ರಾಯಚೂರು

ಸಂಘಟಿತ ಹೋರಾಟಕ್ಕೆ ಮುಂದಾಗಿ

Published On :

ರಾಯಚೂರು: ಮಹಿಳೆಯರ ಮೇಲಾಗುತ್ತಿರುವ ಅತ್ಯಾಚಾರ, ದೌರ್ಜನ್ಯ, ದಬ್ಬಾಳಿಕೆ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟಕ್ಕೆ ಮುಂದಾಗಬೇಕೆಂದು ಎಸ್‌ಎಸ್‌ಆರ್‌ಜಿ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ. ಶಕುಂತಲಾ ಗೋಪಿಶೆಟ್ಟಿ ಸಲಹೆ ನೀಡಿದರು.
ನಗರದ ಎಂಜಿನಿಯರ್ಸ್ ಕ್ಲಬ್‌ನಲ್ಲಿ ಇತ್ತೀಚೆಗೆ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಮಹಿಳೆಯರೇ ಮುಂದಾಗಬೇಕು.
  ಸುಸಂಸ್ಕೃತ ನಾಡಿನಲ್ಲಿ ಹೆಣ್ಣುಮಕ್ಕಳನ್ನು ದೇವರೆಂದು ಪೂಜಿಸಲಾಗುತ್ತಿತ್ತು. ಆದರೆ ದೇಶದಲ್ಲಿ ದಿನನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದಬ್ಬಾಳಿಕೆ, ದೌರ್ಜನ್ಯ, ಕಿರುಕುಳದಂತಹ ಘಟನೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.
ಮಹಿಳಾ ಹಕ್ಕು ಮೊಟಕು: ಮಹಿಳೆಯರು ಧಾರ್ಮಿಕ ಕಂದಾಚಾರ, ಮೌಢ್ಯದಲ್ಲಿ ನಲುಗುತ್ತಿದ್ದಾರೆ. ಧಾರ್ಮಿಕ ಮೌಢ್ಯತೆಗಳಿಂದ ಮಹಿಳೆಯರು ಹೊರಬಂದು ಹಕ್ಕಿಗಾಗಿ ಸಂಘಟಿತರಾಗಬೇಕಿದೆ. ಮೀಸಲಾತಿಗೆ ಅನುಗುಣವಾಗಿ ರಾಜಕೀಯದಲ್ಲಿ ಮಹಿಳೆಯರಿಗೆ ಸ್ಥಾನಮಾನ ನೀಡಿದ್ದರೂ, ಅಧಿಕಾರವನ್ನು ಪುರುಷರೇ ಚಲಾಯಿಸಿ ಮಹಿಳೆಯರ ಹಕ್ಕನ್ನು ಮೊಟಕುಗೊಳಿಸುತ್ತಿರುವುದು ವಿಷಾದದ ಸಂಗತಿ ಎಂದು ಟೀಕಿಸಿದರು.
ಕೃಷಿ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಡಾ. ಜಾಗೃತಿ ದೇಶಮಾನೆ ಮಾತನಾಡಿ, ದೇವರು, ಧರ್ಮ, ಮೂಢನಂಬಿಕೆಯಿಂದ ಮಹಿಳೆಯರು ಹೊರಬಂದು ಉದ್ಯೋಗ ಕ್ಷೇತ್ರದಲ್ಲಿ ಸಾಧನೆ ಮೆರೆಯಲು ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.
ಒಗ್ಗಟ್ಟಿನ ಹೋರಾಟ ಅಗತ್ಯ: ಕರ್ನಾಟಕ ರೈತ ಸಂಘದ ತಾಲೂಕಾಧ್ಯಕ್ಷ ಎಸ್.ರಾಜಶೇಖರ್ ಸುಲ್ತಾನ್‌ಪುರ ಮಾತನಾಡಿ, ಸಮಾಜದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಮಹಿಳೆಯರು ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗುವ ಮೂಲಕ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ಹಿಮ್ಮೆಟ್ಟಿಸಬೇಕೆಂದು ಹೇಳಿದರು.
 ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ನಾಗಲಿಂಗಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಲಲಿತಮ್ಮ ವಹಿಸಿದ್ದರು.
 ವೇದಿಕೆಯಲ್ಲಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಶಿವಮ್ಮ, ನೂರಜಹಾನ್ ಉಪಸ್ಥಿತರಿದ್ದರು.
  ನೂರಾರು ಮಹಿಳೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.