ರಾಯಚೂರು

ರೈತರಿಗೆ ಶೀಘ್ರ ಸಮರ್ಪಕ ನೀರು: ಸಚಿವರ ಭರವಸೆ

Published On :

ಕ.ಪ್ರ. ವಾರ್ತೆ ,  ರಾಯಚೂರು ,  ಜ.24
ತುಂಗಭದ್ರಾ ಎಡದಂಡೆ ಕಾಲುವೆಯ ಮಾನವಿ ಮತ್ತು ರಾಯಚೂರು ತಾಲೂಕಿನ ರೈತರಿಗೆ ಸಮರ್ಪಕ ನೀರು ಹರಿಸುವಂತಾಗಲು ಜಿಲ್ಲಾಧಿಕಾರಿ ಮತ್ತು ಎಸ್ಪಿ ನೇತೃತ್ವದಲ್ಲಿ ಬಿಗಿ ಕ್ರಮಕ್ಕೆ ಜ.27ರ ನಂತರ ಆದೇಶಿಸುವುದಾಗಿ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಭರವಸೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ರೈತ ಸಂಘ ಮತ್ತು ಶಾಸಕರ ನೇತೃತ್ವದ ನಿಯೋಗಕ್ಕೆ ಸಚಿವರು ಭರವಸೆ ನೀಡಿದ್ದು, ಗಣರಾಜ್ಯೋತ್ಸವದ ನಂತರದಲ್ಲಿ ರಾಯಚೂರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಾಲುವೆಯ ಮೇಲೆ ಬಿಗಿ ಕಾವಲು ಹಾಕಿ ಸಮರ್ಪಕ ನೀರೊದಗಿಸುವಂತೆ ಸೂಚಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಕೂಡಲೇ ಸಮರ್ಪಕ ನೀರೊದಗಿಸಿ: ಇದಕ್ಕೂ ಮೊದಲು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಮಾತನಾಡಿ, ತುಂಗಭದ್ರಾ ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಮತ್ತು ಅಧಿಕಾರಿಗಳು ನೀರಿನ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಅದರಿಂದಾಗಿ ರೈತರು ಬೆಳೆದ ಹತ್ತಿ, ಮೆಣಸಿನಕಾಯಿ ಮತ್ತಿತರೆ ಬೆಳೆ ಒಣಗುತ್ತಿದ್ದು, ಕೂಡಲೇ ಕಾಲುವೆಯ ಕಡೆಯ ಭಾಗದ ರೈತರಿಗೆ ಸಮರ್ಪಕ ನೀರೊದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮತ್ತು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರನ್ನು ಒತ್ತಾಯಿಸಿದರು.
ಅದೇ ರೀತಿ ಆಂಧ್ರಕ್ಕೆ ತುಂಗಭದ್ರಾ ಮಂಡಳಿಯವರು ಅಕ್ರಮವಾಗಿ ಭಾರೀ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು, ಕೂಡಲೇ ನೀರು ಹರಿಸುವುದನ್ನು ನಿಲುಗಡೆ ಮಾಡುವಂತೆಯೂ ನಿಯೋಗ ಒತ್ತಾಯಿಸಿದಾಗ ಸಚಿವ ಪಾಟೀಲ್, ಈ ಬಗ್ಗೆ ಕೂಡಲೇ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದರು.
ಶೀಘ್ರವೇ ತಜ್ಞರ ಸಭೆ: ಮಾನವಿ ಮತ್ತು ರಾಯಚೂರು ತಾಲೂಕುಗಳ ರೈತರಿಗೆ ಪ್ರತಿ ವರ್ಷ ಆಗುತ್ತಿರುವ ನೀರಿನ ಅಭಾವ ತಪ್ಪಿಸುವ ನಿಟ್ಟಿನಲ್ಲಿ ಸಮಾನಾಂತರ ಜಲಾಶಯಗಳ ನಿರ್ಮಾಣಕ್ಕೆ ಸಂಬಂಧಿಸಿ ಶೀಘ್ರವೇ ತಜ್ಞರ ಸಭೆ ಕರೆದು ಚರ್ಚಿಸಲಾಗುತ್ತದೆ. ಆ ಸಭೆಯಲ್ಲಿ ತುಂಗಭದ್ರಾ ಎಡದಂಡೆ ಕಾಲುವೆಯ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೃಷಿ ಜಮೀನು ನೀರಾವರಿ ಮಾಡಿಕೊಂಡಿರುವ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಸಚಿವರು ರೈತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.
ಹೋರಾಟದ ಎಚ್ಚರಿಕೆ: ಸಚಿವ ಎಂ.ಬಿ. ಪಾಟೀಲ್ ಜ.27 ಇಲ್ಲವೇ 28ರಂದು ತಾವು ನೀಡಿದ ಭರವಸೆಯಂತೆ ನಡೆದುಕೊಳ್ಳದಿದ್ದರೆ ರಾಜ್ಯ ರೈತ ಸಂಘವು ಉಗ್ರ ಹೋರಾಟಕ್ಕಿಳಿಯಲಿದೆ ಎಂದು ಎಚ್ಚರಿಸಿದ್ದಾರೆ.
ನಿಯೋಗದಲ್ಲಿ ಶಾಸಕರಾದ ಡಾ. ಶಿವರಾಜ್ ಪಾಟೀಲ್, ಪ್ರತಾಪಗೌಡ ಪಾಟೀಲ್, ಹಂಪನಗೌಡ ಬಾದರ್ಲಿ, ಮಾಜಿ ಶಾಸಕ ಗಂಗಾಧರ ನಾಯಕ, ರೈತ ಮುಖಂಡರಾದ ಆನಂದರಾವ್ ದೊಡ್ಡಬಸನಗೌಡ ಬಲ್ಲಟಗಿ, ಬಸವರಾಜ ಮಾಲಿ ಪಾಟೀಲ್, ನಾಗೇಶ್ವರರಾವ್, ತ್ರಿಮೂರ್ತಿ, ಬಾಲಾಜಿ ಜೀನೂರು ಕ್ಯಾಂಪ್ ಮತ್ತಿತರರು ಇದ್ದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.