ಡಿಸಿಯಿಂದ ಬೆಳೆ ಹಾನಿ ಗೊಂದಲ ಸೃಷ್ಟಿ; ಟೀಕೆ
ರಾಯಚೂರು: ಜಿಲ್ಲೆಯಲ್ಲಿ ಈಚೆಗೆ ಸುರಿದ ಅಕಾಲಿಕ ಮತ್ತು ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ಹಾನಿಯಾಗಿದೆ. ಆದರೆ ಜಿಲ್ಲಾಧಿಕಾರಿಗಳು ಬೆಳೆ ಹಾನಿ ಬಗ್ಗೆ ಮಾಹಿತಿಯಿಲ್ಲದೇ ಗೊಂದಲ ಸೃಷ್ಟಿಸುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಹಾನಿ ಕುರಿತು ಅವರೇ ಸ್ಥಳ ಪರಿಶೀಲಿಸಿ ಪರಿಹಾರ ಕಲ್ಪಿಸುವಂತೆ ಕರ್ನಾಟಕ ರೈತ ಸಂಘ ಆಗ್ರಹಿಸಿದೆ.
ಈ ಕುರಿತು ಸಂಘಟನೆ ಜಿಲ್ಲಾಧ್ಯಕ್ಷ ಕೆ. ನಾಗಲಿಂಗಸ್ವಾಮಿ ಪ್ರಕಟಣೆ ನೀಡಿ, ಜಿಲ್ಲೆಯ ಲಿಂಗಸ್ಗೂರು ಮತ್ತು ಸಿಂಧನೂರು ತಾಲೂಕಿನಲ್ಲಿ ಮಾತ್ರ ಬೆಳೆ ಹಾನಿಯಾಗಿದೆ. ಮಾನ್ವಿಯಲ್ಲಿ ಕೇವಲ ಮನೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿಕೆ ನೀಡಿರುವುದು ಜಿಲ್ಲೆಯಲ್ಲಿನ ಹಾನಿಯ ವಾಸ್ತವಾಂಶದ ಅಧ್ಯಯನದ ಕೊರತೆ ಪ್ರದರ್ಶಿಸಿದೆ ಎಂದು ಟೀಕಿಸಿದ್ದಾರೆ.
ರೈತರಲ್ಲಿ ಆತಂಕ: ಮಾನ್ವಿ ತಾಲೂಕಿನ ಸಿರವಾರ ಹೋಬಳಿಯಲ್ಲಿ ಸುಮಾರು 2ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ರೈತರು ಬೆಳೆದ ಬತ್ತದ ಬೆಳೆಗೆ ಅಕಾಲಿಕ ಮಳೆಯಿಂದ ಹಾನಿಯಾಗಿದೆ ಎಂಬುದನ್ನು ಸಂಬಂಧಪಟ್ಟ ತಮ್ಮ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆಯದಿರುವುದು ರೈತರಲ್ಲಿ ಆತಂಕಕ್ಕೆ ದಾರಿ ಮಾಡಿದೆ ಎಂದು ಆರೋಪಿಸಿದರು.
ಬೇಜವಾಬ್ದಾರಿ: ಮಾನ್ವಿ ತಾಲೂಕಿನ ಸಿರವಾರ ಹೋಬಳಿಯ ಕಡದಿನ್ನಿ, ಚಾಗಬಾವಿ, ಜಂಬಲದಿನ್ನಿ, ಬಲ್ಲಟಗಿ ಸೇರಿ ಇನ್ನೂ ಅನೇಕ ಹಳ್ಳಿಗಳಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆಹಾನಿಯಾಗಿರುವ ಬಗ್ಗೆ ಈಗಾಗಲೇ ಸಂಘಟನೆಯು ಮಾ.12 ಮತ್ತು ಮಾ.15ರಂದು ಹೋರಾಟದ ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದೆ. ಆದರೂ ಮಾನ್ವಿಯಲ್ಲಿ ಬೆಳೆ ಹಾನಿಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿಕೆ ನೀಡಿರುವುದು ಬೇಜವಾಬ್ದಾರಿತನ ಎಂದು ಟೀಕಿಸಿದರು.
ಮಾನ್ವಿ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ಬೆಳೆ ನಷ್ಟ ಸಂಭವಿಸಿದ್ದರೂ, ವರದಿ ನೀಡದೇ ನಿರ್ಲಕ್ಷ್ಯ ವಹಿಸಿರುವ ಮಾನ್ವಿ ತಹಸೀಲ್ದಾರ, ಸಿರವಾರ ನಾಡ ತಹಸೀಲ್ದಾರರು ಮತ್ತು ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳೆಹಾನಿ ಪ್ರದೇಶಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲು ಮುಂದಾಗಬೇಕೆಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

