ಪುನಾವಸತಿ ಕಾರ್ಯಕರ್ತರ ಸೇವೆ ಕಾಯಂಗೆ ಒತ್ತಾಯ
ಕ.ಪ್ರ. ವಾರ್ತೆ ರಾಯಚೂರು ಜ.27
ನಗರದಲ್ಲಿ ಎಂ.ಆರ್ಡಬ್ಲ್ಯು ಮತ್ತು ವಿಆರ್ಡಬ್ಲ್ಯುಗಳ ಸೇವೆ ಕಾಯಂಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ವಿಕಲಚೇತನರ ವಿವಿಧೋದ್ದೇಶ ಪುನಾವಸತಿ(ಎಂಆರ್ಡಬ್ಲ್ಯು) ಹಾಗೂ ಗ್ರಾಮೀಣ ಪುನಾವಸತಿ ಕಾರ್ಯಕರ್ತರ(ವಿಆರ್ಡಬ್ಲ್ಯು) ಜಿಲ್ಲಾ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸಾರ್ವಜನಿಕ ಉದ್ಯಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಸಲ್ಲಿಸಿ, ಗ್ರಾಮೀಣ ವಿಕಲಚೇತನರ ಪುನಾವಸತಿ ಕಾರ್ಯ ಅನುಷ್ಠಾನಕ್ಕೆ ತಾಲೂಕು ಮಟ್ಟದಲ್ಲಿ ವಿಕಲಚೇತನರ ಅಧಿಕಾರಿಗಳಿಲ್ಲದ್ದರಿಂದ ಹಾಲಿ ಕಾರ್ಯನಿರ್ವಹಿಸುತ್ತಿರುವ ಒಕ್ಕೂಟದವರ ಸೇವೆ ಪಡೆದು ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುವಂತಾಗಲು ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿದರು.
ಸೌಲಭ್ಯ ವಂಚನೆ: 2007ರ ಗ್ರಾಮೀಣ ಅಂಗವಿಕಲರ ಪುನಾವಸತಿ ಯೋಜನೆ ರಾಜ್ಯದ 176ತಾಲೂಕಿನ 5628 ಗ್ರಾಪಂಗಳಲ್ಲಿ ಜಾರಿಯಲ್ಲಿದೆ. ಆದರೆ ನಗರ, ಪಟ್ಟಣ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಯೋಜನೆ ಸೌಲಭ್ಯ ಸಿಗುತ್ತಿಲ್ಲ. ಇದರಿಂದಾಗಿ ನಗರ ಮತ್ತಿತರೆ ಪ್ರದೇಶದಲ್ಲಿ ವಾಸವಾಗಿರುವ ವಿಕಲಚೇತನರು ವಿವಿಧ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಕಾರಣ ಕೂಡಲೇ ಸಮಗ್ರ ಅಂಗವಿಕಲರ ಪುನಾವಸತಿ ಯೋಜನೆ ಅಡಿ ಗ್ರಾಮೀಣ ಯೋಜನೆಯ ಜಾರಿಗೊಳಿಸುವಂತೆ ಒತ್ತಾಯಿಸಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ವಿಆರ್ಡಬ್ಲ್ಯುಗಳು ಕಾರ್ಯನಿರ್ವಹಣೆ ವೇಳೆ ಅಪಘಾತಕ್ಕೀಡಾಗಿ ಮರಣ ಹೊಂದಿದರೆ ಅಂಥ ವ್ಯಕ್ತಿಯ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಸೇವಾ ಭದ್ರತೆಯಿಲ್ಲದೇ ದುಡಿಯುತ್ತಿರುವ ಒಕ್ಕೂಟದ ಕಾರ್ಯಕರ್ತರ ಕುಟುಂಬದವರಿಗೆ ರು. 5ಲಕ್ಷ ಪರಿಹಾರ ನೀಡಬೇಕೆಂದು ಆಗ್ರಹಿಸಿದರು.
ಅಭಿವೃದ್ಧಿ ನಿಗಮಕ್ಕೆ ಒತ್ತಾಯ: ರಾಜ್ಯದ ವಿವಿಧ ಇಲಾಖೆಗಳಿಗೆ ದೊರೆಯುವ ಅನುದಾನದ ಶೇ.3ರಷ್ಟು ಭಾಗವು ವಿಕಲಚೇತನರ ಅಭಿವೃದ್ಧಿಗೆ ಬಳಕೆಯಾಗಬೇಕು ಎಂದು ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ. ಈ ಬಗ್ಗೆ ಅನೇಕರಿಗೆ ಯೋಜನೆಯ ಕುರಿತು ಮಾಹಿತಿ ದೊರೆಯದಂತಾಗಿದೆ. ಈ ಹಿನ್ನೆಲೆಯಲ್ಲಿ ಎಸ್ಸಿ, ಎಸ್ಟಿ ಅಭಿವೃದ್ಧಿ ನಿಗಮದಂತೆ ಜಿಲ್ಲಾ ಮಟ್ಟದಲ್ಲಿ ವಿಕಲಚೇತನರ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಒತ್ತಾಯಿಸಿದರು.
ಸರ್ಕಾರ ವಿಕಲಚೇತನರಿಗೆ ಪ್ರಕಟಿಸುವ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ ನಿಟ್ಟಿನಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ಅವಶ್ಯಕತೆಯಿದೆ. ರಾಜ್ಯದಲ್ಲಿ 25ರಿಂದ 30ಲಕ್ಷ ವಿಕಲಚೇತನರಿದ್ದು, ಅವರಿಗೆ ಸೌಲಭ್ಯ ದೊರಕಿಸುವಂತಾಗಲು ಪ್ರತ್ಯೇಕ ಸಚಿವಾಲಯ ಸ್ಥಾಪನೆಯಾಗಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮಹ್ಮದ್ ಹುಸೇನಸಾಬ್ ಪರಾಪೂರ, ಅಮರೇಶ್ ಯಾದವ್ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

