ಸರ್ಕಾರದ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹ
ರಾಯಚೂರು: ಸರ್ಕಾರಿ ಭೂಮಿಯಲ್ಲಿ ನಿವೇಶನಗಳನ್ನು ನಿರ್ಮಿಸಿ ಮಾರಾಟಕ್ಕೆ ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದಲ್ಲಿ ರಾಯಚೂರು ಸರ್ಕಾರಿ ಭೂಮಿ ಉಳಿಸಿ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ, ನಗರದ ಸರ್ವೆ ನಂಬರ್ 33 ಬಾರ್ 1ರಲ್ಲಿ 39.22 ಎಕರೆ ಸರ್ಕಾರಿ ಪ್ರದೇಶವಿದ್ದು, ಈ ಭೂಮಿಯಲ್ಲಿ ನಿವೇಶನಗಳನ್ನು ತಯಾರಿಸಿ ಮಾರಾಟ ಮಾಡಲು ಭೂಕಬಳಿಕೆದಾರರು ಯತ್ನಿಸುತ್ತಿದ್ದಾರೆಂದು ಆರೋಪಿಸಿದರು.
ಭೂಗಳ್ಳರ ಪರ ಕೆಲಸ: ಈ ಕುರಿತು ಪೌರಾಯುಕ್ತರಿಗೆ 2013ರ ನ.8ರಂದು ದೂರು ಸಲ್ಲಿಸಲಾಗಿತ್ತು. ಆದರೆ ಕ್ರಮ ಕೈಗೊಳ್ಳದ ನಗರಸಭೆಯು ನಿವೇಶನಗಳಿಗೆ ಕಾಂಪೌಂಡ್ ನಿರ್ಮಿಸಿಕೊಳ್ಳಲು ಅವಕಾಶ ನೀಡಿದೆ. ಈ ಮೂಲಕ ನಗರಸಭೆ ಪೌರಾಯುಕ್ತರು ಭೂಗಳ್ಳರ ಪರ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ ಎಂದು ದೂರಿದರು.
ಸರ್ಕಾರದ ಅಧಿಕಾರಿಗಳು ಸರ್ಕಾರದ ಭೂಮಿಯ ಮಾರಾಟಕ್ಕೆ ಅವಕಾಶ ಕಲ್ಪಿಸುತ್ತಿದ್ದಾರೆ. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದವರು ಪೌರಾಯುಕ್ತರಿಗೆ 2014ರ ಜು.11ರಂದು ಪತ್ರ ಬರೆದು ನಿವೇಶನ ತಯಾರಿಸಿದವರು ತಪ್ಪು ದಾಖಲೆ ಒದಗಿಸಿ ಕಟ್ಟಡ ಪರವಾನಗಿ ಪಡೆದಿದ್ದಾರೆ ಎಂದು ಆರೋಪಿಸಿದರು.
ಸಂಬಂಧಿಸಿದ ದಾಖಲೆ ಪರಿಶೀಲಿಸಿದಾಗ ಅವರು ಸರ್ಕಾರಿ ಜಮೀನಿನಲ್ಲಿ ನಿವೇಶನ ರಚಿಸಿರುವುದು ಗೊತ್ತಾಗಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದೆ. ಆದರೆ ಪೌರಾಯುಕ್ತರು ಮಾತ್ರ ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.
ಕಾರಣ ಕೂಡಲೇ ಸಂಬಂಧಿಸಿದ ಸರ್ಕಾರಿ ಜಮೀನಿನ ರಕ್ಷಣೆಗೆ ಜಿಲ್ಲಾಡಳಿತ ಮುಂದಾಗಬೇಕು. ತಪ್ಪು ದಾಖಲೆ ಒದಗಿಸಿ ಸರ್ಕಾರಿ ಜಮೀನಿನಲ್ಲಿ ನಿವೇಶನ ತಯಾರಿಸಿ ಮಾರಾಟ ಮಾಡಲು ಮುಂದಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ನಕಲಿ ದಾಖಲೆಗಳ ಆಧಾರದಲ್ಲಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡಿದ ಪೌರಾಯುಕ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ತೆರವುಗೊಳಿಸಬೇಕು. ಭೂಸ್ವಾಧೀನಗೊಳಿಸಿಕೊಳ್ಳಬೇಕು. ಭೂಕಬಳಿಕೆದಾರರೊಂದಿಗೆ ಕೈಜೋಡಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಈ ಸಂದರ್ಭ ಸಂಘಟನೆಯ ಪ್ರಮುಖರಾದ ಚಂದ್ರಶೇಖರ್ ಭಂಡಾರಿ, ಖಲೀಲ್ ಪಾಷಾ, ಶ್ರೀನಿವಾಸ ಕೊಪ್ಪರ, ಅಬ್ದುಲ್ ಸತ್ತಾರ್, ತಿಮ್ಮಪ್ಪ ಮಲಿಯಾಬಾದ್, ಬಸಪ್ಪ, ರಾಮು, ಖಾಜಾ, ತಮ್ಮೇಶ್ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

