ದೇವೇಂದ್ರಪ್ಪ ಕೊಲೆ; ಸಿಬಿಐ ತನಿಖೆಗೆ ಆಗ್ರಹಿಸಿ ರಸ್ತೆತಡೆ
ಲಿಂಗಸ್ಗೂರು: ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ದಲಿತ ಮುಖಂಡ ದೇವೇಂದ್ರಪ್ಪ ಕೊಲೆಯಾಗಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶುಕ್ರವಾರ ದಲಿತ ಸಂಘಟನೆಗಳ ಸಂಯುಕ್ತ ವೇದಿಕೆಯಿಂದ ಪ್ರತಿಭಟನೆ ಹಾಗೂ ರಸ್ತೆತಡೆ ನಡೆಸಲಾಯಿತು.
ಪಟ್ಟಣದ ಬಸ್ ನಿಲ್ದಾಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ಕೆಲಕಾಲ ರಸ್ತೆ ತಡೆ ನಡೆಸುವ ಮೂಲಕ ತಹಸೀಲ್ದಾರ್ ಜಿ.ಎಸ್. ಮಹಾಜನ್ ಅವರಿಗೆ ಮನವಿ ಸಲ್ಲಿಸಿದರು.
ಕನ್ಯಾಕೋಳೂರು ಗ್ರಾಮದ ಚೌಡೇಶ್ವರಿ ಜಾತ್ರೆ ನಿಮಿತ್ತ ದಲಿತ ಯುವಕರು ಸ್ವಾಗತ ಕೋರುವ ಬ್ಯಾನರುಗಳ ವಿಷಯವಾಗಿ ದಲಿತರು ಮತ್ತು ಸವರ್ಣೀಯರ ಮಧ್ಯೆ ನಡೆದ ಸಂಘರ್ಷದಲ್ಲಿ 12 ಜನ ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ. ಘಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿ ಶಾಂತಿಸಭೆ ನಡೆಸಲು ಕರೆದಾಗ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಆಗಮಿಸುವ ವೇಳೆ ಸವರ್ಣೀಯರ ಗುಂಪು ಏಕಾಏಕಿ ಮಾರಣಾಂತಿಕ ಹಲ್ಲೆ ಮಾಡಿ ಅವರ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆಂದು ದೂರಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ರಕ್ಷಣೆ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಇದಕ್ಕೆ ಶಹಾಪುರ ತಾಲೂಕಿನ ಕನ್ಯಾಕೋಳೂರು ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ತಾಜಾ ಉದಾಹರಣೆಯಾಗಿದೆ. ಗೃಹ ಸಚಿವ ಕೆ.ಜೆ. ಜಾರ್ಜ್ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕು. ದಲಿತರ ರಕ್ಷಣೆ ನೀಡುವಲ್ಲಿ ವಿಫಲರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಅಮಾನತುಗೊಳಿಸಬೇಕು. ಈಶಾನ್ಯ ವಲಯ ಪೊಲೀಸ್ ಮಹಾನಿರ್ದೇಶಕರನ್ನು ವಜಾಗೊಳಿಸಬೇಕು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಕೊಲೆಯಾದ ದೇವೇಂದ್ರಪ್ಪ ದಳಪತಿ ಕುಟುಂಬಕ್ಕೆ 25 ಲಕ್ಷ ಪರಿಹಾರ, 5 ಎಕರೆ ಜಮೀನು ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಗಾಯಗೊಂಡವರಿಗೆ ತಲಾ 10 ಲಕ್ಷ ಹಾಗೂ 2 ಎಕರೆ ಜಮೀನು ನೀಡಬೇಕು. ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ದಲಿತ ಸಂಘಟನೆಗಳ ಸಂಯುಕ್ತ ವೇದಿಕೆ ಮುಖಂಡರಾದ ಹನುಮಂತ ಕುಣಿಕಲ್ಲೂರ, ಮುತ್ತಪ್ಪ ಕರಡಕಲ್, ಪ್ರಭುಲಿಂಗ ಮೇಗಳಮನಿ, ಹನುಮಂತ ತವಗ, ಲಿಂಗಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

