ರಾಯಚೂರು

ಎಂಜಿನಿಯರಿಂಗ್ ಕಾಲೇಜು ಮಂಜೂರಾತಿಗೆ ಪ್ರಸ್ತಾವ

Published On :

ಲಿಂಗಸ್ಗೂರು: ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಹಾಗೂ ಲಿಂಗಸ್ಗೂರು ಪಟ್ಟಣಕ್ಕೆ ಎಂಜಿನಿಯರಿಂಗ್ ಕಾಲೇಜು ಮಂಜೂರು ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಮಾನಪ್ಪ ವಜ್ಜಲ್ ತಿಳಿಸಿದರು.
ಪಟ್ಟಣದ ಶಾಸಕರ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣಗೊಳಿಸಲು 750 ಕೋಟಿ ವೆಚ್ಚದ ಕ್ರಿಯಾಯೋಜನೆ ತಯಾರಿಸಿ ನೀರಾವರಿ ಸಚಿವರಿಗೆ ವರದಿ ಸಲ್ಲಿಸಲಾಗಿದೆ. ಶೀಘ್ರ ಅನುಮತಿ ದೊರೆಯುವ ಭರವಸೆ ವ್ಯಕ್ತಪಡಿಸಿದ್ದಾರೆ ಎಂದರು.
ಪ್ರಥಮ ಹಂತದಲ್ಲಿ 0ದಿಂದ 50 ಕಿಮೀವರೆಗೆ ಆಧುನೀಕರಣ ಕಾಮಗಾರಿ ಆರಂಭಿಸಲಾಗುವುದು. ನಂದವಾಡಗಿ ಏತನೀರಾವರಿ ಯೋಜನೆ ಜಾರಿ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸಿದ್ದು, ಸರ್ಕಾರ ವಿಳಂಬ ನೀತಿ ಅನುಸರಿಸಿದರೆ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.
ಶಾಶ್ವತ ನೀರು ಯೋಜನೆ: ಶೈಕ್ಷಣಿಕವಾಗಿ ಬೆಳೆಯುತ್ತಿರುವ ಲಿಂಗಸ್ಗೂರಲ್ಲಿ ಎಂಜಿನಿಯರಿಂಗ್ ಕಾಲೇಜು ಅವಶ್ಯವಿದ್ದು, ಮಂಜೂರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶುದ್ಧ ಕುಡಿವ ನೀರಿಗೆ ಆದ್ಯತೆ ನೀಡಿದ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲರಿಗೆ ಈಗಾಗಲೇ ತಾಲೂಕಿನ 112 ಗ್ರಾಮಗಳಿಗೆ ಶುದ್ಧ ಹಾಗೂ ಶಾಶ್ವತ ಕುಡಿಯುವ ನೀರು ಪೂರೈಸಲು ವರದಿ ಸಲ್ಲಿಸಿದ್ದು, ಯೋಜನೆ ಜಾರಿಗೆ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ.
ಲಿಂಗಸ್ಗೂರು ಮತ್ತು ಮುದಗಲ್ ಪಟ್ಟಣಗಳ ಅಭಿವೃದ್ಧಿಗೆ ನಗರೋತ್ಥಾನ ಯೋಜನೆಯಡಿ ರಸ್ತೆ, ಚರಂಡಿ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಲಿಂಗಸ್ಗೂರು ನಗರದಲ್ಲಿ ಒಳಚರಂಡಿ ವ್ಯವಸ್ಥೆ ಹಾಗೂ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಒಪ್ಪಿಗೆ ದೊರೆತಿದ್ದು, ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದರು.
ತಾರತಮ್ಯ: ಹೈ.ಕ. ಭಾಗಕ್ಕೆ 371(ಜೆ) ತಿದ್ದುಪಡಿ ಜಾರಿಯಾಗಿದ್ದು, ಈ ಭಾಗದ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಉದ್ಯೋಗಾವಕಾಶದಲ್ಲಿ ಮೀಸಲಾತಿ ನೀಡುವಾಗ ತಾರತಮ್ಯ ನೀತಿ ಅನುಸರಿಸದೆನಿಗದಿ ಪಡಿಸಿದಂತೆ ಮೀಸಲಾತಿ ದೊರಯಬೇಕು. ಆಡಳಿತ ಪಕ್ಷದ ಶಾಸಕರ ಕ್ಷೇತ್ರಗಳಿಗೆ ವಸತಿ ಯೋಜನೆಯಡಿ 500 ಮನೆ ಮಂಜೂರು ಮಾಡಿದ್ದರೆ, ಪ್ರತಿಪಕ್ಷದ ಶಾಸಕರ ಕ್ಷೇತ್ರಕ್ಕೆ ಕೇವಲ 300 ಮನೆಗಳನ್ನು ನೀಡಿ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಅಲ್ಲದೆ ಕ್ಷೇತ್ರಕ್ಕೆ ಎಚ್‌ಕೆಡಿಬಿ ಅನುದಾನ 6 ಕೋಟಿ ಮಾತ್ರ ನೀಡಲಾಗಿದೆ ಎಂದು ಹೇಳಿದರು.
ಗ್ರಾನೈಟ್ ಅಕ್ರಮ ಗಣಿಗಾರಿಕೆ: ತಾಲೂಕಿನಲ್ಲಿ ಮುದಗಲ್ ಹಾಗೂ ಇನ್ನಿತರೆ ಕಡೆಗಳಲ್ಲಿ ಅಕ್ರಮ ಗ್ರಾನೈಟ್ ಗಣಿಗಾರಿಕೆ ಕುರಿತು ಸಮಗ್ರ ತನಿಖೆ ಕೈಗೊಂಡು ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಲೋಕಾಯುಕ್ತರು ತನಿಖೆ ನಡೆಸಿ ಅಕ್ರಮ ಗಣಿಗಾರಿಕೆ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ವೀರನಗೌಡ ಲೆಕ್ಕಿಹಾಳ, ಕಂಠೆಪ್ಪಗೌಡ, ಮಹಾಂತಗೌಡ, ಗೋವಿಂದ ನಾಯಕ ಸೇರಿದಂತೆ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.