ರಾಯಚೂರು

ವಿಜ್ಞಾನ, ತಂತ್ರಜ್ಞಾನ ಸಂಶೋಧನೆ ಬಳಕೆ ಅಗತ್ಯ

Published On :

ಕ.ಪ್ರ. ವಾರ್ತೆ  ರಾಯಚೂರು  ಜ.4
ಮಾನವನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗೆಯು ಇಂದಿನ ದಿನಮಾನದಲ್ಲಿ ಬಹುದೊಡ್ಡ ಸವಾಲಾಗಿದೆ. ದೇಶದ ಅಭಿವೃದ್ಧಿಗೆ ಪೂರಕವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಂಶೋಧನೆಗಳನ್ನು ಬಳಕೆ ಮಾಡುವ ಅವಶ್ಯಕತೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹೇಳಿದರು.
ನಗರದ ಕೃಷಿ ವಿವಿ ಪ್ರೇಕ್ಷಾಗೃಹದಲ್ಲಿ ಶನಿವಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತಿತರೆ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಿರುವ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನಗಳ ಸದ್ಬಳಕೆಯಿಂದ ನೈಸರ್ಗಿಕ ಸಂಪನ್ಮೂಲಗಳ ಉಪಯೋಗ ಎಂಬ ವಿಷಯದ ಕುರಿತು ವಿಭಾಗೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಾಗತಿಕ ಮಟ್ಟದಲ್ಲಿ ಸಾಧನೆ: ಸ್ವಾತಂತ್ರ್ಯಾ ನಂತರದಲ್ಲಿ ದೇಶದ ನಿವಾಸಿಗಳಲ್ಲಿ ಇದುವರೆಗೆ ದೇಶ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಕಂಡಿಲ್ಲ ಎಂಬ ಅಳುಕಿದೆ. ಆದರೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ದೇಶವು ಮಹತ್ತರ ಸಾಧನೆ ಮೆರೆದಿರುವುದು ಸುಳ್ಳಲ್ಲ. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಅಳವಡಿಸಿಕೊಂಡು ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ ಎಂದು ತಿಳಿಸಿದರು.
ಸಮರ್ಪಕ ಆಡಳಿತ ವ್ಯವಸ್ಥೆ ಜಾರಿಗೆ ತರುವಲ್ಲಿ ತಂತ್ರಜ್ಞಾನದ ಪಾತ್ರ ಮಹತ್ವದ್ದಾಗಿದೆ. ದೇಶದಲ್ಲಿ ವಿದ್ಯುತ್ ಅಭಾವ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ತಂತ್ರಜ್ಞಾನದ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಪರಿಹಾರ ಕಂಡುಕೊಳ್ಳಲಾಗಿದೆ ಎಂದು ತಿಳಿಸಿದರು.
ತಜ್ಞರ ಮಾರ್ಗದರ್ಶನ ಮುಖ್ಯ: ನಿರ್ದಿಷ್ಟ ಗುರಿಯಿರಿಸಿಕೊಂಡು ತಜ್ಞರ ಮಾರ್ಗದರ್ಶನದಲ್ಲಿ ಮುಂದುವರೆದಲ್ಲಿ ಮಾತ್ರ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಸಾಧ್ಯ ಎಂದ ಅವರು, ಜನಸಾಮಾನ್ಯರಿಗೆ ನೆರವಾಗುವಂಥ ಸಂಶೋಧನೆಗಳನ್ನು ನಡೆಸುವಂತೆ ಮನವಿ ಮಾಡಿದರು.
ಬೆಂಗಳೂರಿನ ಕೆಎಸ್ಟಿಎ ಸಂಸ್ಥೆಯ ಸದಸ್ಯ ಡಾ. ಪಿ.ಎಸ್. ಶಂಕರ್ ಮಾತನಾಡಿ, ಮೂಲ ವಿಜ್ಞಾನ ಅಧ್ಯಯನಕ್ಕೆ ವಿದ್ಯಾರ್ಥಿಗಳಲ್ಲಿ ದಿನಗಳೆದಂತೆ ಆಸಕ್ತಿ ಕುಂದುತ್ತಿದೆ. ಅದರಿಂದಾಗಿ ವಿಜ್ಞಾನ ಕ್ಷೇತ್ರದಲ್ಲಿ ಹಿನ್ನಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ವಿದ್ಯಾರ್ಥಿಗಳಲ್ಲಿ ಮೂಲ ವಿಜ್ಞಾನ ಕಲಿಕೆಗೆ ಆಸಕ್ತಿ ಮೂಡಿಸಲು ವಿದ್ಯಾರ್ಥಿ ವೇತನ ನೀಡುತ್ತಿದೆ. ಆದರೆ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಕೋರಿ ಅರ್ಜಿಗಳು ಸಲ್ಲಿಕೆಯಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಆಹಾರ ಭದ್ರತೆಯ ಕೊಡುಗೆ: ರಾಯಚೂರು ಕೃಷಿ ವಿವಿ ಕುಲಪತಿ ಡಾ. ಬಿ.ವಿ. ಪಾಟೀಲ್ ಮಾತನಾಡಿ, ದೇಶಕ್ಕೆ ಆಹಾರ ಭದ್ರತೆ ತಂದುಕೊಡುವಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಕೊಡುಗೆ ಅಪಾರ. ಕಳೆದ ವರ್ಷ ದೇಶದಲ್ಲಿ 265 ಮಿಲಿಯನ್ ಟನ್ ಆಹಾರ ಉತ್ಪಾದಿಸಲಾಗಿದೆ. ಮುಂದಿನ ಏಳೆಂಟು ವರ್ಷಗಳಲ್ಲಿ ದೇಶದ ಜನಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದ್ದು, ಆಗ ಅಗತ್ಯತೆಗೆ ತಕ್ಕಂತೆ ಲಭ್ಯವಿರುವ ಜಮೀನಿನಲ್ಲಿಯೇ ಹೆಚ್ಚಿನ ಆಹಾರ ಉತ್ಪಾದನೆ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ರೈತರು, ಕೃಷಿ ವಿಜ್ಞಾನಿಗಳು ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅವಶ್ಯಕ ಎಂದರು.
ದೇಶದಲ್ಲಿ 140 ಮಿಲಿಯನ್ ಹೆಕ್ಟೇರ್ ಕೃಷಿ ಜಮೀನಿದ್ದು, ಲಭ್ಯವಿರುವ ಜಮೀನಿನಲ್ಲಿಯೇ ಹೆಚ್ಚಿನ ಆಹಾರ ಉತ್ಪಾದಿಸುವ ಬಹುದೊಡ್ಡ ಸವಾಲು ರೈತರ ಮೇಲಿದೆ. ಈ ನಿಟ್ಟಿನಲ್ಲಿ ದೇಶದ ಕೃಷಿ ವಿಜ್ಞಾನಿಗಳೂ ರೈತರ ನೆರವಿಗೆ ಬರಬೇಕಿದೆ. ಆಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಸಲಹೆ ನೀಡಿದರು.
ಸಮಾರಂಭದಲ್ಲಿ ವಿಭಾಗೀಯ ಸಮ್ಮೇಳನದ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಾಯಿತು. ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಮಾಜಿ ಶಾಸಕರಾದ ಪಾಪಾರೆಡ್ಡಿ, ಕೆ. ಶರಣಪ್ಪ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸದಸ್ಯ ಕಾರ್ಯದರ್ಶಿ ಪ್ರೊ.ಸಿ.ಡಿ. ಪಾಟೀಲ್, ಬೆಂಗಳೂರಿನ ವಿಜ್ಞಾನಿಗಳಾದ ಡಾ. ಎಚ್.ಎಸ್. ಮುಕುಂದ, ಡಾ. ಹರೀಶ್ ಭಟ್, ಧಾರವಾಡ ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ಪದ್ಮಶ್ರೀ ಎಂ. ಮಹಾದೇವಪ್ಪ, ಇಸ್ರೋ ದ ಡಾ. ರಂಗನಾಥ್, ಡಾ. ನಾಗೇಶ ಹೆಗಡೆ, ಹೊಲ್ದೊಡ್ಡೇರಿ ಸುಧೀಂದ್ರ ಸೇರಿದಂತೆ ಅನೇಕರಿದ್ದರು. ವಿವಿಧೆಡೆಯಿಂದ ಆಗಮಿಸಿದ್ದ ವಿಜ್ಞಾನಿಗಳು, ಕೃಷಿ ಕ್ಷೇತ್ರದ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ರಾಯಚೂರು ಕೃಷಿ ವಿವಿ ಬೋಧಕ ವರ್ಗದವರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.