ಕಡಿಮೆ ಮತದಾನದ ಮತಗಟ್ಟೆ ವ್ಯಾಪ್ತಿಯಲ್ಲಿ 29ರಿಂದ ಜಾಗೃತಿ: ಡಿಸಿ
ರಾಯಚೂರು: ಜಿಲ್ಲೆಯಲ್ಲಿ ಮಾ.29ರ ನಂತರ ಕಳೆದ ಚುನಾವಣೆ ವೇಳೆ ಕಡಿಮೆ ಮತದಾನ ದಾಖಲಿಸಿದ್ದ ಮತಗಟ್ಟೆ ಕೇಂದ್ರಗಳ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜು ಹೇಳಿದರು.
ನಗರದಲ್ಲಿ ಶನಿವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಚುನಾವಣೆಯಲ್ಲಿ ಕೆಲ ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ತೀರಾ ಕಡಿಮೆಯಾಗಿತ್ತು. ಅಂಥ ಮತಗಟ್ಟೆಗಳ ವ್ಯಾಪ್ತಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡ ನಂತರದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು.
ಮತದಾರರ ಜಾಗೃತಿ ಕಾರ್ಯಕ್ರಮ ಚುರುಕುಗೊಳಿಸಲಾಗಿದೆ. ಶಾಲಾ- ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳ ಜತೆಗೂಡಿ ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಶಾಲಾ- ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಂಘ- ಸಂಸ್ಥೆಗಳು ಜಾಗೃತಿ ಜಾಥಾ ನಡೆಸುತ್ತಿವೆ ಎಂದು ತಿಳಿಸಿದರು.
ಮತದಾನ ಶಾಂತಿಯುತವಾಗಿ ನಡೆಯುವಂತೆ ಜಿಲ್ಲಾಡಳಿತ ಎಲ್ಲ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಇದುವರೆಗೆ ನೀತಿ ಸಂಹಿತೆ ಉಲ್ಲಂಘನೆಯ 3 ಪ್ರಕರಣ ದಾಖಲಿಸಲಾಗಿದೆ. ಅಮರೇಶ್ವರ ಜಾತ್ರೆಯಲ್ಲಿ ಅನುಮತಿಯಿಲ್ಲದೇ ರಾಜಕೀಯ ಪಕ್ಷದ ಬ್ಯಾನರ್ ಅಳವಡಿಸಿದ್ದು ಪ್ರಕರಣ ದಾಖಲಿಸಲಾಗಿದೆ. ಅದೇ ರೀತಿ ನಗರದ ಎರಡು ದೇವಸ್ಥಾನಗಳಲ್ಲಿ ಕಾರ್ಯಕರ್ತರಿಗೆ ಉಣ ಬಡಿಸಿದ್ದಕ್ಕೆ ನೀತಿ ಸಂಹಿತೆ ಕೇಸ್ ದಾಖಲಿಸಲಾಗಿದೆ ಎಂದು ಹೇಳಿದರು.
ಅಕ್ರಮ ಮದ್ಯ: ಲಿಂಗಸ್ಗೂರು ತಾಲೂಕಿನ ಮುದಗಲ್ ಪಟ್ಟಣದ ಬಳಿ ವಾಹನವೊಂದರಲ್ಲಿ ಸಾಗಿಸುತ್ತಿದ್ದ ಐದು ಬಾಕ್ಸ್ ಅಕ್ರಮ ಮದ್ಯ ಜಪ್ತಿ ಮಾಡಿದ್ದು, ವಾಹನ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಮುದಗಲ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅದೇ ರೀತಿ ಅನಧಿಕೃತವಾಗಿ ಮದ್ಯ ಮತ್ತು ಹಣ ಸಾಗಣೆಗೆ ತಪಾಸಣೆ ಮೂಲಕ ಕಡಿವಾಣ ಹಾಕಲಾಗುತ್ತಿದೆ ಎಂದು ಹೇಳಿದರು.
ಕೋರಿಕೆ: ನಗರಸಭೆಯ ತಡೆರಹಿತ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿಯಲ್ಲಿ ನಡೆದ ಅಕ್ರಮದಲ್ಲಿ ಶಾಮೀಲಾಗಿರುವ ಬಗ್ಗೆ ಪ್ರಕರಣದಲ್ಲಿ ಹೆಸರಿಸಲಾಗಿರುವ ಎಡಿಸಿ ಎಂ. ತಿಮ್ಮಪ್ಪ ಅವರು ಜಾಮೀನು ಪಡೆದಿದ್ದು, ಪುನಃ ಕರ್ತವ್ಯಕ್ಕೆ ಹಾಜರಾಗುವ ಬಗ್ಗೆ ಕೋರಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಚುನಾವಣೆ ಆಯೋಗಕ್ಕೆ ಪತ್ರ ಬರೆದು ಮಾರ್ಗದರ್ಶನಕ್ಕೆ ಕೋರಿಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕಾನೂನು ವಿರೋಧಿಗಳ ವಿರುದ್ಧ ಕ್ರಮ: ಜಿಲ್ಲೆಯಲ್ಲಿ ಕಾನೂನು ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ 7 ಜನರ ಗಡಿಪಾರಿಗೆ ಪ್ರಸ್ತಾವನೆಯಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಚುನಾವಣೆಯನ್ನು ಶಾಂತಿಯುತ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
'ಜೆಡಿಎಸ್ ಅಭ್ಯರ್ಥಿ ಗೆಲವಿಗೆ ಶ್ರಮಿಸಿ'
ರಾಯಚೂರು: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲವಿಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಮುಂದಾಗಬೇಕೆಂದು ಜೆಡಿಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಾ ವೆಂಕಟಪ್ಪ ನಾಯಕ ಕರೆ ನೀಡಿದರು. ಮಾನವಿ ಪಟ್ಟಣದ ತಮ್ಮ ನಿವಾಸದಲ್ಲಿ ಈಚೆಗೆ ಜೆಡಿಎಸ್ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

