್ಳಲು ಪೂರಕ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ಇಲಾಖೆಗೂ ಈ ಬಗ್ಗೆ ಪತ್ರ ಬರೆದಿದ್ದು, ಕಾಲುವೆಯ ಮೇಲೆ ಬಿಗಿ ಪಹರೆ ಹಾಕುವ ಮೂಲಕ ಕಾಲುವೆಯಿಂದ ಅಕ್ರಮ, ಹೆಚ್ಚುವರಿ ನೀರು ಪಡೆಯುವುದನ್ನು ತಡೆಯಲು ಆದೇಶಿಸಲಾಗಿದೆ. ಒಂದೆರಡು ದಿನಗಳಲ್ಲಿ ಈ ನಿಟ್ಟಿನಲ್ಲಿ ಕ್ರಮ ಜರುಗುವ ಸಾಧ್ಯತೆಯಿದೆ. ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕವಿಟ್ಟುಕೊಳ್ಳದಿರುವುದು ಸಮಸ್ಯೆಗೆ ದಾರಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.