ಕಾಮಗಾರಿ ಅನುಷ್ಠಾನದಲ್ಲಿ ಅಕ್ರಮ
ಕ.ಪ್ರ. ವಾರ್ತೆ ರಾಯಚೂರು ಜೂ.4
ರಾಜ್ಯ ಸರ್ಕಾರದ ಹಲವು ಇಲಾಖೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆಗೆ ಸ್ಪಂದಿಸದ ಹಾಗೂ ಕಾನೂನು ಉಲ್ಲಂಘಿಸಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಧರಣಿ ನಡೆಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಧರಣಿ ನಡೆಸಿದ ಸಂಘಟನೆಯ ಕಾರ್ಯಕರ್ತರು ಆಡಳಿತಕ್ಕೆ ಮನವಿ ಸಲ್ಲಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ ಹಿತಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಆದರೆ ಅಂಥ ಯೋಜನೆಗಳ ಲಾಭ ಬಡವರಿಗೆ ದೊರೆಯುತ್ತಿಲ್ಲ. ಅಧಿಕಾರಿಗಳು ಅನುದಾನದ ದುರ್ಬಳಕೆ ಮಾಡಿಕೊಳ್ಳುತ್ತಿದ್ದು ಬಡವರಿಗೆ ಸೌಲಭ್ಯ ಮರೀಚಿಕೆಯಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಅನುದಾನ ಒದಗಿಸಿದೆ. ಆದರೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಆಸಕ್ತಿ ತೋರುತ್ತಿಲ್ಲ. ಪರಿಣಾಮ ಗ್ರಾಮೀಣ ಭಾಗದಲ್ಲಿನ ಜನತೆ ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೆ ತುತ್ತಾಗುವಂಥ ಸ್ಥಿತಿಯಿದೆ ಎಂದು ದೂರಿದರು.
ಅನುದಾನ ದುರ್ಬಳಕೆ: ಕುಡಿಯುವ ನೀರಿಗೆ ಮೀಸಲಿರಿಸಿದ ಅನುದಾನವನ್ನು ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡದೇ ದುರ್ಬಳಕೆ ಮಾಡಿಕೊಳ್ಳು ತ್ತಿದ್ದಾರೆ. ಸರ್ಕಾರಗಳು ಬಡವರಿಗೆ ಹಾಗೂ ವಸತಿ ರಹಿತರಿಗೆ ಮನೆಗಳನ್ನು ವಿವಿಧ ವಸತಿ ಯೋಜನೆಗಳಡಿ ಮಂಜೂರು ಮಾಡುತ್ತಿವೆ. ಆದರೆ ಕಾನೂನು ಗಾಳಿಗೆ ತೂರಿ ಅಧಿಕಾರಿಗಳು ಸ್ಥಿತಿವಂತರಿಗೆ ಅಂಥ ಮನೆಗಳನ್ನು ಹಂಚಿಕೆ ಮಾಡುತ್ತಿದ್ದಾರೆಂದು ಆರೋಪಿಸಿದರು.
ವಸತಿ ಯೋಜನೆಯಲ್ಲಿ ವಿವಿಧೆಡೆ ಅಕ್ರಮ ಎಸಗಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಮೇಲಧಿಕಾರಿಗಳು ಈ ನಿಟ್ಟಿನಲ್ಲಿ ಸಂಪೂರ್ಣ ವಿಫಲರಾಗಿದ್ದು, ಕೆರೆಗಳ ಪುನಶ್ಚೇತನ ಸೇರಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಭೂಸೇನಾ ನಿಗಮಕ್ಕೆ ವಹಿಸಿದ್ದು, ಕೆರೆಗಳ ಕಾಮಗಾರಿ ಕೈಗೊಳ್ಳದೇ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದೂರಿದರು.
ನಿಯಮ ಉಲ್ಲಂಘನೆ: ವಿಶೇಷ ಘಟಕ ಯೋಜನೆಗಳಡಿ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ ಜನಾಂಗದವರು ವಾಸವಾಗಿರುವ ಪ್ರದೇಶದಲ್ಲಿ ಕೈಗೊಳ್ಳುವಂತೆ ನಿಯಮವಿದ್ದರೂ ಅಧಿಕಾರಿಗಳು ಎಸ್ಸಿಗಳಿಲ್ಲದ ಪ್ರದೇಶದಲ್ಲಿ ಕೈಗೊಳ್ಳುವ ಮೂಲಕ ನಿಯಮ ಉಲ್ಲಂಘಿಸಿದ್ದಾರೆ. ಈ ಮೂಲಕ ಕಳಪೆ ಕಾಮಗಾರಿಗೂ ದಾರಿಯಾಗಿದ್ದು ಅನುದಾನದ ದುರ್ಬಳಕೆಯಾಗುತ್ತಿದೆ ಎಂದು ಟೀಕಿಸಿದರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಜವಾಹರ ನವೋದಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು, ಕೂಡಲೇ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳಡಿ ಅಕ್ರಮಗಳು ನಡೆದಿದ್ದು ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಖೊಟ್ಟಿ ಬಿಲ್ಗೆ ಜಿಪಂ ಸಿಇಇ ಕಾರಣ: ಜಿಪಂನ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ್ ಅವರು ಖೊಟ್ಟಿ ಬಿಲ್ಗಳನ್ನು ಬಳಸಲು ಅವಕಾಶ ನೀಡುತ್ತಿದ್ದು ಅವರನ್ನು ಆ ಹುದ್ದೆಯ ಪ್ರಭಾರದಿಂದ ಮುಕ್ತಿಗೊಳಿಸುವಂತೆ ಹೋರಾಟಗಾರರು ಒತ್ತಾಯಿಸಿದರು.
ಸಂಘಟನೆಯ ಪ್ರಮುಖರಾದ ಪ್ರಭುಲಿಂಗ ಮೇಗಳಮನಿ, ಲಕ್ಷ್ಮಣ ಕುರ್ಡಿ, ಶರಣಪ್ಪ ದಿನ್ನಿ, ಚಿದಾನಂದ ಅರೋಲಿ, ಯಂಕಪ್ಪ ಚಿತ್ತಾಪುರ, ಹನುಮಂತ ಅರೋಲಿ, ಈರಣ್ಣ ಕೆರೆಬೂದೂರುಸ ಹುಲಿಗೆಪ್ಪ ಅರೋಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

