ರಾಯಚೂರು

14ರಂದು ಕರ್ನಾಟಕ- ಆಂಧ್ರ ಅಧಿಕಾರಿಗಳ ಸಭೆ

Published On :

ಕ.ಪ್ರ. ವಾರ್ತೆ    ರಾಯಚೂರು    ಮಾ.11
ಜಿಲ್ಲೆಯಲ್ಲಿ ಏ.17ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಆಂಧ್ರ ಮತ್ತು ಕರ್ನಾಟಕದ ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆಯನ್ನು ಆಂಧ್ರದ ಆದೋನಿಯಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಎಸ್ಪಿ ಎಂ.ಎನ್. ನಾಗರಾಜ್ ತಿಳಿಸಿದರು.
ಅವರು ನಗರದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿ, ಗುಲ್ಬರ್ಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ಆಂಧ್ರದೊಂದಿಗೆ ಗಡಿ ಹೊಂದಿರುವ ಕರ್ನಾಟಕದ ಜಿಲ್ಲೆಗಳಾದ ಬಳ್ಳಾರಿ, ರಾಯಚೂರು ಮತ್ತು ಆಂಧ್ರದ ಕರ್ನೂಲು, ಅನಂತಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆಂದರು.
ಚೆಕ್‌ಪೋಸ್ಟ್ ನಿರ್ಧಾರ: ಈ ಸಭೆಯಲ್ಲಿ ಚುನಾವಣೆ ಸಂದರ್ಭ ಎರಡೂ ರಾಜ್ಯಗಳ ಗಡಿ ಜಿಲ್ಲೆಗಳ ಪೊಲೀಸ್ ಇಲಾಖೆಯು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಹಣ ಹಾಗೂ ಮದ್ಯದ ಸಾಗಣೆ ತಡೆಯುವ ನಿಟ್ಟಿನಲ್ಲಿ ಗಡಿಯಲ್ಲಿ ಯಾವ ಯಾವ ಸ್ಥಳದಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಬೇಕೆಂಬ ವಿಷಯದ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುತ್ತದೆ. ಹಾಗೆಯೇ ತುರ್ತು ಸಂದರ್ಭ ಮಾಹಿತಿ ವಿನಿಯಮ ಕೈಗೊಳ್ಳುವ ಬಗ್ಗೆಯೂ ಚರ್ಚಿಸಲಾಗುವುದು ಎಂದು ಹೇಳಿದರು.
ಲೋಕಸಭೆ ಚುನಾವಣೆಯನ್ನು ಶಾಂತಿ ಮತ್ತು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಗಮನಹರಿಸುವಂತೆ ಎಲ್ಲ ಪೊಲೀಸ್ ಠಾಣೆಗಳಿಗೆ ಸೂಚಿಸಲಾಗಿದೆ. ಈಗಾಗಲೇ ಚುನಾವಣೆ ಸಿದ್ಧತೆಗೆ ಸಂಬಂಧಿಸಿ ಅಧಿಕಾರಿಗಳ ಸಭೆ ನಡೆಸಲಾಗಿದೆ. ಮಾ. 16ರಂದು ಮತ್ತೊಂದು ಸುತ್ತಿನ ಸಭೆ ನಡೆಸಿ ಅಗತ್ಯ ಸಲಹೆ, ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಅಕ್ರಮ ಗಣಿಗಾರಿಕೆ: ಲಿಂಗಸ್ಗೂರು ತಾಲೂಕಿನ ಮುದಗಲ್‌ನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ದಾಖಲಾಗಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು ಮುಂದಿನ ಕ್ರಮಕ್ಕಾಗಿ ಭೂಮಿಯ ಖಾತೆ ಸೇರಿ ಇನ್ನಿತರೆ ದಾಖಲೆಯನ್ನು ಪಡೆಯಬೇಕಾಗಿದೆ ಎಂದು ಹೇಳಿದರು. ಈ ಸಂದರ್ಭ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ ಸದಲಗಿ, ಡಿವೈಎಸ್ಪಿ ವಿ.ಬಿ. ಮಡಿವಾಳರ್, ಗ್ರಾಮೀಣ ವೃತ್ತ ಸಿಪಿಐ ಕೆ. ಬಸವರಾಜ ಇದ್ದರು.





Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.