ಚುನಾವಣೆ ಬಳಿಕ ಸಿದ್ದುಗೆ ಸಂಕಷ್ಟ
ಕ.ಪ್ರ. ವಾರ್ತೆ ರಾಯಚೂರು ಮಾ.26
ಕೇಂದ್ರದ ಯುಪಿಎ ಸರ್ಕಾರದ ದುರಾಡಳಿತದಿಂದ ಬೇಸತ್ತಿರುವ ಮತದಾರರು ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪಾಠ ಕಲಿಸಲಿದ್ದು, ಅದರಿಂದ ರಾಜ್ಯದಲ್ಲಿ ಸಹ ಸರ್ಕಾರದಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದರು.
ನಗರದಲ್ಲಿ ಬುಧವಾರ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವು ಒಡೆದ ಮನೆಯಾಗಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ಅವರದ್ದೇ ಪಕ್ಷದವರಿಂದ ಸಾಥ್ ದೊರೆಯುತ್ತಿಲ್ಲ. ಪಕ್ಷದಲ್ಲಿ ನಾಲ್ಕೈದು ಗುಂಪುಗಳಾಗಿದ್ದು, ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಲಣೆಗಳಾಗಲಿವೆ ಎಂದರು.
ಸಿಎಂ ಭಾಷೆ ಶೋಭೆ ತಾರದು: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಲೆ ಮತ್ತು ಕೇಂದ್ರದ ಯುಪಿಎ ಸರ್ಕಾರದ ದುರಾಡಳಿತದ ಪರಿಣಾಮ ಎಲ್ಲೆಡೆ ಬಿಜೆಪಿ ಪರ ಮತದಾರರ ಒಲವು ಕಂಡುಬಂದಿದೆ. ರಾಜ್ಯದಲ್ಲಿ ಸಹ ಬಿಜೆಪಿ 20ಕ್ಕೂ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಲಿದೆ ಎಂದ ಅವರು, ನರೇಂದ್ರ ಮೋದಿ ಅವರನ್ನು ರಾಜ್ಯದ ಸಿಎಂ ಸಿದ್ದರಾಮಯ್ಯ ನರಹಂತಕ ಎಂದಿರುವುದು ಅವರ ಸ್ಥಾನಕ್ಕೆ ಶೋಭೆ ತರುವಂಥದ್ದಲ್ಲ ಎಂದರು.
ಬೆಳಗಾವಿ ಅಧಿವೇಶನದ ಸಮಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸದ್ದಕ್ಕೆ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ರೈತರ ಆತ್ಮಹತ್ಯೆಗೆ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹಂತಕ ಎಂದು ಟೀಕಿಸಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 10 ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗುತ್ತಿಲ್ಲ. ಬಿಜೆಪಿ ಸರ್ಕಾರ ಕಳೆದ ಅವಧಿಗೆ ಜಾರಿಗೆ ತಂದಿದ್ದ ಅಭಿವೃದ್ಧಿ ಯೋಜನೆಗಳನ್ನೂ ಕೈಬಿಡಲಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ಯೋಜನೆ ಜಾರಿಗೆ ನಿರಾಸಕ್ತಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ವಿವಿಧ 43 ಪಟ್ಟಣಗಳನ್ನು ತಾಲೂಕು ಕೇಂದ್ರಗಳನ್ನಾಗಿ ಘೋಷಿಸಲು ನಿರ್ಧರಿಸಲಾಗಿತ್ತು. ಆ ಕುರಿತು ಪ್ರಕಟಿಸಿ ಅನುದಾನ ಒದಗಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಂಥ ಎಲ್ಲ ತೀರ್ಮಾನಗಳ ಜಾರಿಗೆ ಆಸಕ್ತಿ ತೋರುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ತಾಲೂಕು ಕೇಂದ್ರಗಳ ಘೋಷಣೆ ಬಗ್ಗೆ ಬಜೆಟ್ನಲ್ಲಿ ವಿಷಯ ಪ್ರಸ್ತಾಪಿಸಿಲ್ಲ ಎಂದು ದೂರಿದರು.
ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ರಾಜ್ಯ ಚುನಾವಣೆ ಸಮಿತಿಯು ವರಿಷ್ಠರಿಗೆ ಕಳಿಸಿದ ಪಟ್ಟಿಯಲ್ಲಿ ಬೀದರ್ ಕ್ಷೇತ್ರಕ್ಕೆ ಸೂರ್ಯಕಾಂತ ನಾಗಮಾರಪಳ್ಳಿ ಅವರ ಹೆಸರಿತ್ತು. ಆದರೆ ವರಿಷ್ಠರು ಈ ಕುರಿತು ಅಂತಿಮ ನಿರ್ಧಾರ ಕೈಗೊಂಡಿದ್ದು ಅಭ್ಯರ್ಥಿಯನ್ನು ಬದಲಿಸಲಾಗಿದೆಯೇ ವಿನಾ ಈ ನಿಟ್ಟಿನಲ್ಲಿ ತಮ್ಮ ವಿರುದ್ಧ ಗುರುಪಾದಪ್ಪ ನಾಗಮಾರಪಳ್ಳಿ ಅವರು ಆರೋಪದಲ್ಲಿ ಹುರುಳಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಬಾರಿ ಬಿಜೆಪಿ ಅಧಿಕಾರಕ್ಕೆ: ದೇಶದಲ್ಲಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಲೆ ಎಂಬುದೇ ಭ್ರಮೆ ಎಂದು ವಿರೋಧಿಗಳು ಹೇಳುತ್ತಿರುವುದು ಹಾಸ್ಯಾಸ್ಪದ. ಅಲೆಯಿಲ್ಲ ಎಂದಾದರೆ ಪ್ರತಿಪಕ್ಷಗಳು ಆ ಕುರಿತು ಚರ್ಚಿಸುತ್ತಿರುವುದೇಕೆ ಎಂದು ಪ್ರಶ್ನಿಸಿದ ಅವರು, ಮತದಾರರು ಈ ಬಾರಿ ಬದಲಾವಣೆ ಬಯಸಿದ್ದು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಆಡ್ವಾಣಿ, ಜಸ್ವಂತ್ ಸಿಂಗ್ ಅವರನ್ನು ಮೂಲೆಗುಂಪು ಮಾಡಲಾಗಿದೆ ಎಂಬ ಆರೋಪ ಸರಿಯಲ್ಲ. ಕಳೆದ ಅನೇಕ ಚುನಾವಣೆಗಳಲ್ಲಿ ಆಡ್ವಾಣಿ ಅವರು ಗಾಂಧಿನಗರದ ಕ್ಷೇತ್ರದಿಂದಲೇ ಆಯ್ಕೆಯಾಗಿದ್ದು ಅವರು ಅಲ್ಲಿಂದಲೇ ಸ್ಪರ್ಧಿಸಿ ಗೆಲವು ಕಾಣಲೆಂಬ ಉದ್ದೇಶದಿಂದ ಗಾಂಧಿನಗರ ಕ್ಷೇತ್ರಕ್ಕೆ ಅವರು ಕಣಕ್ಕಿಳಿಯಬೇಕೆಂಬುದು ಸಂಸದೀಯ ಸಮಿತಿಯ ನಿರ್ಧಾರವಾಗಿದೆ ಎಂದು ಹೇಳಿದರು.
ತಾರತಮ್ಯ ಮಾಡಿಲ್ಲ: ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಗೆ ಸಂಬಂಧಿಸಿ ಸಂಸದೀಯ ಮಂಡಳಿಯ ನಿರ್ಧಾರದಂತೆ ಹೆಸರು ಅಂತಿಮಗೊಳಿಸಲಾಗಿದೆ. ಇದರಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸನಗೌಡ ಬ್ಯಾಗವಾಟ್, ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ, ಶಾಸಕರಾದ ತಿಪ್ಪರಾಜು, ಹಾಲಪ್ಪ ಆಚಾರ್, ತ್ರಿವಿಕ್ರಮ್ ಜೋಷಿ, ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

