ಬತ್ತ ಖರೀದಿ ಕೇಂದ್ರ ಆರಂಭಿಸಿ
ಲಿಂಗಸ್ಗೂರು: ನಾರಾಯಣಪುರ ಬಲದಂಡೆ ಹಾಗೂ ರಾಂಪೂರ ಏತನೀರಾವರಿ ಕಾಲುವೆಗಳ ವ್ಯಾಪ್ತಿಯ ಅಚ್ಚುಕಟ್ಟು ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಬೆಳೆದ ಬತ್ತಕ್ಕೆ ಸೂಕ್ತ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ ಹಾಗೂ ಖರೀದಿದಾರರಿಲ್ಲದೆ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು, ಸರ್ಕಾರ ಕೂಡಲೇ ಬತ್ತ ಖರೀದಿ ಕೇಂದ್ರ ಆರಂಭಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಒತ್ತಾಯಿಸಿದರು. ಸ್ಥಳೀಯ ಎಪಿಎಂಸಿ ಗೋದಾಮಿನಲ್ಲಿ ಸಹಾಯಕ ಆಯುಕ್ತ ಟಿ. ಯೋಗೇಶ್ ಒಣ ಕಡಲೆ ಕೇಂದ್ರ ಆರಂಭಕ್ಕೆ ಚಾಲನೆ ನೀಡಿದರು. ಈ ವೇಳೆ ರೈತ ಸಂಘದ ಅಮರಣ್ಣ ಗುಡಿಹಾಳ ಮಾತನಾಡಿ, ತಾಲೂಕಿನಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ರೈತರು ಬತ್ತ ಬೆಳೆದಿದ್ದಾರೆ. ರೈತರ ಹೋರಾಟಕ್ಕೆ ಮಣಿದ ಸರ್ಕಾರ ರಾಯಚೂರು, ಮಾನವಿ ಹಾಗೂ ಸಿಂಧನೂರಲ್ಲಿ ಮಾತ್ರ ಬತ್ತ ಖರೀದಿ ಕೇಂದ್ರ ಆರಂಭಿಸಿ ಲಿಂಗಸ್ಗೂರು ಹಾಗೂ ದೇವದುರ್ಗ ತಾಲೂಕನ್ನು ಕಡೆಗಣಿಸಿದೆ ಎಂದರು.
ಬೆಂಬಲ ಬೆಲೆ: ನಾರಾಯಣಪುರ ಬಲದಂಡೆ ಮತ್ತು ರಾಂಪೂರ ಅಚ್ಚುಕಟ್ಟು ಪ್ರದೇಶದಲ್ಲಿ ಬಿತ್ತನೆ ಮಾಡಿದ ಬತ್ತ ಸೂಕ್ತ ಬೆಂಬಲ ಬೆಲೆ, ಮಾರುಕಟ್ಟೆ ವ್ಯವಸ್ಥೆ, ಖರೀದಿದಾರರಿಲ್ಲದೆ ರೈತರ ಜಮೀನಿನಲ್ಲಿ ರಾಶಿ ರಾಶಿ ಹಾಗೆಯೇ ಉಳಿದಿವೆ. ರೈತರು ಹಗಲು ರಾತ್ರಿ ಎನ್ನದೆ ಬತ್ತ ಕಾಯುವ ಪರಿಸ್ಥಿತಿ ಬಂದೊದಗಿದೆ. ಕೂಡಲೇ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಬತ್ತ ಖರೀದಿ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಅಮರಣ್ಣ ಗುಡಿಹಾಳ ಅವರು 'ಕನ್ನಡಪ್ರಭ' ಪತ್ರಿಕೆಯಲ್ಲಿ ಸೋಮವಾರ ಪ್ರಕಟಗೊಂಡ 'ಕಣ್ಣೀರಲ್ಲಿ ಕೈತೊಳೆಯುತ್ತಿರುವ ಕಾಲುವೆ ಕೊನೆ ಭಾಗದ ರೈತರು' ಎಂಬ ವರದಿಯನ್ನು ಸ. ಆಯುಕ್ತರಿಗೆ ತೋರಿಸಿದರು. ಈ ವೇಳೆ ಪ್ರತಿಕ್ರಿಯಿಸಿದ ಸ. ಆಯುಕ್ತರು, ಅಧಿಕಾರಿಗಳು ಸಲ್ಲಿಸಿದ ಮಾಹಿತಿ ಪಡೆದು ಪುನರ್ಪರಿಶೀಲಿಸಿ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿ ಬತ್ತ ಖರೀದಿ ಕೇಂದ್ರ ಪ್ರಾರಂಭಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

