ಆರ್ಟಿಐ ಅಡಿ ಪೂರ್ಣ ಮಾಹಿತಿ ನೀಡಲು ಸೂಚನೆ
ಕ.ಪ್ರ. ವಾರ್ತೆ ರಾಯಚೂರು ಜ.9
ಮಾಹಿತಿ ಹಕ್ಕು ಕಾಯಿದೆ ಅಡಿ ಕೇಳಲಾಗುವ ಎಲ್ಲ ರೀತಿಯ ಮಾಹಿತಿಯನ್ನು ಸಮರ್ಪಕ ಮತ್ತು ಪೂರ್ಣ ಪ್ರಮಾಣದಲ್ಲಿ ನೀಡು ವತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಕರೆ ನೀಡಿದರು.
ಅವರು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಮತ್ತಿತರೆ ಇಲಾಖೆಗಳ ಆಶ್ರಯದಲ್ಲಿ ಆಯೋಜಿ ಸಿದ್ದ ಮಾಹಿತಿ ಹಕ್ಕು ಕಾಯಿದೆ ಕುರಿತ ಎರಡು ದಿನಗಳ ವಿವಿಧ ಇಲಾಖೆಯ ಅಧಿಕಾರಿಗಳ ಮತ್ತು ಸಿಬ್ಬಂದಿಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾಯಿದೆ ಆದೇಶ: ಮಾಹಿತಿ ಹಕ್ಕು ಕಾಯಿದೆಯ ಜಾರಿಯಿಂದ ಸಾರ್ವಜನಿಕರಿಗೆ ಆಡಳಿತದ ಬಗ್ಗೆ ಸಾಕಷ್ಟು ಮಾಹಿತಿ ದೊರೆಯುತ್ತಿದೆ. ಪಾರದರ್ಶಕ ಆಡಳಿತವೇ ಕಾಯಿದೆಯ ಮೂಲ ಆಶಯವಾಗಿದ್ದು, ಸಾರ್ವಜನಿಕರಿಗೆ ಸೂಕ್ತ ಸಮಯದಲ್ಲಿ ಅಗತ್ಯ ಮಾಹಿತಿ ನೀಡಲು ಸರ್ಕಾರದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಯಾವುದೇ ಕಾರಣಕ್ಕೆ ವಿಳಂಬ ಮಾಡಬಾರದು ಎಂದು ಸೂಚನೆ ನೀಡಿದರು.
ಸದ್ಯ ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯಿದೆ ಜಾರಿಯಲ್ಲಿ ಅನೇಕ ಲೋಪಗಳು ಕಂಡುಬಂದಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಯಿದೆಯ ಜಾರಿ ನಿಟ್ಟಿನಲ್ಲಿ ವಿಳಂಬ ಮಾಡುತ್ತಿದ್ದಾರೆ. ಇಲ್ಲವೇ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ ಸಾರ್ವಜನಿಕರಿಗೆ ಸಮರ್ಪಕ ಮಾಹಿತಿ ಒದಗಿಸದಿರುವ ಬಗ್ಗೆ ಸಾಕಷ್ಟು ದೂರು ಕೇಳಿ ಬಂದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹೆಚ್ಚಿದ ಒತ್ತಡ: ಜಿಲ್ಲೆ, ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಅಸಮರ್ಪಕ ಕಾರ್ಯವೈಖರಿಯಿಂದಾಗಿ ಮಾಹಿತಿ ಹಕ್ಕು ಕಾಯಿದೆಯಡಿ ಅರ್ಜಿ ಸಲ್ಲಿಸಿದವರಿಗೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದಿರುವುದು, ಅಪೂರ್ಣ ಮಾಹಿತಿ ನೀಡಿಕೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಮಾಹಿತಿ ಹಕ್ಕು ಆಯೋಗದ ಬೆಂಗಳೂರು ಕಚೇರಿಗೆ ಮೇಲಿಂದ ಮೇಲೆ ದೂರುಗಳು ಹೋಗುತ್ತಿರುವುದು ಸರಿಯಾದ ಬೆಳವಣಿಗೆಯಲ್ಲ. ಅದರಿಂದಾಗಿ ಆಯುಕ್ತರ ಕಚೇರಿ ಮೇಲೆ ಅಂಥ ದೂರುಗಳ ವಿಲೇವಾರಿಯ ಒತ್ತಡ ಹೆಚ್ಚಿದೆ ಎಂದು ಹೇಳಿದರು.
ಜಿಲ್ಲಾಡಳಿತಕ್ಕೆ ಮಾಹಿತಿ ಹಕ್ಕು ಆಯೋಗದಿಂದ ಮೇಲಿಂದ ಮೇಲೆ ಪತ್ರಗಳು ಬರುತ್ತಿದ್ದು, ಮಾಹಿತಿ ಹಕ್ಕು ಕಾಯಿದೆ ಜಾರಿಗೆ ಸಂಬಂಧಿಸಿ ಜಿಲ್ಲೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಸಗುತ್ತಿರುವ ಲೋಪದ ಬಗ್ಗೆ ಎಚ್ಚರಿಕೆ ನೀಡಲಾಗುತ್ತಿದೆ. ಇಂಥ ಎಚ್ಚರಿಕೆಯ ಪತ್ರಗಳು ಬಾರದಂತೆ ಕಾರ್ಯನಿರ್ವಹಿಸುವ ಕಾರ್ಯ ಇಲಾಖೆಯ ಸಿಬ್ಬಂದಿ ಮಾಡಬೇಕಿದೆ ಎಂದರು.
ಜಿಪಂ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಮಾತನಾಡಿ, ಮಾಹಿತಿ ಹಕ್ಕು ಕಾಯಿದೆಯ ಜಾರಿ ನಂತರದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಯ ಕಾರ್ಯನಿರ್ವಹಣೆ ಸುಧಾರಣೆ ಕಂಡಿದೆ. ಈ ಕಾಯಿದೆಯ ಜಾರಿಯಲ್ಲಿ ನೌಕರರು ಹೊಣೆಗಾರಿಕೆಯನ್ನು ವಹಿಸಿಕೊಳ್ಳಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ, ಜಿಪಂ ಯೋಜನಾಧಿಕಾರಿ ಟಿ. ರೋಣಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತರಬೇತಿಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

