ರಾಯಚೂರು

ವಿದ್ಯಾ ಸಹಾಯಹಸ್ತ ಅಭಿಯಾನಕ್ಕೆ ಚಾಲನೆ

Published On :

ರಾಯಚೂರು: ಉಚಿತ ಹಾಗೂ ಕಡ್ಡಾಯ ಶಿಕ್ಷಣ ಕಾಯಿದೆ ಜಾರಿಯಲ್ಲಿ ಬಡವರಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಆಗುತ್ತಿರುವ ಅನ್ಯಾಯ ತಡೆಯಲು ಕಾಂಗ್ರೆಸ್ ಪಕ್ಷದ ಯುವ ಘಟಕ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಜ.27 ರಿಂದ ಫೆ.8 ರವರೆಗೆ ರಾಜ್ಯದ ಎಲ್ಲ ತಾಲೂಕುಗಳಲ್ಲಿ ವಿದ್ಯಾ ಸಹಾಯ ಹಸ್ತ ಅಭಿಯಾನ ಆಯೋಜಿಸಲಾಗಿದೆ ಎಂದು ರಾಯಚೂರು ಲೋಕಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ತಿಳಿಸಿದೆ.
ನಗರದಲ್ಲಿ ಸೋಮವಾರ ಕಾಂಗ್ರೆಸ್ ಯುವ ಘಟಕದಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಘಟಕದ ಅಧ್ಯಕ್ಷ ಎ. ವಸಂತಕುಮಾರ ಈ ವಿಷಯ ತಿಳಿಸಿ, ಅನುದಾನ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಬಡವರ ಮಕ್ಕಳು ಉಚಿತ ಶಿಕ್ಷಣ ಪಡೆಯುವಂತಾಗಲು ಕಾಂಗ್ರೆಸ್ ಸರ್ಕಾರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಜಾರಿಗೆ ತರಲಾಗಿದೆ ಎಂದು ಹೇಳಿದರು.
ಭರ್ತಿಯಾಗಲಿಲ್ಲ: ಕೇಂದ್ರ ಸರ್ಕಾರ ಜಾರಿಗೆ ತಂದ ಈ ಕಾಯಿದೆಯ ಸಮರ್ಪಕ ಅನುಷ್ಠಾನದಲ್ಲಿ ಕಳೆದ ಅವಧಿಗೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ವಿಫಲವಾಯಿತು. ಮಾಹಿತಿ ಕೊರತೆ, ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ದಬ್ಬಾಳಿಕೆ, ಮಧ್ಯವರ್ತಿಗಳ ಹಾವಳಿ ಮತ್ತಿತರೆ ಕಾರಣಗಳಿಂದ 2012-13ನೇ ಸಾಲಿನಲ್ಲಿ ರಾಜ್ಯದಲ್ಲಿ ಸುಮಾರು 37 ಸಾವಿರ ಸೀಟುಗಳು ಕಾಯಿದೆ ಅಡಿ ಭರ್ತಿಯಾಗದೇ ಉಳಿದವು ಎಂದು ಟೀಕಿಸಿದರು.
ವಿನೂತನ ಅಭಿಯಾನ: ಈ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ಘಟಕವು ರಾಜ್ಯಾಧ್ಯಕ್ಷ ರಿಜ್ವಾನ್ ಅರ್ಷದ್ ಅವರ ಸೂಚನೆಯಂತೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಸಮರ್ಪಕ ಜಾರಿ ನಿಟ್ಟಿನಲ್ಲಿ ಎಲ್ಲ ತಾಲೂಕುಗಳಲ್ಲಿ ವಿದ್ಯಾ ಸಹಾಯ ಹಸ್ತ ಎಂಬ ವಿನೂತನ ಅಭಿಯಾನವನ್ನು ನಡೆಸಲು ನಿರ್ಧರಿಸಲಾಗಿದೆ. ಅದರಂತೆ ಯುವ ಕಾಂಗ್ರೆಸ್ ಸಮಿತಿಯವರು ಬಡವರ ಮಕ್ಕಳಿಗೆ ಕಾಯಿದೆ ಅಡಿ ಖಾಸಗಿ ಶಾಲೆಗಳಲ್ಲಿ ಪ್ರವೇಶ ದೊರಕಿಸಿಕೊಡುವ ಕಾರ್ಯ ಮಾಡಲಿದ್ದಾರೆಂದು ತಿಳಿಸಿದರು.
ಜನತೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದು, ಅರ್ಜಿಯ ಪ್ರತಿ ಹಾಗೂ ಅದನ್ನು ಭರ್ತಿ ಮಾಡಲು ವಿವರಿಸುವುದು, ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿಕೆ, ಆಯಾ ವಾರ್ಡುಗಳಲ್ಲಿನ ಖಾಸಗಿ ಶಾಲೆಗಳಲ್ಲಿ ಕಾಯಿದೆ ಅಡಿ ಲಭ್ಯವಿರುವ ಸೀಟುಗಳ ಬಗ್ಗೆ ಮಾಹಿತಿ ಒದಗಿಸುವುದು ಸಾರ್ವಜನಿಕರಿಗಾಗಿ ಸಹಾಯವಾಣಿ ಸ್ಥಾಪಿಸಿ ಅದರ ಮೂಲಕ ಜನತೆಗೆ ಅನುಕೂಲ ಕಲ್ಪಿಸುವ ಉದ್ದೇಶವಿದೆ ಎಂದು ತಿಳಿಸಿದರು.
  ಯುವ ಘಟಕದ ಪ್ರಮುಖರಾದ ಎಂಡಿ. ಇಸ್ಮಾಯಿಲ್, ಇಮ್ರಾನ್, ಅಫ್ಸರ್ ಹುಸೇನ್, ಮರಿ ಸ್ವಾಮಿ, ಪ್ರವೀಣ್, ರಾಜೇಶ್ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.