ರಾಯಚೂರು

ಬಂಡೆ ನಿಧನ: ಬೀದರ್ ಬಂದ್ ಶಾಂತಿಯುತ

Published On :

ಕ.ಪ್ರ. ವಾರ್ತೆ    ಬೀದರ್    ಜ.16
ಪಿಎಸ್‌ಐ ಮಲ್ಲಿಕಾರ್ಜುನ ಬಂಡೆ ಸಾವಿನ ಕುರಿತು ಸಮಗ್ರ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿ ಗುರುವಾರ ಬಿಜೆಪಿಯಿಂದ ಹಮ್ಮಿಕೊಳ್ಳಲಾದ ಬೀದರ್ ಜಿಲ್ಲಾ ಬಂದ್ ಯಾವುದೇ ಅಹಿತಕರ ಘಟನೆ ಇಲ್ಲದೆ ಶಾಂತಿಯುತವಾಗಿತ್ತು.
ಗುರುವಾರ ಬೆಳಗ್ಗೆಯಿಂದಲೇ ಹಳೆ ನಗರ ಹೊರತುಪಡಿಸಿ ನಗರದ ವಿವಿಧೆಡೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಬಿಜೆಪಿ ಕಾರ್ಯಕರ್ತರು ವಾಹನಗಳಲ್ಲಿ ಅಂಗಡಿಗಳನ್ನು ಮುಚ್ಚಲು ಮನವಿ ಮಾಡುತ್ತಿದ್ದದ್ದು ಕಂಡುಬಂತು. ಪ್ರತಿಭಟನಾಕಾರರು ನಗರದ ಮುಖ್ಯ ರಸ್ತೆಗಳಲ್ಲಿ ರಾಜ್ಯ ಸರ್ಕಾರ ಹಾಗೂ ಐಜಿಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾಕಾರರು ಬೈಕ್‌ಗಳ ಮೇಲೆ ಸುತ್ತಾಡಿ ಡಾ. ಅಂಬೇಡ್ಕರ್ ವೃತ್ತದಲ್ಲಿ ಕೆಲ ಹೊತ್ತು ಧರಣಿ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಈಶ್ವರಸಿಂಗ್ ಠಾಕೂರ, ಶಶಿ ಹೊಸಳ್ಳಿ, ಕುಶಲಾರಾವ ಪಾಟೀಲ್ ಗಾದಗಿ ಇನ್ನಿತರರು ಮಾತನಾಡಿ, ರಾಜ್ಯ ಸರ್ಕಾರ ಹಾಗೂ ಐಜಿಪಿ ನಿರ್ಲಕ್ಷವೇ ಬಂಡೆ ಸಾವಿಗೆ ಕಾರಣ ಎಂದು ದೂರಿದರು.
ಗುಲ್ಬರ್ಗ ನಗರದಲ್ಲಿ ರೌಡಿಗಳಿಗೆ ಹಾಗೂ ಭಯೋತ್ಪಾದಕರಿಗೆ ಆಸರೆ ನೀಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಹಾಗೂ ಐಜಿಪಿ ವಜೀರ್ ಅಹ್ಮದ್ ಅವರನ್ನು ಕೂಡಲೇ ಅವರ ಹುದ್ದೆಯಿಂದ ತೆಗೆದು ಹಾಕಬೇಕು. ಸರ್ಕಾರ ಬಂಡೆ ಅವರ ಕುಟುಂಬದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಘಟನೆಯ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಪೊಲೀಸರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸಿದರು.
ಐಜಿಪಿ ವಜೀರ್ ಅಹ್ಮದ್, ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಅವರು ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.  ಪ್ರತಿಭಟನೆಯಲ್ಲಿ ಮಹೇಶ ಪಾಲಂ, ಶಿವಪುತ್ರ ವೈದ್ಯ, ಅನೀಲ ಉಪ್ಪೆ, ಬಸವರಾಜ ಜೋಜನಾ, ಏಜಾಜ್ ಅಹ್ಮದ್ ಮತ್ತಿತರರು ಪಾಲ್ಗೊಂಡಿದ್ದರು.
ಬಸ್ ಸಂಚಾರ ಸ್ಥಗಿತ: ಬಿಜೆಪಿಯಿಂದ ಜಿಲ್ಲಾ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗುರುವಾರ ಸಾರಿಗೆ ಸಂಸ್ಥೆಯ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
ಬಸ್‌ಗಳು ಇಲ್ಲದೆ ನಿಲ್ದಾಣ ಬಿಕೋ ಎನ್ನುತಿತ್ತು. ನಗರ, ಗ್ರಾಮಗಳಿಗೆ ತೆರಳುವ ಪ್ರಯಾಣಿಕರು ಕಷ್ಟ ಅನುಭವಿಸುವಂತಾಯಿತು. ಬಸ್‌ಗಳು ಇಲ್ಲದೇ ಆಟೋರಿಕ್ಷಾಗಳ ದರ್ಬಾರ್ ಜೋರಾಗಿ ನಡೆಯಿತು. ಹೊರ ರಾಜ್ಯದ ಸಾರಿಗೆ ಬಸ್‌ಗಳು ಎಂದಿನಂತೆ ಸಂಚಾರ ನಡೆಸಿದವು.
ಶಾಲಾ- ಕಾಲೇಜು, ಕಚೇರಿಗಳು ಎಂದಿನಂತೆ: ಬೀದರ್ ಬಂದ್ ಕರೆ ನೀಡಲಾಗಿದ್ದರೂ ಗುರುವಾರ ಬಹುತೇಕ ಶಾಲಾ ಕಾಲೇಜುಗಳು ಎಂದಿನಂತೆ ಕೆಲಸ ನಿರ್ವಹಿಸಿದವು. ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.