ರಾಯಚೂರು

ನಾಳೆ ಮಡಿವಾಳ ಸಮಾಜದ ಸಮಾವೇಶ

Published On :

ರಾಯಚೂರು: ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಮಡಿವಾಳ ಸಮಾಜದವರ ಬೃಹತ್ ಸಮಾವೇಶ ಜ.5ರಂದು ಆಯೋಜಿಸಲಾಗಿದೆ. ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಂಬಣ್ಣ ಯಕ್ಲಾಸಪುರ, ಮಡಿವಾಳ ಸಮಾಜದ ಸರ್ವಾಂಗೀಣ ಅಭಿವೃದ್ಧಿ, ಕುಲಕಸುಬಾದ ಮಡಿವಾಳ ವೃತ್ತಿಯನ್ನೇ ನಂಬಿ ಬದುಕಿರುವ ಸಮಾಜದವರ ನೋವು ಕಷ್ಟಗಳಿಗೆ ಸ್ಪಂದಿಸುವಂತೆ ಸರ್ಕಾರದ ಗಮನ ಸೆಳೆಯಲು ಸಮಾವೇಶ ಆಯೋಜಿಸಲಾಗಿದೆ ಎಂದು ತಿಳಿಸಿದರು. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಸಮಾಜದ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಸಮಾಜ ಕಲ್ಯಾಣ ಸಚಿವ ಆಂಜನೇಯ ಸಹ ಭಾಗವಹಿಸವರು. ಸಮಾವೇಶದ ಸಂದರ್ಭ ಮಡಿವಾಳ ಸಮಾಜವನ್ನು ದೇಶದ ಇತರೆ ರಾಜ್ಯಗಳಂತೆ ಪರಿಶಿಷ್ಟ ಜಾತಿಗೆ ಸೇರಿಸುವ ನಿಟ್ಟಿನಲ್ಲಿ ಮೈಸೂರು ವಿವಿಯ ಪ್ರೊ. ಅನ್ನಪೂರ್ಣ ಅವರು ನೀಡಿದ ವರದಿ ಯಥಾವತ್ತು ಜಾರಿಗೆ ತರಬೇಕೆಂದು ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು. ಸರ್ಕಾರದಿಂದಲೇ ಮಡಿವಾಳ ಮಾಚಿದೇವರ ಜಯಂತಿ ಆಚರಿಸಬೇಕು. ಮಡಿವಾಳ ಮಾಚಿದೇವರ ಜನ್ಮಸ್ಥಳ ಬಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರಹಿಪ್ಪರಗಿಯನ್ನು ಅಭಿವೃದ್ಧಿಪಡಿಸಿ ಜನ್ಮಸ್ಥಳ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸುವಂತೆ ಆಗ್ರಹಿಸಲಾಗುತ್ತದೆ ಎಂದು ತಿಳಿಸಿದರು. ಮಾಚಿದೇವರ ಅಧ್ಯಯನ ಪೀಠ ಸ್ಥಾಪಿಸಬೇಕು. ಮಡಿವಾಳ ಸಮಾಜದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂಬುದು ಸೇರಿದಂತೆ ಸಮಾವೇಶದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನ ಸಮಾಜದ ಬಾಂಧವರು ಪಾಲ್ಗೊಳ್ಳಲಿದ್ದು, ಜಿಲ್ಲೆಯಿಂದಲೂ ನೂರಾರು ಜನ ಭಾಗವಹಿಸಲಿದ್ದಾರೆಂದು ಹೇಳಿದರು. ಜಿ. ಸೂಗಪ್ಪ, ಎಂ. ಹುಸೇನಪ್ಪ ಅನೇಕರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.